ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್ ಐಆರ್ ದಾಖಲು: ಸಿಎಂ ವಿರುದ್ಧ ಅವಹೇಳನಾಕಾರಿ ಹೇಳಿಕೆ ಆರೋಪ

ಮೈಸೂರು: ಹುಣಸೂರಿನಲ್ಲಿ ನಡೆದ ಹನುಮ ಜಯಂತಿ ಕಾರ್ಯಕ್ರಮದಲ್ಲಿ ಸಂಸದ ಪ್ರತಾಪ್ ಸಿಂಹ, “ಸೋಮಾರಿ ಸಿದ್ದ” ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಾಕಾರಿ ಪದ ಬಳಕೆ ಮಾಡಿದ್ದು, ಈ ಸಂಬಂಧ . ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 504 , 153ರ ಅಡಿಯಲ್ಲಿ ಪೊಲೀಸರು ಎಫ್ ಐಆರ್ ದಾಖಲಿಸಿಕೊಂಡಿದ್ದಾರೆ.
ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸರಿಗೆ ದೂರು ನೀಡಿದ್ದಾರೆ, ಸಂಸದ ಪ್ರತಾಪ್ ಸಿಂಹ ತಮ್ಮ ಭಾಷಣದಲ್ಲಿ ಸಿಎಂ ಸಿದ್ದರಾಮಯ್ಯ ಜಾತಿ ಜಾತಿಗಳ ನಡುವೆ ದ್ವೇಷ ಹರಡುತ್ತಿದ್ದಾರೆಂದು ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಕಾಂಗ್ರೆಸ್ ಕಾರ್ಯಕರ್ತರು, ನಿನ್ನೆ ರಾತ್ರಿ ಪ್ರತಾಪ್ ಸಿಂಹ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಪೊಲೀಸರು ಎಫ್ ಐಆರ್ ದಾಖಲಿಸುವ ಭರವಸೆ ನೀಡಿದ್ದರಿಂದ ಪ್ರತಿಭಟನೆ ಹಿಂಪಡೆದುಕೊಳ್ಳಲಾಗಿದೆ.
ಪ್ರತಾಪ್ ಸಿಂಹರಿಂದ ಹಿಂದು ಮತ್ತು ಮುಸ್ಲಿಂ ನಡುವೆ ಕೋಮು ಗಲಭೆ ಸೃಷ್ಟಿಸಲು ನಿರಂತರ ಪ್ರಯತ್ನ ನಡಿತಾ ಇದೆ ಎಂದು ಮೈಸೂರು ಗ್ರಾಮಾಂತರ ಕಾಂಗ್ರೆಸ್ ಅಧ್ಯಕ್ಷ ಬಿ.ಜೆ ವಿಜಯಕುಮಾರ್ ಲಿಖಿತ ದೂರು ನೀಡಿದ್ದರು. ಅವರು ನೀಡಿರುವ ದೂರಿನ ಪ್ರಕಾರ ದೇವರಾಜ್ ಪೊಲೀಸ್ ಠಾಣೆಯಲ್ಲಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್ಐಆರ್ ದಾಖಲಾಗಿದೆ.