ಏಪ್ರಿಲ್ 26ರಂದು ಮೊದಲ ಹಂತದ ಮತದಾನ: ಇಂದು ಸಂಜೆ ಬಹಿರಂಗ ಪ್ರಚಾರಕ್ಕೆ ತೆರೆ

ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಏಪ್ರಿಲ್ 26ರಂದು ನಡೆಯಲಿದ್ದು, ಬಹಿರಂಗ ಪ್ರಚಾರಕ್ಕೆ ಬುಧವಾರ(ಎಪ್ರಿಲ್ 24) ಸಂಜೆ ತೆರೆ ಬೀಳಲಿದೆ. ಈ ನಡುವೆ ಮತದಾರರನ್ನು ಒಲಿಸಿಕೊಳ್ಳಲು ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಭಾರೀ ಕಸರತ್ತು ನಡೆಸಿವೆ. ಮೂರೂ ಪಕ್ಷಗಳ ವರಿಷ್ಠರು ಬಹಿರಂಗ ಸಭೆ, ಪಾದಯಾತ್ರೆ ಮತ್ತು ರೋಡ್ ಶೋ ನಡೆಸುವ ಮೂಲಕ ಮತದಾರರನ್ನು ಗೆಲ್ಲಲು ಕಸರತ್ತು ನಡೆಸಿದ್ದಾರೆ.
ಮೊದಲ ಹಂತದ ಮತದಾನ ನಡೆಯಲಿರುವ 14 ಕ್ಷೇತ್ರಗಳ ಪೈಕಿ 11 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಮತ್ತು ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ನೇರ ಪೈಪೋಟಿ ಏರ್ಪಟ್ಟಿದೆ.
ಕೇಂದ್ರ ನಾಯಕರ ಭರ್ಜರಿ ರೋಡ್ ಶೋ :
ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್ನ ಕೇಂದ್ರ ಮುಖಂಡರು ಹಲವಾರು ಸುತ್ತಿನ ಪ್ರಚಾರ ನಡೆಸಿದ್ದಾರೆ. ಜೊತೆಗೆ ರಾಜ್ಯ ನಾಯಕರು ಎಡಬಿಡದೆ ಪ್ರಚಾರ ಸಭೆಗಳಲ್ಲಿ ಭಾಗಿಯಾಗಿದ್ದಾರೆ. ಮಂಡ್ಯ, ಹಾಸನ ಮತ್ತು ಕೋಲಾರದಲ್ಲಿ ಜೆಡಿಎಸ್ ಮುಖಂಡರು ವ್ಯಾಪಕ ಪ್ರಚಾರ ನಡೆಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರು, ಚಿಕ್ಕಬಳ್ಳಾಪುರ ಮೈಸೂರು, ಮತ್ತು ಹಾಸನದಲ್ಲಿ ನಡೆದ ಬಹಿರಂಗ ಸಭೆಗಳಲ್ಲಿ ಭಾಗಿಯಾಗಿ ಮತ ಕೇಳಿದ್ದರು. ಮಂಗಳೂರಿನಲ್ಲಿ ರೋಡ್ ಶೋ ಸಹ ನಡೆಸಿದ್ದರು.
ಕೇಂದ್ರ ಗೃಹ ಸಚಿವ ಅಮಿತ್ ಶಾ ಬೆಂಗಳೂರಿನಲ್ಲಿ ವಿವಿಧ ಹಂತದ ಕಾರ್ಯಕರ್ತರು ಮತ್ತು ಮುಖಂಡರ ಸಭೆಗಳನ್ನು ನಡೆಸಿದ್ದರು. ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಚನ್ನಪಟ್ಟಣದಲ್ಲಿ ರೋಡ್ ಶೋ ನಡೆಸುವ ಮೂಲಕ ಪ್ರಚಾರದಲ್ಲಿ ಭಾಗಿಯಾಗಿದ್ದರು.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಡ್ಯ ಮತ್ತು ಕೋಲಾರ ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಪಕ್ಷ ಹಮ್ಮಿಕೊಂಡಿದ್ದ ಬಹಿರಂಗ ಸಭೆಗಳಲ್ಲಿ ಭಾಗವಹಿಸಿ ಗಮನ ಸೆಳೆದರು. ಕಾಂಗ್ರೆಸ್ ನ ಮತ್ತೊಬ್ಬ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಚಿತ್ರದುರ್ಗ ಮತ್ತು ಬೆಂಗಳೂರಿನಲ್ಲಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರದಲ್ಲಿ ತೊಡಗಿಸಿಕೊಂಡರು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಬ್ಬರೂ ಕಾಲಿಗೆ ಚಕ್ರ ಕಟ್ಟಿದಂತೆ 14 ಕ್ಷೇತ್ರಗಳಲ್ಲಿ ವ್ಯಾಪಕ ಪ್ರಚಾರ ಸಭೆಗಳಲ್ಲಿ ಭಾಗಿಯಾಗಿದ್ದರು.
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರೂ ಭರ್ಜರಿ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಮಂಡ್ಯದ ಅಭ್ಯರ್ಥಿಯೂ ಆಗಿರುವ ಜೆಡಿಎಸ್ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಹಲವು ಕ್ಷೇತ್ರಗಳಲ್ಲಿ ಎನ್ ಡಿಎ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಿ ಗಮನ ಸೆಳೆದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth