ಮಾರಾಮಾರಿ: ಹುಲಿವೇಷ ತಂಡಗಳ ಯುವಕರ ನಡುವೆ ಹೊಡೆದಾಟ, ಚೂರಿ ಇರಿತ

police
27/10/2023

ಮಂಗಳೂರು: ಎರಡು ತಂಡಗಳ ನಡುವೆ ಜಗಳ ನಡೆದು ಮೂವರು ಯುವಕರು ಚೂರಿ ಇರಿತಕ್ಕೊಳಗಾಗಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೆಲ್ಕಾರ್ ನಲ್ಲಿ ನಡೆದಿದೆ.

ದೇವದಾಸ್, ಸಂದೀಪ್ ಮತ್ತು ಶಂಕರ್ ಚೂರಿ ಇರಿತಕ್ಕೊಳಗಾದವರು. ಬೋಳಂಗಡಿ ನಿವಾಸಿ ಶೋಧನ್, ಕಲ್ಲಡ್ಕ ನಿವಾಸಿ ಯತೀಶ್, ಮೆಲ್ಕಾರ್ ನಿವಾಸಿಗಳಾದ ಚೇತನ್, ಪ್ರಸನ್ನ, ಪ್ರದೀಪ್ ಮತ್ತು ಪ್ರಕಾಶ್ ಅವರ ತಂಡ ಈ ಕೃತ್ಯ ಎಸಗಿದೆ ಎಂದು ಗಾಯಾಳುಗಳು ಬಂಟ್ವಾಳ ನಗರ ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಪಾಣೆಮಂಗಳೂರು ಶಾರದೋತ್ಸವ ಮೆರವಣಿಗೆ ವೇಳೆ ಎರಡು ತಂಡಗಳ ನಡುವೆ ನಡೆದ ಗಲಾಟೆಯ ಮುಂದುವರಿದ ಭಾಗವಾಗಿ ಗುರುವಾರ ರಾತ್ರಿ ಇತ್ತಂಡಗಳ ನಡುವೆ ಹೊಡೆದಾಟ, ಚೂರಿ ಇರಿತ ನಡೆದಿದೆ ಎನ್ನಲಾಗಿದೆ.

ಕೆಲ ವರ್ಷಗಳ ಹಿಂದೆ ಜೊತೆಯಾಗಿ ಹುಲಿ ವೇಷ ಹಾಕಿ ಶಾರದಾ ವಿಸರ್ಜನೆ ಮೆರವಣಿಗೆಯಲ್ಲಿ ಹೆಜ್ಜೆ ಹಾಕುತ್ತಿದ್ದ ಯುವಕರ ತಂಡವು ಯಾವುದೋ ವಿಚಾರಕ್ಕೆ ಇಬ್ಭಾಗವಾಗಿದ್ದು, ಇದೀಗ ಪ್ರತ್ಯೇಕ ಹುಲಿ ವೇಷ ತಂಡಗಳನ್ನು ಕಟ್ಟಿಕೊಂಡಿದೆ. ಶಾರದಾ ವಿಸರ್ಜನೆ ವೇಳೆ ಮೆರವಣಿಗೆಯಲ್ಲಿ ಈ ಎರಡು ತಂಡಗಳ ನಡುವೆ ಹೊಡೆದಾಟ ನಡೆದಿತ್ತು. ಅದರ ಮುಂದುವರಿದ ಭಾಗವಾಗಿ ನಿನ್ನೆ ಮೆಲ್ಕಾರ್ ಜಂಕ್ಷನ್ ನಲ್ಲಿ ಒಂದು ತಂಡದ ಸದಸ್ಯರು ಬ್ಯಾನರ್ ತೆರವು ಮಾಡುತ್ತಿದ್ದ ವೇಳೆ ಇನ್ನೊಂದು ತಂಡ ಸ್ಥಳಕ್ಕೆ ಬಂದು ಹಲ್ಲೆ ನಡೆಸಿ, ಚೂರಿಯಿಂದ ಇರಿದು ಪರಾರಿಯಾಗಿದೆ ಎಂದು ಆರೋಪಿಸಲಾಗಿದೆ.

ಗಾಯಾಳುಗಳಿಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬಂಟ್ವಾಳ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

Exit mobile version