ಬಸ್ ಗೆ ಡಿಕ್ಕಿ ಹೊಡೆದ ಲಾರಿ: ಹೊತ್ತಿ ಉರಿದ ಬಸ್ ನಲ್ಲಿದ್ದ 9 ಪ್ರಯಾಣಿಕರು ಸಜೀವ ದಹನ - Mahanayaka
3:13 PM Thursday 25 - December 2025

ಬಸ್ ಗೆ ಡಿಕ್ಕಿ ಹೊಡೆದ ಲಾರಿ: ಹೊತ್ತಿ ಉರಿದ ಬಸ್ ನಲ್ಲಿದ್ದ 9 ಪ್ರಯಾಣಿಕರು ಸಜೀವ ದಹನ

chitradurga highway
25/12/2025

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ  ಇಂದು ಮುಂಜಾನೆ ಖಾಸಗಿ ಬಸ್ಸಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬಸ್ ಹೊತ್ತಿ ಉರಿದಿದ್ದು, ಸುಮಾರು 9 ಪ್ರಯಾಣಿಕರು ಸಜೀವ ದಹನವಾಗಿರುವ ಘಟನೆ ನಡೆದಿದೆ.

ಬೆಂಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಕೋಚ್ ಬಸ್ ಹಿರಿಯೂರು ಮಾರ್ಗವಾಗಿ ಚಲಿಸುತ್ತಿತ್ತು. ಈ ವೇಳೆ ಹಿರಿಯೂರಿನಿಂದ ಬೆಂಗಳೂರು ಕಡೆಗೆ ಸಾಗುತ್ತಿದ್ದ ಲಾರಿಯೊಂದು ಚಾಲಕನ ನಿರ್ಲಕ್ಷ್ಯದಿಂದ ಡಿವೈಡರ್ ಹಾರಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಬಸ್ಸಿಗೆ ವೇಗವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್ಸಿನ ಡೀಸೆಲ್ ಟ್ಯಾಂಕ್ ಒಡೆದು ತಕ್ಷಣವೇ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ.

ಬಸ್ ಸ್ಲೀಪರ್ ಕೋಚ್ ಆಗಿದ್ದರಿಂದ ಪ್ರಯಾಣಿಕರು ಗಾಢ ನಿದ್ರೆಯಲ್ಲಿದ್ದರು. ಬೆಂಕಿ ಕ್ಷಣಾರ್ಧದಲ್ಲಿ ಬಸ್ ಪೂರ್ತಿ ಆವರಿಸಿದ್ದರಿಂದ ಹೊರಬರಲಾಗದೆ 9 ಮಂದಿ ಬೆಂಕಿಗೆ ಆಹುತಿಯಾಗಿದ್ದಾರೆ. ದುರಂತದಲ್ಲಿ ಹಲವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳ ಸ್ಥಿತಿ ಚಿಂತಾಜನಕವಾಗಿದ್ದು, ಸಾವಿನ ಸಂಖ್ಯೆ ಇನ್ನು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್​ಪಿ) ರಂಜಿತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದಾರೆ. ಲಾರಿ ಚಾಲಕನ ಅತಿವೇಗ ಮತ್ತು ನಿರ್ಲಕ್ಷ್ಯವೇ ಈ ಮಹಾ ದುರಂತಕ್ಕೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಈ ಸಂಬಂಧ ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತರ ಗುರುತು ಪತ್ತೆ ಹಚ್ಚುವ ಕಾರ್ಯ ಪ್ರಗತಿಯಲ್ಲಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ