ಸಿಗದ ರಾಜ್ಯದ ತೆರಿಗೆ ಪಾಲು: ಫೆ.7ರಂದು ದೆಹಲಿಯಲ್ಲಿ ಕೇಂದ್ರದ ವಿರುದ್ಧ ಕರ್ನಾಟಕ ಸರ್ಕಾರ ಪ್ರತಿಭಟನೆ: ಸಿಎಂ ಘೋಷಣೆ

ಬೆಂಗಳೂರು: ಕರ್ನಾಟಕ ಸರ್ಕಾರದ ತೆರಿಗೆಯ ಪಾಲನ್ನು ಕೇಂದ್ರ ಸರ್ಕಾರ ನೀಡಿಲ್ಲ ಹೀಗಾಗಿ ದೆಹಲಿಯ ಜಂತರ್ ಮಂತರ್ ನಲ್ಲಿ ಇಡೀ ಕರ್ನಾಟಕ ಸರ್ಕಾರ ಧರಣಿ ನಡೆಸಲಿದೆ ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಂಟಿ ಪತ್ರಿಕಾಗೋಷ್ಠಿ ನಡೆಸಿ ತಿಳಿಸಿದರು.
ಕರ್ನಾಟಕ ರಾಜ್ಯದ ಪಾಲಿನ ಹಣವನ್ನು ಕೇಂದ್ರ ಸರ್ಕಾರ ನೀಡಬಹುದು ಎಂಬ ವಿಶ್ವಾಸವಿತ್ತು. ಆದರೆ, ಕೇಂದ್ರ ಸರ್ಕಾರವು ಅದರ ಮಾನದಂಡದಂತೆ ಕೂಡ ರಾಜ್ಯಕ್ಕೆ ಹಣ ನೀಡುತ್ತಿಲ್ಲ ಎಂದು ಉಭಯ ನಾಯಕರು ತಿಳಿಸಿದರು.
ಕೇಂದ್ರದ ವಿರುದ್ಧ ನಾವು ಧ್ವನಿ ಎತ್ತಲೇಬೇಕಾದ ಅನಿವಾರ್ಯತೆ ಎದುರಾಗಿದೆ, ದೆಹಲಿಯಲ್ಲಿ ನಮ್ಮ ಇಡೀ ಸರ್ಕಾರ ಪ್ರತಿಭಟನೆ ಮಾಡಲಿದೆ. ಈ ಪ್ರತಿಭಟನೆಯಲ್ಲಿ ಎಲ್ಲಾ ಸಚಿವರು, ಶಾಸಕರು ಭಾಗಿಯಾಗಲಿದ್ದಾರೆ. ಪ್ರತಿಭಟನೆಯಲ್ಲಿ ಎಲ್ಲಾ ಸಂಸದರು ಕೂಡ ಭಾಗಿಯಾಗಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್ ಮನವಿ ಮಾಡಿದರು.
ಸಿಎಂ ಸಿದ್ದರಾಮಯ್ಯ ಮಾತನಾಡಿ, ಮೋದಿ ಸುಳ್ಳುಗಳಿಗೆ ನೀವು ಯಾರು ದಾರಿ ತಪ್ಪಲ್ಲ ಎಂಬುದಾಗಿ ನಂಬಿಕೆ ಇಟ್ಟುಕೊಂಡಿದ್ದೇನೆ. 4,530 ಕೋಟಿ ರೂಪಾಯಿ ಹಣ ಈಗ ಶಕ್ತಿ ಯೋಜನೆಗೆ ಕೊಟ್ಟಿದ್ದೇವೆ ಎಂದರು. ‘ತಾಕತ್ ಇದ್ರೆ, ಧಮ್ ಇದ್ರೆ’ ಎಂಬುದಾಗಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳುತ್ತಾರೆ. ಇವೆಲ್ಲವೂ ಮಾಡೋಕೆ ದಮ್ಮು, ತಾಕತ್ ಬೇಡ. ರಾಜಕೀಯ ಇಚ್ಛಾಶಕ್ತಿ ಇರಬೇಕು. ನಮ್ಮದೇನಿದ್ದರೂ ಬಡವರ ಬಗ್ಗೆ ಬದ್ಧತೆ ಅಷ್ಟೇ. ದಮ್, ತಾಕತ್ ಏನಿದ್ದರೂ ಬಿಜೆಪಿಯವರದ್ದು ಎಂದು ಹೇಳಿದರು.
ಫೆಬ್ರವರಿ 7ಕ್ಕೆ ಬೆಳಗ್ಗೆ 11 ಗಂಟೆಯಿಂದ ಪ್ರತಿಭಟನೆ ನಡೆಯಲಿದೆ. ನಾಳೆ ಸಂಜೆಯೇ ದೆಹಲಿಗೆ ಹೋಗುತ್ತೇವೆ, ನಾಡಿದ್ದು ಪ್ರತಿಭಟನೆ ಮಾಡುತ್ತೇವೆ. ಸಂವಿಧಾನ ಅಳವಡಿಸಿಕೊಂಡ ಬಳಿಕ ಒಕ್ಕೂಟ ವ್ಯವಸ್ಥೆ ಒಪ್ಪಿಕೊಂಡಿದ್ದೇವೆ. ರಾಜ್ಯಗಳಿಂದ ತೆರಿಗೆ ರೂಪದಲ್ಲಿ ಕೇಂದ್ರ ಸರ್ಕಾರಕ್ಕೆ ಹಣ ಹೋಗುತ್ತದೆ. ಹಣಕಾಸು ಆಯೋಗ ನಿರ್ಧರಿಸಿದಂತೆ ಈ ಹಣ ರಾಜ್ಯಗಳಿಗೆ ನೀಡಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದರು.