ಭಾರೀ ಮಳೆ: ಈ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ!

school
18/08/2025

ಬೆಂಗಳೂರು: ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಉತ್ತರ ಕನ್ನಡ, ಕೊಡಗು, ಉತ್ತರ ಕರ್ನಾಟಕದ ಭಾಗಗಳಲ್ಲಿ ಮಳೆ ಜೋರಾಗಿದೆ.  ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಏಳು ಜಿಲ್ಲೆಗಳ ವಿವಿಧ ತಾಲೂಕುಗಳಲ್ಲಿ ಶಾಲೆ–ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಉತ್ತರ ಕನ್ನಡ ಜಿಲ್ಲೆ: ಉತ್ತರ ಕನ್ನಡದಲ್ಲಿ  ರೆಡ್ ಅಲರ್ಟ್ ಘೋಷಣೆ ಹಿನ್ನೆಲೆ ಜಿಲ್ಲೆಯ 11 ತಾಲೂಕುಗಳಲ್ಲಿ ಪ್ರಾಥಮಿಕ, ಪ್ರೌಢಶಾಲೆಗಳು, ಪಿಯು ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಕಾರವಾರ, ಅಂಕೋಲಾ, ಕುಮಟಾ, ಶಿರಸಿ, ಹೊನ್ನಾವರ, ಭಟ್ಕಳ, ಸಿದ್ದಾಪುರ, ಯಲ್ಲಾಪುರ, ದಾಂಡೇಲಿ, ಜೋಯಿಡಾ, ಹಳಿಯಾಳ ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮುಂಡಗೋಡು ತಾಲೂಕಿನಲ್ಲಿ ಮಾತ್ರ ರಜೆ ನೀಡಿಲ್ಲ.

ದಕ್ಷಿಣ ಕನ್ನಡ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯ ಮುನ್ಸೂಚನೆಯ ಕಾರಣ ದಕ್ಷಿಣ ಕನ್ನಡ ಜಿಲ್ಲೆಯ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಇಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಹೆಚ್.ವಿ.ದರ್ಶನ್ ಆದೇಶ ಹೊರಡಿಸಿದ್ದಾರೆ.

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಹಿನ್ನೆಲೆ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಿಸಿ ಶಿವಮೊಗ್ಗ ಡಿಸಿ ಗುರುದತ್ತ ಹೆಗಡೆ ಆದೇಶ ಹೊರಡಿಸಿದ್ದಾರೆ.

ಹಾಸನ: ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು ಸಕಲೇಶಪುರ, ಬೇಲೂರು ತಾಲೂಕಿನ ಅಂಗನವಾಡಿ, ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ. ಆಲೂರು ತಾಲೂಕಿನ ಕೆಂಚಮ್ಮನ ಹೊಸಕೋಟೆ ಹೋಬಳಿಯ ಅಂಗನವಾಡಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಮಾತ್ರ ಇಂದು ರಜೆ ಘೋಷಣೆ ಮಾಡಲಾಗಿದೆ.

ಕೊಡಗು:  ಕೊಡಗು ಜಿಲ್ಲೆಯಲ್ಲಿ ಇಂದು ಅರೆಂಜ್ ಅಲರ್ಟ್ ಹಿನ್ನೆಲೆ ಜಿಲ್ಲೆಯ ಅಂಗನವಾಡಿ, ಶಾಲಾ ಕಾಲೇಜಿಗೆ ಇಂದು ರಜೆ ಘೋಷಿಸಲಾಗಿದೆ. ಜೋರು ಗಾಳಿ‌ ಮಳೆಯಾಗುವ ಸಾಧ್ಯತೆ ಹಿನ್ನೆಲೆ ಶಾಲಾ ಕಾಲೇಜುಗಳಿಗೆ ರಜೆ ನೀಡಿ ಕೊಡಗು ಜಿಲ್ಲಾಧಿಕಾರಿ ವೆಂಕಟರಾಜಾ ಆದೇಶ ಹೊರಡಿಸಿದ್ದಾರೆ. ಕೊಡಗಿನಾದ್ಯಂತ ವರುಣಾರ್ಭಟ ಹೆಚ್ಚಾಗಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಹಾರಂಗಿ ಜಲಾಶಯಕ್ಕೆ ಒಳ ಹರಿವು ಹೆಚ್ಚಾಗಿದ್ದು, ಡ್ಯಾಂನಿಂದ 8 ಸಾವಿರ ಕ್ಯೂಸೆಕ್ ನೀರು ಹೊರಬಿಡಲಾಗಿದೆ.

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಕೂಡ ಧಾರಾಕಾರ ಮಳೆಯಾಗುತ್ತಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ, ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ, ಎನ್.ಆರ್.ಪುರ ತಾಲೂಕುಗಳ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಚಿಕ್ಕಮಗಳೂರು ತಾಲೂಕಿನ ಜಾಗರ, ಖಾಂಡ್ಯ, ಆಲ್ದೂರು, ವಸ್ತಾರೆ, ಆವತಿ ಹೋಬಳಿ ವ್ಯಾಪ್ತಿಯಲ್ಲಿ ಅಂಗನವಾಡಿ, ಶಾಲೆಗಳಿಗೆ ಮಾತ್ರ ಇಂದು ರಜೆ ಘೋಷಣೆ ಮಾಡಲಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version