ಜುಲೈ 25 ರಂದು ದಕ್ಷಿಣ ಕನ್ನಡ ಜಿಲ್ಲಾ ಶಾಲಾ–ಕಾಲೇಜುಗಳಿಗೆ ರಜೆ ಘೋಷಣೆ: ಮಳೆ ಮುನ್ಸೂಚನೆ

rain
24/07/2026

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಮುಂದಿನ ದಿನಗಳಲ್ಲೂ ಇದೇ ಹವಾಮಾನ ಪರಿಸ್ಥಿತಿ ಮುಂದುವರಿಯುವ ಕುರಿತು ಭಾರತೀಯ ಹವಾಮಾನ ಇಲಾಖೆ ಹಾಗೂ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮುನ್ಸೂಚನೆ ನೀಡಿವೆ.

ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜುಲೈ 25 ರಂದು ಜಿಲ್ಲೆಯ ಎಲ್ಲಾ ಅಂಗನವಾಡಿಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, 12ನೇ ತರಗತಿಯವರೆಗಿನ ಪದವಿ ಪೂರ್ವ ಕಾಲೇಜುಗಳು ಹಾಗೂ ಎಲ್ಲಾ ITI ಮತ್ತು ಡಿಪ್ಲೊಮಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಆದೇಶ ಹೊರಡಿಸಿದ್ದಾರೆ.

ಈ ರಜೆಯು ಜಿಲ್ಲೆಯ ಎಲ್ಲಾ ವಸತಿ ಶಾಲೆಗಳು ಮತ್ತು ಕಾಲೇಜುಗಳಿಗೂ ಅನ್ವಯವಾಗಲಿದ್ದು, ಆದೇಶವನ್ನು ಉಲ್ಲಂಘಿಸುವ ಸಂಸ್ಥೆಗಳ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005 ರ ಪ್ರಕಾರ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಲಾಗಿದೆ.

ಮಳೆಯ ತೀವ್ರತೆ ಹೆಚ್ಚಾಗಿರುವುದರಿಂದ ನೀರಿರುವ ತಗ್ಗು ಪ್ರದೇಶಗಳು, ಕೆರೆ, ನದಿತೀರ ಹಾಗೂ ಸಮುದ್ರತೀರಗಳಿಗೆ ಮಕ್ಕಳು ಹೋಗದಂತೆ ಪೋಷಕರು ಜಾಗ್ರತೆ ವಹಿಸಬೇಕೆಂದು ಜಿಲ್ಲಾಡಳಿತ ಕೋರಿದೆ. ಹಾಗೆಯೇ ಪ್ರವಾಸಿಗರು ಮತ್ತು ಸಾರ್ವಜನಿಕರು ಅಪಾಯಕಾರಿ ನದಿ ಹಾಗೂ ಸಮುದ್ರ ತೀರಗಳಿಗೆ ತೆರಳಬಾರದು ಮತ್ತು ಮೀನುಗಾರರು ಯಾವುದೇ ಕಾರಣಕ್ಕೂ ಸಮುದ್ರಕ್ಕೆ ಇಳಿಯಬಾರದು ಎಂದು ಸೂಚನೆ ನೀಡಲಾಗಿದೆ.

ಪರಿಸ್ಥಿತಿಯನ್ನು ನಿಭಾಯಿಸಲು ಜಿಲ್ಲಾ ಮತ್ತು ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ತಮ್ಮ ಕೇಂದ್ರ ಸ್ಥಾನದಲ್ಲಿದ್ದುಕೊಂಡು ವಿಪತ್ತು ನಿರ್ವಹಣಾ ಕಾರ್ಯಗಳನ್ನು ಚಾಚೂ ತಪ್ಪದೆ ನಿರ್ವಹಿಸಬೇಕೆಂದು ಮತ್ತು ಪ್ರತೀ ತಾಲೂಕಿನಲ್ಲಿ ಕಾಳಜಿ ಕೇಂದ್ರಗಳನ್ನು ಸನ್ನದ್ಧ ಸ್ಥಿತಿಯಲ್ಲಿರಿಸಿಕೊಳ್ಳಬೇಕೆಂದು ಆದೇಶಿಸಲಾಗಿದೆ.

ಸಾರ್ವಜನಿಕರು ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದ ಯಾವುದೇ ತುರ್ತು ಸಮಸ್ಯೆಗಳಿದ್ದಲ್ಲಿ ಉಚಿತ ದೂರವಾಣಿ ಸಂಖ್ಯೆ 1077 ಅಥವಾ 0824-2442590 ಗೆ ಸಂಪರ್ಕಿಸಬಹುದಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version