ಜಗದೀಶ್ ಶೆಟ್ಟರ್ ಮರಳಿಗೂಡಿಗೆ: ಯಾವುದೇ ಕ್ಷಣದಲ್ಲಿ ಬಿಜೆಪಿಗೆ ಸೇರ್ಪಡೆ ಸಾಧ್ಯತೆ

jagadish shettar
25/01/2024

ನವದೆಹಲಿ:  ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆಯೇ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬದಲಾವಣೆ ಆರಂಭವಾಗಿದೆ. ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಮುನಿಸಿಕೊಂಡು ಕಾಂಗ್ರೆಸ್ ಗೆ ಬಂದಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಇದೀಗ ಮರಳಿ ಬಿಜೆಪಿ ಮನೆಗೆ ತೆರಳಲು ನಿರ್ಧರಿಸಿದ್ದಾರೆ.

ದೆಹಲಿಯಲ್ಲಿ ಅಮಿತ್ ಶಾ ಜೊತೆಗೆ ನಡೆದ ಮಾತುಕತೆ ಯಶಸ್ವಿಯಾದ ಬಳಿಕ ಜಗದೀಶ್ ಶೆಟ್ಟರ್ ಬಿಜೆಪಿಗೆ ಮತ್ತೆ ಸೇರ್ಪಡೆಯಾಗುವುದು ಖಚಿತವಾಗಿದೆ ಎಂದು ವರದಿಯಾಗಿದೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಜಗದೀಶ್ ಶೆಟ್ಟರ್ ಅವರು ದೆಹಲಿಯಲ್ಲಿನ ಅಮಿತ್ ಶಾ ನಿವಾಸದಲ್ಲಿ ಇಂದು ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಮಾತುಕತೆ ಫಲ ನೀಡಿದ  ಕಾರಣ  ಬಿಜೆಪಿಗೆ ಮರಳಲು ಶೆಟ್ಟರ್ ಒಪ್ಪಿಗೆ ಸೂಚಿಸಿದ್ದಾರೆನ್ನಲಾಗಿದೆ.

ಜಗದೀಶ್ ಶೆಟ್ಟರ್ ಇಂದೇ ಬಿಜೆಪಿಗೆ ಸೇರ್ಪಡೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಕಾಂಗ್ರೆಸ್ ನಲ್ಲಿದ್ದರೂ, ಜಗದೀಶ್ ಶೆಟ್ಟರ್ ಅವರ ಮನಸ್ಸು ಬಿಜೆಪಿಯಲ್ಲೇ ಇದೆ ಎನ್ನುವ ಆರೋಪಗಳು ಇತ್ತೀಚೆಗೆ ಸಾಕಷ್ಟು ಬಾರಿ ಕೇಳಿ ಬಂದಿತ್ತು.

ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಜಗದೀಶ್ ಶೆಟ್ಟರ್ ಸೋಲನುಭವಿಸಿದ್ದರು. ಆದರೂ ಅವರಿಗೆ ವಿಧಾನ ಪರಿಷತ್ ಸದಸ್ಯ ಸ್ಥಾನವನ್ನು ನೀಡಲಾಗಿತ್ತು. ಇದೀಗ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಗದೀಶ್ ಶೆಟ್ಟರ್ ಮತ್ತೆ ಬಿಜೆಪಿಗೆ ಮರಳಲು ಸಜ್ಜಾಗಿದ್ದಾರೆ.

ಇತ್ತೀಚಿನ ಸುದ್ದಿ

Exit mobile version