ಟಿಪ್ಪು ಸುಲ್ತಾನ್ ಭಾವ ಚಿತ್ರಕ್ಕೆ ಚಪ್ಪಲಿಹಾರ ಹಾಕಿ ಅವಮಾನ: ಸ್ಥಳದಲ್ಲಿ ತೀವ್ರಗೊಂಡ ಪ್ರತಿಭಟನೆ

31/01/2024
ರಾಯಚೂರು: ಮೈಸೂರಿನ ಹುಲಿ ಟಿಪ್ಪು ಸುಲ್ತಾನ್ ಅವರ ಭಾವ ಚಿತ್ರಕ್ಕೆ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿ ಅವಮಾನಿಸಿರುವ ಘಟನೆ ರಾಯಚೂರು ಜಿಲ್ಲೆಯ ಸಿರವಾರ ಪಟ್ಟಣದಲ್ಲಿ ನಡೆದಿದ್ದು, ಘಟನೆಯನ್ನು ಖಂಡಿಸಿ ಭಾರೀ ಪ್ರತಿಭಟನೆ ನಡೆಯುತ್ತಿದೆ.
ಸಿರವಾರ ಪಟ್ಟಣದ ಮಟನ್ ಮಾರ್ಕೆಟ್ ಬಳಿಯ ಟಿಪ್ಪು ವೃತ್ತದಲ್ಲಿ ಘಟನೆಯನ್ನು ಖಂಡಿಸಿ ಮುಸ್ಲಿಮ್ ಮುಖಂಡರು ತೀವ್ರ ಪ್ರತಿಭಟನೆ ನಡೆಸುತ್ತಿದ್ದಾರೆ. ರಸ್ತೆ ತಡೆದು, ಟೈರ್ ಗೆ ಬೆಂಕಿ ಹಚ್ಚಿ ಕಿಡಿಗೇಡಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾತ್ರಿ ವೇಳೆ ಕಳ್ಳರಂತೆ ಆಗಮಿಸಿದ ಕಿಡಿಗೇಡಿಗಳು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಸಿರವಾರದಲ್ಲಿ ಟಿಪ್ಪು ಸುಲ್ತಾನ್ ಭಾವ ಚಿತ್ರಕ್ಕೆ ರಾತ್ರೋ ರಾತ್ರಿ ಚಪ್ಪಲಿಹಾರ ಹಾಕಿದ್ದಾರೆ. ಈ ಘಟನೆ ಬೆಳಕಿಗೆ ಬರುತ್ತಿದ್ದಂತೆಯೇ ಸ್ಥಳದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಯಿತು.
ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆಯೇ ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಮುನ್ನೆಚ್ಚರಿಕೆ ಕ್ರಮವಾಗಿ ಹೆಚ್ಚಿನ ಸಂಖ್ಯೆಯ ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಿದ್ದಾರೆ.