ಕರ್ನಾಟಕ ಹವಾಮಾನ ಮುನ್ಸೂಚನೆ: ರಾಜ್ಯದ ಎರಡು ಜಿಲ್ಲೆಗಳಿಗೆ ನಾಳೆ ‘ಆರೆಂಜ್ ಅಲರ್ಟ್’; ಎಲ್ಲೆಲ್ಲಿ ವರುಣಾರ್ಭಟ?

rain
09/06/2026

ಬೆಂಗಳೂರು: ಕರ್ನಾಟಕದ ಹಲವು ಭಾಗಗಳಲ್ಲಿ, ವಿಶೇಷವಾಗಿ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ನೈಋತ್ಯ ಮುಂಗಾರು ಚುರುಕಾಗಿದ್ದು, ಮುಂದಿನ ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಜೂನ್ 10 ರಂದು ಕರಾವಳಿಯ ಪ್ರಮುಖ ಜಿಲ್ಲೆಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡಕ್ಕೆ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ.

ಹವಾಮಾನ ಇಲಾಖೆಯ ವರದಿಯ ಪ್ರಕಾರ, ಮಲೆನಾಡು ಭಾಗದ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ಮುಂಬರುವ ದಿನಗಳಲ್ಲಿ ತೀವ್ರ ಮಳೆಯಾಗುವ ನಿರೀಕ್ಷೆಯಿದೆ. ಕರಾವಳಿ ಜಿಲ್ಲೆಗಳಲ್ಲಿ ಜೂನ್ 10 ಮತ್ತು 11 ರಂದು ಹಾಗೂ ದಕ್ಷಿಣ ಒಳನಾಡಿನಲ್ಲಿ ಜೂನ್ 10 ರವರೆಗೆ ಭಾರಿ ಮಳೆಯಾಗಲಿದೆ ಎಂದು ಅಂದಾಜಿಸಲಾಗಿದೆ.

ಉತ್ತರ ಒಳನಾಡು ಭಾಗದ ಹಾವೇರಿ, ಧಾರವಾಡ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿಯೂ ಭಾರಿ ಗಾಳಿಯೊಂದಿಗೆ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ. ಈ ಭಾಗದಲ್ಲಿ ಜೂನ್ 11 ರವರೆಗೆ ವರುಣಾರ್ಭಟ ಮುಂದುವರಿಯುವ ಸಾಧ್ಯತೆ ಇದೆ.

ಯಾವ್ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ?

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ಮತ್ತು ಹವಾಮಾನ ಇಲಾಖೆಯ ಪ್ರಕಾರ, ನಾಳೆ ರಾಜ್ಯದ ಪ್ರಮುಖ ಜಿಲ್ಲೆಗಳಾದ ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಕೊಪ್ಪಳ, ಗದಗ್, ಬೆಳಗಾವಿ, ಧಾರವಾಡ, ಉತ್ತರ ಕನ್ನಡ, ಹಾವೇರಿ, ಚಿಕ್ಕಮಗಳೂರು, ಕೊಡಗು, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಭಾರಿ ಮಳೆಯ ಮುನ್ನೆಚ್ಚರಿಕೆ ಹಿನ್ನೆಲೆಯಲ್ಲಿ ಸಾರ್ವಜನಿಕರು ಮತ್ತು ಪ್ರವಾಸಿಗರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಹಾಗೂ ಆಯಾ ಜಿಲ್ಲಾಡಳಿತಗಳು ಸೂಚಿಸಿವೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version