ಪಟಾಕಿ ಗೋದಾಮು ದುರಂತ ಸೂಕ್ತ ತನಿಖೆಯಾಗಲಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ - Mahanayaka

ಪಟಾಕಿ ಗೋದಾಮು ದುರಂತ ಸೂಕ್ತ ತನಿಖೆಯಾಗಲಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

cm bommai
30/08/2023


Provided by

ಬೆಂಗಳೂರು: ಹಾವೇರಿ ತಾಲೂಕಿನ ಆಲದಕಟ್ಟೆ ಗ್ರಾಮದ ಪಟಾಕಿ ಸಿಡಿಮದ್ದು ಗೋದಾಮಿನಲ್ಲಿ ನಾಲ್ವರು ಕಾರ್ಮಿಕರು ಸಜೀವ ದಹನವಾಗಿರುವ ಘಟನೆ ಅತ್ಯಂತ ದುಖದ ಸಂಗತಿಯಾಗಿದೆ. ರಾಜ್ಯ ಸರ್ಕಾರ ಈ ಘಟನೆಗೆ ಸಂಬಂಧಿಸಿದಂತೆ ಸೂಕ್ತ ತನಿಖೆ ನಡೆಸಿ, ಮೃತರ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಈ ರೀತಿಯ ಅಪಾಯಕಾರಿ ಸ್ಥಳಗಳಲ್ಲಿ ಕೆಲಸ ಮಾಡುವ ಕಾರ್ಮಿಕರ ರಕ್ಷಣೆಗೆ ಅಗತ್ಯವಿರುವ ಮುಂಜಾಗ್ರತಾ ಕ್ರಮಗಳ ಕುರಿತು ಅಧಿಕಾರಿಗಳು ನಿಗಾವಹಿಸಬೇಕು. ಹಾವೇರಿ ಜಿಲ್ಲೆ ಹಾಗೂ ರಾಜ್ಯದಲ್ಲಿ ಈ ರೀತಿಯ ಪಟಾಕಿ ಸಿಡಿಮದ್ದು ದಾಸ್ತಾನು ಕೇಂದ್ರಗಳ ಕುರಿತು ಪರಿಶೀಲನೆ ನಡೆಸಿ ಕಾರ್ಮಿಕರಿಗೆ ಸೂಕ್ತ ರಕ್ಷಣೆಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಬೆಂಕಿ ಅವಘಡದಲ್ಲಿ ಸಜೀವ ದಹನವಾಗಿರುವ ಕಾರ್ಮಿಕರ ಕುಟುಂಬಗಳಿಗೆ ರಾಜ್ಯ ಸರ್ಕಾರ ತಕ್ಷಣ ಸೂಕ್ತ ಪರಿಹಾರ ನೀಡಬೇಕು. ಹಾಗೂ ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸಬೇಕು ಎಂದು ಒತ್ತಾಯಿಸಿದ್ದಾರೆ.

ಬಿಜೆಪಿಯಿಂದ ತಲಾ ಒಂದು ಲಕ್ಷ ಪರಿಹಾರ:

ಬೆಂಕಿ ದುರ್ಘಟನೆಯಲ್ಲಿ ಮೃತರ ಕುಟುಂಬಗಳಿಗೆ ರಾಜ್ಯ ಬಿಜೆಪಿ ವತಿಯಿಂದ ತಲಾ ಒಂದು ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ‌.

ಇತ್ತೀಚಿನ ಸುದ್ದಿ