ಪೂರ್ಣಾವಧಿ ಸಿಎಂ ನಾನೇ; ಮುಂದಿನ ವರ್ಷವೂ ಬಜೆಟ್ ಮಂಡನೆ: ಸಿಎಲ್ ಪಿ ಸಭೆಯಲ್ಲಿ ಸಿದ್ದರಾಮಯ್ಯ ಸುಳಿವು
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್ ಪಿ) ಸಭೆಯಲ್ಲಿ ಮಹತ್ವದ ಹೇಳಿಕೆ ನೀಡುವ ಮೂಲಕ ತಾವು ಪೂರ್ಣ ಅವಧಿಗೆ ಮುಖ್ಯಮಂತ್ರಿಯಾಗಿ ಮುಂದುವರಿಯುವುದಾಗಿ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.
ಸಭೆಯಲ್ಲಿ ಮಾತನಾಡಿದ ಅವರು, 2027–28ರ ಆರ್ಥಿಕ ವರ್ಷದ ಬಜೆಟ್ ಅನ್ನೂ ತಾವೇ ಮಂಡಿಸುವುದಾಗಿ ಪರೋಕ್ಷವಾಗಿ ತಿಳಿಸಿದ್ದಾರೆ. “ಮುಂದಿನ ಬಜೆಟ್ ನಲ್ಲಿ ಪ್ರತಿಯೊಬ್ಬ ಸಚಿವರು ತಮ್ಮ ಇಲಾಖೆಗಳ ಬೇಡಿಕೆಗಳ ಕುರಿತು ಮಾತನಾಡಬೇಕು” ಎಂದು ಹೇಳುವ ಮೂಲಕ ಅಧಿಕಾರ ಹಸ್ತಾಂತರದ ವದಂತಿಗಳಿಗೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ.
ಅನುದಾನದ ಭರವಸೆ: ಹಲವು ಶಾಸಕರು ತಮ್ಮ ಕ್ಷೇತ್ರಗಳಿಗೆ ಹೆಚ್ಚಿನ ಅನುದಾನ ಕೋರಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ, ರಾಜ್ಯದ ಆದಾಯ ಹೆಚ್ಚಾದಲ್ಲಿ ಪೂರಕ ಬಜೆಟ್ ನಲ್ಲಿ ಹೆಚ್ಚಿನ ಅನುದಾನ ನೀಡುವ ಭರವಸೆ ನೀಡಿದರು. ಪ್ರಸ್ತುತ ಬಜೆಟ್ ಅನ್ನು ವ್ಯವಸ್ಥಿತವಾಗಿ ರೂಪಿಸಲಾಗಿದ್ದು, ಕಳೆದ ಬಾರಿಗಿಂತ ಹೆಚ್ಚಿನ ಹಣವನ್ನು ಎಲ್ಲಾ ಇಲಾಖೆಗಳಿಗೆ ಹಂಚಿಕೆ ಮಾಡಲಾಗಿದೆ ಎಂದು ತಿಳಿಸಿದರು.
ಆಂತರಿಕ ಮೀಸಲಾತಿ ಚರ್ಚೆ: ಮಳವಳ್ಳಿ ಶಾಸಕ ಪಿ.ಎಂ. ನರೇಂದ್ರಸ್ವಾಮಿ ಅವರು ಎಸ್ ಸಿ ಆಂತರಿಕ ಕೋಟಾ ಜಾರಿಯಲ್ಲಿನ ವಿಳಂಬದ ಬಗ್ಗೆ ವಿಷಯ ಪ್ರಸ್ತಾಪಿಸಿದರು. ಮಾರ್ಚ್ 27 ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯ ಮೊದಲು ಈ ಕುರಿತು ಎಸ್ ಸಿ ಸಮುದಾಯದ ಶಾಸಕರ ಸಭೆ ಕರೆಯುವಂತೆ ಸಿಎಂಗೆ ಮನವಿ ಮಾಡಿದರು.
ವಿರೋಧ ಪಕ್ಷಗಳಿಗೆ ಟಾಂಗ್: ಕೇಂದ್ರದಿಂದ ನಿರೀಕ್ಷಿತ ನೆರವು ಸಿಗದಿದ್ದರೂ ರಾಜ್ಯದ ಆರ್ಥಿಕ ಸ್ಥಿತಿ ಉತ್ತಮವಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು. ಪೆಟ್ರೋಲ್ ಮತ್ತು ಗ್ಯಾಸ್ ಬೆಲೆ ಏರಿಕೆ ವಿಷಯಗಳನ್ನು ಇಟ್ಟುಕೊಂಡು ಬಿಜೆಪಿಯನ್ನು ಸಮರ್ಥವಾಗಿ ಎದುರಿಸಲು ಶಾಸಕರಿಗೆ ಸಲಹೆ ನೀಡಿದರು.
ಅಧಿವೇಶನದ ಸಮಯದಲ್ಲಿ ಸಚಿವರು ಮತ್ತು ಶಾಸಕರು ಕಡ್ಡಾಯವಾಗಿ ಹಾಜರಿರಬೇಕು ಹಾಗೂ ಅಂಕಿಅಂಶಗಳೊಂದಿಗೆ ಚರ್ಚೆಯಲ್ಲಿ ಭಾಗವಹಿಸಿ ವಿರೋಧ ಪಕ್ಷಗಳ ಟೀಕೆಗಳಿಗೆ ತಿರುಗೇಟು ನೀಡಬೇಕು ಎಂದು ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಈ ಸಭೆಯ ಮೂಲಕ ಸಿದ್ದರಾಮಯ್ಯ ಅವರು ತಮ್ಮ ನಾಯಕತ್ವದ ಬಗ್ಗೆ ಶಾಸಕರಲ್ಲಿ ವಿಶ್ವಾಸ ತುಂಬುವ ಕೆಲಸ ಮಾಡಿದ್ದಾರೆ. ಸಭೆಯಲ್ಲಿ ರಾಜ್ಯದ ಬಹುತೇಕ ಸಚಿವರು ಮತ್ತು ಶಾಸಕರು ಭಾಗವಹಿಸಿದ್ದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD




























