ಫೇಸ್ ಬುಕ್, ವಾಟ್ಸಾಪ್, ಟ್ವಿಟ್ಟರ್ ನಲ್ಲಿ ಪ್ರಚೋದನಾಕಾರಿ ಸಂದೇಶ ಹರಡಿದರೆ ಕ್ರಮ: ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ

udupi
04/08/2022

ಉಡುಪಿ: ನೆರೆಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಒಂದಷ್ಟು ಮಂದಿ ಪ್ರಚೋದನಕಾರಿ ಹೇಳಿಕೆಗಳನ್ನು ಹಾಕುತ್ತಿರುವ ಕುರಿತು ಉಡುಪಿ ಜಿಲ್ಲಾ ಪೊಲೀಸ್ ಗಂಭೀರವಾಗಿ ಪರಿಗಣಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ರೀತಿಯ ಪ್ರಚೋದನಾಕಾರಿ ಸಂದೇಶ ಅಥವಾ ಹೇಳಿಕೆಗಳನ್ನು ಹಾಕಿದಲ್ಲಿ ಅಂತವರ ವಿರುದ್ದ ಕಾನೂನು ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ ಹೇಳಿದ್ದಾರೆ.

ಫೇಸ್ ಬುಕ್, ವಾಟ್ಸಾಪ್, ಟ್ವಟರ್ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಕಾನೂನು ಸುವ್ಯವಸ್ಥೆ, ಶಾಂತಿ ಸುವ್ಯವಸ್ಥೆಗೆ, ಕೋಮು ಸೌಹಾರ್ದತೆಗೆ ಧಕ್ಕೆ ತರುವಂತಹ ಹಾಗೂ ಪರಸ್ಪರ ಗುಂಪಿನ ನಡುವೆ ದ್ವೇಷ ಭಾವನೆ ಬರುವಂತಹ ಪ್ರಚೋದನಕಾರಿ ಹೇಳಿಕೆ (ಪೋಸ್ಟ್) ಗಳನ್ನು ಹಾಕುವವರ/ಫಾರ್ವರ್ಡ್ ಮಾಡುವವರ ವಿರುದ್ದವೂ ಕಾನೂನು ರೀತಿಯ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

ವಾಟ್ಸಪ್, ಗ್ರೂಪ್ ಅಡ್ಮಿನ್ ಗಳು ಬಳಕೆದಾರರು ಹಾಗೂ ಸಂದೇಶಗಳನ್ನು ಫಾರ್ವರ್ಡ್ ಮಾಡುವವರು ಸೂಕ್ತ ಎಚ್ಚರಿಕೆಯನ್ನು ವಹಿಸಬೇಕು ಹಾಗೂ ವಾಟ್ಸಾಪ್ ಗ್ರೂಪ್ ಅಡ್ಮಿನ್ ಗಳು ತಮ್ಮ ಗುಂಪಿನ ಸದಸ್ಯರಿಗೆ ಸೂಕ್ತ ತಿಳುವಳಿಕೆ ನೀಡಬೇಕು ಎಂದು ಅವರು ಹೇಳಿದ್ದಾರೆ.

ಸಂಘಟನೆ, ವ್ಯಕ್ತಿಗಳು ಸೇರಿದಂತೆ ಸಾಮಾಜಿಕ ಜಾಲ ತಾಣದಲ್ಲಿ ಸಕ್ರಿಯವಾಗಿರುವ ನಾನಾ ವ್ಯಕ್ತಿಗಳು, ಗುಂಪುಗಳ ಮೇಲೆ ಕಠಿಣ ನಿಗಾ ಇರಿಸಲಾಗಿದೆ. ಆನ್ಲೈನ್ ಮಾಧ್ಯಮ, ವೆಬ್ ಪೇಜ್, ಮುದ್ರಣ ಮಾಧ್ಯಮ ಮೇಲೂ ನಿಗಾ ವಹಿಸಲಾಗಿದೆ ಎಂದು ಅವರು ತಿಳಿಸಿದರು.

ಸಾಮಾಜಿಕ ಜಾಲತಾಣಗಳ ಮೂಲಕ ಕೋಮು ಭಾವನೆ ಸೃಷ್ಟಿಸಿ, ಜಾತಿ ಧರ್ಮಗಳ ನಡುವೆ ಸಂಘರ್ಷಕ್ಕೆ ಎಡೆ ಮಾಡಿಕೊಡುವ ಫೋಸ್ಟ್ ಗಳ ಮೇಲೆ ನಿಗಾ ವಹಿಸಲಾಗುತ್ತಿದ್ದು, ಇಂತಹ ಪೋಸ್ಟ್ ಗಳನ್ನು ಲೈಕ್, ಶೇರ್, ಫಾರ್ವಡ್ ಹಾಗೂ ಆಕ್ಷೇಪಾರ್ಹವಾಗಿ ಕಮೆಂಟ್ ಮಾಡುವವರ ವಿರುದ್ಧವೂ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.

ಯಾರೇ ಆದರೂ ವಿವಾದಾತ್ಮಕ ಪೋಸ್ಟರ್, ಪ್ರಚೋದನಾಕಾರಿ ಹೇಳಿಕೆ, ಗುಂಪುಗಾರಿಕೆ, ಗಲಾಟೆ ಮಾಡಿ ಸಮಾಜದ ಶಾಂತಿ, ನೆಮ್ಮದಿಗೆ ಭಂಗ ತರುವುದು ಕಂಡು ಬಂದಲ್ಲಿ ಸಂಬಂಧಪಟ್ಟ ಪೋಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಕೋರಲಾಗಿದೆ ಎಂದು ಅವರು ಹೇಳಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

 

ಇತ್ತೀಚಿನ ಸುದ್ದಿ

Exit mobile version