ಮಕ್ಕಳ ಭಿಕ್ಷಾಟನೆ ತಡೆಗೆ 12 ಸದಸ್ಯರ ಉನ್ನತ ಮಟ್ಟದ ಸಮಿತಿ ರಚನೆ: ಹೈಕೋರ್ಟ್‌ಗೆ ರಾಜ್ಯ ಸರ್ಕಾರದ ಮಾಹಿತಿ

child begging
05/04/2026

ಬೆಂಗಳೂರು: ರಾಜ್ಯದಲ್ಲಿ ಮಕ್ಕಳ ಭಿಕ್ಷಾಟನೆ ತಡೆಗಟ್ಟಲು ಹಾಗೂ ಬೀದಿ ಬದಿಯಲ್ಲಿ ಆಟಿಕೆ ಸೇರಿದಂತೆ ವಿವಿಧ ವಸ್ತುಗಳನ್ನು ಮಾರಾಟ ಮಾಡುವ ಮಕ್ಕಳನ್ನು ಗುರುತಿಸಿ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಲು 12 ಸದಸ್ಯರ ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗಿದೆ ಎಂದು ರಾಜ್ಯ ಸರ್ಕಾರ ಕರ್ನಾಟಕ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.

ನಗರದ ರಸ್ತೆಗಳಲ್ಲಿ ಮತ್ತು ಸಂಚಾರಿ ಸಿಗ್ನಲ್‌ಗಳಲ್ಲಿ ಸಣ್ಣ ಪುಟ್ಟ ವಸ್ತುಗಳನ್ನು ಮಾರಾಟ ಮಾಡುವ ಹಾಗೂ ಭಿಕ್ಷಾಟನೆಯಲ್ಲಿ ತೊಡಗಿರುವ ಮಕ್ಕಳನ್ನು ರಕ್ಷಿಸಿ, ಅವರಿಗೆ ಶಿಕ್ಷಣ ಮತ್ತು ಉತ್ತಮ ಜೀವನ ಕಲ್ಪಿಸಲು ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ‘ಲೆಟ್ಸ್ ಕಿಟ್ ಫೌಂಡೇಷನ್’ನ ವ್ಯವಸ್ಥಾಪಕ ಟ್ರಸ್ಟಿ ಲಕ್ಷ್ಮಿ ಹೊಳ್ಳ ಅವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠವು ನಡೆಸಿತು.

ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು ಮಾಹಿತಿ ನೀಡಿ, “ಭಿಕ್ಷಾಟನೆ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಹಾಗೂ ಮಕ್ಕಳ ಪುನರ್ವಸತಿಗಾಗಿ ಇದೇ ಏಪ್ರಿಲ್ 9ರಂದು ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿಯಲ್ಲಿ ಪೊಲೀಸ್ ಇಲಾಖೆ, ಮಕ್ಕಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಹಾಗೂ ನಿಮ್ಹಾನ್ಸ್‌ನ ತಜ್ಞ ವೈದ್ಯರು ಸೇರಿದಂತೆ ಒಟ್ಟು 12 ಮಂದಿ ಸದಸ್ಯರಿದ್ದಾರೆ,” ಎಂದು ತಿಳಿಸಿದರು.

ಸರ್ಕಾರದ ಈ ಕ್ರಮವನ್ನು ಗಮನಿಸಿದ ನ್ಯಾಯಪೀಠವು, ಭಿಕ್ಷಾಟನೆಯಲ್ಲಿರುವ ಮಕ್ಕಳ ಹಿತದೃಷ್ಟಿಯಿಂದ ಕೈಗೊಳ್ಳಬೇಕಾದ ಕ್ರಿಯಾ ಯೋಜನೆಯ ಬಗ್ಗೆ ಈ ಹಿಂದೆ (ಜನವರಿ 22, 2026) ನೀಡಲಾಗಿದ್ದ ನಿರ್ದೇಶನಗಳ ಪಾಲನೆಯ ಬಗ್ಗೆ ವರದಿ ಸಲ್ಲಿಸುವಂತೆ ಸೂಚಿಸಿತು. ಅಲ್ಲದೆ, ಪ್ರಕರಣದ ಮುಂದಿನ ವಿಚಾರಣೆಯನ್ನು ಜೂನ್ 17ಕ್ಕೆ ಮುಂದೂಡಿದೆ.

ಬೀದಿ ಬದಿಯಲ್ಲಿ ಮಕ್ಕಳು ಹೂವು, ಆಟಿಕೆಗಳನ್ನು ಮಾರಾಟ ಮಾಡದಂತೆ ನಿರ್ಬಂಧಿಸಬೇಕು. ಶೈಕ್ಷಣಿಕ ವರ್ಷದ ಮಧ್ಯದಲ್ಲಿ ಬರುವ ಮಕ್ಕಳಿಗೆ ಶಾಲೆಗಳಲ್ಲಿ ಪ್ರವೇಶ ನಿರಾಕರಿಸದಂತೆ ಪ್ರಾಥಮಿಕ ಶಿಕ್ಷಣ ಇಲಾಖೆಗೆ ನಿರ್ದೇಶನ ನೀಡಬೇಕು.  ಭಿಕ್ಷಾಟನೆಯಲ್ಲಿ ತೊಡಗಿರುವ ಮಕ್ಕಳನ್ನು ಪತ್ತೆ ಹಚ್ಚಿ ಅವರಿಗೆ ಸೂಕ್ತ ಸೌಲಭ್ಯ ಒದಗಿಸಬೇಕು ಎಂದು ಅರ್ಜಿದಾರರ ಪರ ಹಿರಿಯ ವಕೀಲ ಪುತ್ತಿಗೆ ರಮೇಶ್ ವಾದ ಮಂಡಿಸಿದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version