ತುಮಕೂರು ಮತ್ತು ಚಿತ್ರದುರ್ಗದಲ್ಲಿ ಭೀಕರ ರಸ್ತೆ ಅಪಘಾತ: ನಾಲ್ವರ ದುರ್ಮರಣ
ತುಮಕೂರು/ಚಿತ್ರದುರ್ಗ: ರಾಜ್ಯದ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಇಂದು ಸಂಭವಿಸಿದ ಎರಡು ಪ್ರತ್ಯೇಕ ಭೀಕರ ರಸ್ತೆ ಅಪಘಾತಗಳಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ತುಮಕೂರು ಬಳಿ ಕೆಎಸ್ಆರ್ಟಿಸಿ– ಖಾಸಗಿ ಬಸ್ ಡಿಕ್ಕಿ:
ತುಮಕೂರು ಜಿಲ್ಲೆಯ ಶಿರಾ ಹೊರವಲಯದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ (NH–48) ರಸ್ತೆ ಬದಿ ನಿಂತಿದ್ದ ಖಾಸಗಿ ಬಸ್ಗೆ ಹಿಂದಿನಿಂದ ಬಂದ ಕೆಎಸ್ ಆರ್ ಟಿಸಿ (KSRTC) ಬಸ್ ಅತೀ ವೇಗವಾಗಿ ಬಂದು ಡಿಕ್ಕಿ ಹೊಡೆದಿದೆ. ಈ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಡಿಕ್ಕಿಯ ರಭಸಕ್ಕೆ ಕೆಎಸ್ಆರ್ಟಿಸಿ ಬಸ್ನಲ್ಲಿದ್ದ ಹತ್ತಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿದ್ದು, ಅವರನ್ನು ತಕ್ಷಣ ಶಿರಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಇಡೀ ಘಟನೆಯ ದೃಶ್ಯವು ಹಿಂದಿನಿಂದ ಬರುತ್ತಿದ್ದ ಮತ್ತೊಂದು ಬಸ್ ನ ಡ್ಯಾಶ್ ಕ್ಯಾಮ್ ನಲ್ಲಿ ಸೆರೆಯಾಗಿದ್ದು, ನೋಡಲು ಅತ್ಯಂತ ಭಯಾನಕವಾಗಿದೆ.
ಚಿತ್ರದುರ್ಗದಲ್ಲಿ ಲಾರಿ — ಕಾರು ಮುಖಾಮುಖಿ ಡಿಕ್ಕಿ:
ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ರಾಜಾಪುರ ಬಳಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಬೆಂಗಳೂರು ಕಡೆಯಿಂದ ಬಳ್ಳಾರಿ ಕಡೆಗೆ ತೆರಳುತ್ತಿದ್ದ ಕಾರು, ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ದಾಟಿ ಎದುರಿನಿಂದ ಬರುತ್ತಿದ್ದ ಲಾರಿಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಈ ಘಟನೆಯಲ್ಲಿ ಬೆಂಗಳೂರು ಮೂಲದ ರವಿಚಂದ್ರ (40) ಮತ್ತು ಸಂತೋಷ್ (25) ಎಂಬುವವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಸ್ಥಳಕ್ಕೆ ರಾಂಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅತೀ ವೇಗ ಮತ್ತು ಅಜಾಗರೂಕ ಚಾಲನೆಯೇ ಈ ಅಪಘಾತಗಳಿಗೆ ಪ್ರಾಥಮಿಕ ಕಾರಣ ಎಂದು ತಿಳಿದುಬಂದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD























