ಸ್ನೇಹಿತೆಯ ಜನ್ಮದಿನಕ್ಕೆ ಉಡುಗೊರೆ ತರಲು ಹೋದ ಬಾಲಕಿ ಶವವಾಗಿ ಪತ್ತೆ: ಹತ್ಯೆಗೂ ಮುನ್ನ ನಡೆದಿತ್ತು ಭೀಕರ ಅತ್ಯಾಚಾರ!
ಕೋಲ್ಕತ್ತಾ: ಸ್ನೇಹಿತೆಯ ಹುಟ್ಟುಹಬ್ಬಕ್ಕೆ ಉಡುಗೊರೆ (ಗಿಫ್ಟ್) ಖರೀದಿಸಲು ಮಾರುಕಟ್ಟೆಗೆ ತೆರಳಿದ್ದ 11 ವರ್ಷದ ಅಪ್ರಾಪ್ತ ಬಾಲಕಿಯೊಬ್ಬಳನ್ನು ದುಷ್ಕರ್ಮಿಗಳು ಅಪಹರಿಸಿ, ಅತ್ಯಾಚಾರ ಎಸಗಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬರುಯಿಪುರದಲ್ಲಿ ನಡೆದಿದೆ.
ಬಾಲಕಿಯ ಮೃತದೇಹವು ಗೋಣಿಚೀಲದಲ್ಲಿ ಪತ್ತೆಯಾಗಿದ್ದು, ಇಡೀ ಪ್ರದೇಶದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಬಾಲಕಿಯು ಶನಿವಾರ ಮಧ್ಯಾಹ್ನ ತನ್ನ ಸ್ನೇಹಿತೆಯ ಹುಟ್ಟುಹಬ್ಬದ ಉಡುಗೊರೆ ತರುವುದಾಗಿ ಹೇಳಿ ಮನೆಯಿಂದ ಹೊರಗಡೆ ಹೋಗಿದ್ದಳು. ಆದರೆ ರಾತ್ರಿಯಾದರೂ ಆಕೆ ಮನೆಗೆ ಮರಳದಿದ್ದಾಗ ಆತಂಕಗೊಂಡ ಪೋಷಕರು ಮತ್ತು ಕುಟುಂಬಸ್ಥರು ಹುಡುಕಾಟ ನಡೆಸಿದ್ದಾರೆ. ಈ ವೇಳೆ ನಾಲ್ವರು ವ್ಯಕ್ತಿಗಳು ಬಾಲಕಿಯನ್ನು ಬಲವಂತವಾಗಿ ಅಪಹರಿಸಿಕೊಂಡು ಹೋಗಿದ್ದಾರೆ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ.
ಗೋಣಿಚೀಲದಲ್ಲಿ ಪತ್ತೆಯಾದ ಶವ:
ಭಾನುವಾರ ಮುಂಜಾನೆ ಬರುಯಿಪುರದ ಸೂರ್ಯಪುರ ಹಾತ್ ಪ್ರದೇಶದಲ್ಲಿ ಅನುಮಾನಾಸ್ಪದ ಗೋಣಿಚೀಲವೊಂದು ಪತ್ತೆಯಾಗಿದೆ. ಸ್ಥಳೀಯರು ಅದನ್ನು ಪರಿಶೀಲಿಸಿದಾಗ ಕಾಣೆಯಾಗಿದ್ದ ಬಾಲಕಿಯ ಮೃತದೇಹ ಪತ್ತೆಯಾಗಿದೆ. ಈ ಸುದ್ದಿ ತಿಳಿಯುತ್ತಿದ್ದಂತೆ ಆಕ್ರೋಶಗೊಂಡ ನೂರಾರು ಸ್ಥಳೀಯ ನಿವಾಸಿಗಳು ಬರುಯಿಪುರ-ಜಯನಗರ ರಸ್ತೆಯನ್ನು ತಡೆದು ಬೃಹತ್ ಪ್ರತಿಭಟನೆ ನಡೆಸಿದರು. ಅಪರಾಧಿಗಳನ್ನು ತಕ್ಷಣವೇ ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿದರು.
ಪ್ರತಿಭಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ, ಶೀಘ್ರ ತನಿಖೆ ಮತ್ತು ಕಾನೂನು ಕ್ರಮ ಕೈಗೊಳ್ಳುವ ಭರವಸೆ ನೀಡಿದ ಬಳಿಕ ರಸ್ತೆ ತಡೆಯನ್ನು ಹಿಂಪಡೆಯಲಾಯಿತು.
ಪೊಲೀಸರು ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಿದ್ದಾರೆ. ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದನ್ನು ಮತ್ತು ಸಾವಿಗೆ ನಿಖರ ಕಾರಣವನ್ನು ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರವಷ್ಟೇ ಖಚಿತಪಡಿಸಿಕೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಒಬ್ಬ ಶಂಕಿತ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
























