ಕಾವೇರಿ ಕಿಚ್ಚು: ಚಾಮರಾಜನಗರದಲ್ಲಿ ಹೆದ್ದಾರಿ ತಡೆ, ಕಪ್ಪು ಬಾವುಟ ಪ್ರದರ್ಶನ

ಚಾಮರಾಜನಗರ: ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿರುವುದನ್ನು ಖಂಡಿಸಿ, ಕೂಡಲೇ ಕಾವೇರಿ ಹೊರಹರಿವನ್ನು ನಿಲ್ಲಿಸುವಂತೆ ಒತ್ತಾಯಿಸಿ ಕನ್ನಡಪರ, ರೈತ ಸಂಘಟನೆಗಳು ಪ್ರತ್ಯೇಕ ಪ್ರತಿಭಟನೆ ನಡೆಸಿದರು.
ಕಬ್ಬು ಬೆಳೆಗಾರರ ಸಂಘದ ಕಾರ್ಯಕರ್ತರು ಚಾಮರಾಜನಗರ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ಒಂದು ತಾಸಿಗೂ ಹೆಚ್ಚು ಕಾಲ ರಸ್ತೆ ತಡೆ ನಡೆಸಿದರು.
ತಮಿಳುನಾಡಿಗೆ ಕಾವೇರಿ ನೀರನ್ನು ನಿಲ್ಲಿಸುವ ರಸ್ತೆ ಬಿಟ್ಟು ಕದಲುವುದಿಲ್ಲ ಎಂದು ರೈತರು ಪಟ್ಟು ಹಿಡಿದಿದ್ದರಿಂದ ಚಾಮರಾಜನಗರ ಪೊಲೀಸರು 20ಕ್ಕೂ ಹೆಚ್ಚು ರೈತ ಹೋರಾಟಗಾರರನ್ನು ವಶಕ್ಕೆ ಪಡೆದು ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಒಂದು ತಾಸಿಗೂ ಅಧಿಕ ಕಾಲ ರಸ್ತೆ ತಡೆದಿದ್ದರಿಂದ ನೂರಾರು ವಾಹನಗಳು ಸಾಲುಗಟ್ಟಿ ಸಂಚಾರ ಅಸ್ತವ್ಯಸ್ತವಾಗಿತ್ತು.
ಕಪ್ಪು ಬಾವುಟ ಪ್ರದರ್ಶನ:
ಕನ್ನಡಪರ ಸಂಘಟನೆಗಳು ಚಾಮರಾಜನಗರದ ಭುವನೇಶ್ವರಿ ವೃತ್ತದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಸರ್ಕಾರದ ವಿರುದ್ಧ ಕಪ್ಪು ಬಾವುಟ ಪ್ರದರ್ಶನ ಮಾಡಿ ಆಕ್ರೋಶ ಹೊರಹಾಕಿದರು.
ರಾಜಕೀಯ ಅಸ್ತಿತ್ವಕ್ಕಾಗಿ ತಮಿಳುನಾಡು ಸಿಎಂ ಸ್ಟಾಲಿನ್, ಕಾವೇರಿ ತಗಾದೆ ತೆಗೆದಿದ್ದಾರೆ, ನಮ್ಮ ರಾಜ್ಯಕ್ಕೆ ನೀರಿಲ್ಲದಿದ್ದರೂ ಇಲ್ಲಿನ ಸರ್ಕಾರ ನೀರು ಬಿಟ್ಟಿದೆ ಎಂದು ಆಕ್ರೋಶ ಹೊರಹಾಕಿದರು.