ದ್ವೇಷ ಭಾಷಣ: ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಬಂಧನಕ್ಕೆ ‘ಕರ್ನಾಟಕ ರಾಜ್ಯ ಮುಸ್ಲಿಮ್ ಒಕ್ಕೂಟ’ ಆಗ್ರಹ
ಚಿಕ್ಕಮಗಳೂರು: ನೀಟ್ (NEET) ಪರೀಕ್ಷೆ ಅಕ್ರಮ ಖಂಡಿಸಿ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ಮುಸ್ಲಿಮ್ ಸಮುದಾಯದ ವಿರುದ್ಧ ಪ್ರಚೋದನಕಾರಿ ಹಾಗೂ ದ್ವೇಷಪೂರಿತ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ನಾಯಕ ಹಾಗೂ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರನ್ನು ತಕ್ಷಣವೇ ಬಂಧಿಸಬೇಕೆಂದು ಕರ್ನಾಟಕ ರಾಜ್ಯ ಮುಸ್ಲಿಮ್ ಒಕ್ಕೂಟ ಒತ್ತಾಯಿಸಿದೆ.
ಗುರುವಾರ ಚಿಕ್ಕಮಗಳೂರಿನಲ್ಲಿ ನಡೆದ ಬಿಜೆಪಿ ಪ್ರತಿಭಟನೆಯಲ್ಲಿ ಮಾತನಾಡಿದ್ದ ಸಿ.ಟಿ. ರವಿ, “ಮುಲ್ಲಾನಿಗೂ ನೀಟ್ ಪರೀಕ್ಷೆಗೂ ಏನು ಸಂಬಂಧ? ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ” ಎಂದು ಹೇಳಿಕೆ ನೀಡಿದ್ದರು.
ಈ ಹೇಳಿಕೆಯು ಧಾರ್ಮಿಕ ಗುರುಗಳನ್ನು ಅವಮಾನಿಸುವಂತಿದ್ದು, ಸಮಾಜದಲ್ಲಿ ದ್ವೇಷ ಹಾಗೂ ವಿಭಜನೆಯನ್ನು ಉಂಟುಮಾಡುವ ದುಷ್ಟ ಸಂಚಾಗಿದೆ ಎಂದು ಒಕ್ಕೂಟ ಆಕ್ರೋಶ ವ್ಯಕ್ತಪಡಿಸಿದೆ. ಈ ಹೇಳಿಕೆಗೆ ಸಂಬಂಧಿಸಿದಂತೆ ಚಿಕ್ಕಮಗಳೂರು ಜಾಮಿಯಾ ಮಸೀದಿಯ ಅಧ್ಯಕ್ಷ ಮುಜಾಹಿದ್ ಪಾಷಾ ಅವರು ಈಗಾಗಲೇ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ವಿಷಯಾಂತರ ತಂತ್ರ:
ದೇಶಾದ್ಯಂತ ವಿದ್ಯಾರ್ಥಿಗಳು ಮತ್ತು ಯುವಜನರು ನೀಟ್ ಹಗರಣದ ವಿರುದ್ಧ ಬೀದಿಗಿಳಿದು ಹೋರಾಟ ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರದ ವಿರುದ್ಧ ವ್ಯಕ್ತವಾಗುತ್ತಿರುವ ಸಾಲು ಸಾಲು ಪ್ರಶ್ನೆಗಳಿಂದ ಕಂಗೆಟ್ಟಿರುವ ಬಿಜೆಪಿ, ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಕೋಮು ವಿಭಜನೆಯ ತಂತ್ರ ಅನುಸರಿಸುತ್ತಿದೆ. ದಿಲ್ಲಿಯ ಜಂತರ್ ಮಂತರ್ನಲ್ಲಿ ಹೋರಾಟ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ‘ಮುಲ್ಲಾಗಳು ಬಿರಿಯಾನಿ ತಿನ್ನಿಸುತ್ತಿದ್ದಾರೆ’ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿಕೆ ನೀಡಿರುವುದನ್ನು ಒಕ್ಕೂಟ ಉಲ್ಲೇಖಿಸಿದ್ದು, ಆಡಳಿತಾರೂಢರಿಗೆ ಪ್ರಶ್ನೆ ಕೇಳುವ ಜಾಗೃತ ಪ್ರಜೆಗಳು ಬಿಜೆಪಿಗೆ ಬೇಡವಾಗಿದ್ದಾರೆ ಎಂದು ಖಂಡಿಸಿದೆ.
ದ್ವಂದ್ವ ನೀತಿ: ಮುಸ್ಲಿಮ್ ಹೆಣ್ಣುಮಕ್ಕಳು ಹಿಜಾಬ್ ಧರಿಸಿ ಶಿಕ್ಷಣ ಪಡೆಯುವುದನ್ನು ವಿರೋಧಿಸುವುದು, ಶಿಕ್ಷಣದಲ್ಲಿದ್ದ ಮೀಸಲಾತಿ ರದ್ದುಗೊಳಿಸುವುದು ಹಾಗೂ ವಿಶ್ವವಿದ್ಯಾಲಯ ಕಟ್ಟಡಗಳನ್ನು ಧ್ವಂಸಗೊಳಿಸುವ ಕೆಲಸ ಮಾಡುವ ಬಿಜೆಪಿ, ಮತ್ತೊಂದೆಡೆ ಸಮುದಾಯಕ್ಕೆ ಶಿಕ್ಷಣದ ಕಾಳಜಿ ಇಲ್ಲವೆಂದು ಬೊಬ್ಬೆ ಹೊಡೆಯುತ್ತಿದೆ ಎಂದು ಅವರು ತಿರುಗೇಟು ನೀಡಿದ್ದಾರೆ.
“ಸಿ.ಟಿ. ರವಿ ಅವರ ಮಾತುಗಳು ಸಮಾಜದಲ್ಲಿ ಅಶಾಂತಿ ಮತ್ತು ಸೌಹಾರ್ದತೆಗೆ ಭಂಗ ತರುವ ಉದ್ದೇಶವನ್ನು ಹೊಂದಿವೆ. ಸರ್ಕಾರ ತಕ್ಷಣವೇ ಕಾನೂನು ಕ್ರಮ ಕೈಗೊಂಡು ಅವರನ್ನು ಬಂಧಿಸಬೇಕು.”
— ಸುಹೇಲ್ ಮರೂರು, ಮಾಧ್ಯಮ ವಕ್ತಾರರು ಹಾಗೂ ಸಂಚಾಲಕರು, ಕರ್ನಾಟಕ ರಾಜ್ಯ ಮುಸ್ಲಿಮ್ ಒಕ್ಕೂಟ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD























