ಕೇಜ್ರಿವಾಲ್ ಗೆ ಕೊನೆಗೂ ಸಿಕ್ತು ಗುಡ್ ನ್ಯೂಸ್: ಜಾಮೀನು ಮಂಜೂರು

ನವದೆಹಲಿ: ಹೊಸ ಅಬಕಾರಿ ನೀತಿಯಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
156 ದಿನಗಳ ನಂತರ ಸಿಎಂ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದೆ. ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಅವರ ಪೀಠ ಈ ತೀರ್ಪು ನೀಡಿದೆ.
ಅರವಿಂದ ಕೇಜ್ರಿವಾಲ್ ಮತ್ತು ಸಿಬಿಐ ಪರ ವಕೀಲರನ್ನು ಆಲಿಸಿದ ನಂತರ ಸುಪ್ರೀಂ ಕೋರ್ಟ್ ಸೆಪ್ಟೆಂಬರ್ 5 ರಂದು ಈ ಪ್ರಕರಣದ ತೀರ್ಪನ್ನು ಕಾಯ್ದಿರಿಸಿತ್ತು. ಪ್ರಕರಣದ ವಿಚಾರಣೆ ವೇಳೆ ಸಿಬಿಐ ಪರ ವಾದ ಮಂಡಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್ ವಿ ರಾಜು, ಜಾಮೀನಿಗಾಗಿ ವಿಚಾರಣಾ ನ್ಯಾಯಾಲಯದ ಮೊರೆ ಹೋಗದಿರುವುದಕ್ಕೆ ಕೇಜ್ರಿವಾಲ್ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿದ್ದರು.
ಕೇಜ್ರಿವಾಲ್‌ಗೆ ಜಾಮೀನು ನೀಡುವ ವೇಳೆ ಆದೇಶದಲ್ಲಿ ನ್ಯಾಯಮೂರ್ತಿ ಸೂರ್ಯಕಾಂತ್ ಅವರು, ಸಿಬಿಐನಿಂದ ಬಂಧನ ಕಾನೂನು ಬದ್ಧವಾಗಿದೆ. ಅರವಿಂದ್ ಕೇಜ್ರಿವಾಲ್ ಅವರು ರೂ.10 ಲಕ್ಷ ಜಾಮೀನು ಬಾಂಡ್ ಮೇಲೆ ಬಿಡುಗಡೆಯಾಗಬೇಕಿದೆ. ಈ ಪ್ರಕರಣದ ಬಗ್ಗೆ ಸಾರ್ವಜನಿಕವಾಗಿ ಪ್ರತಿಕ್ರಿಯಿಸಲು ದೆಹಲಿ ಸಿಎಂಗೆ ಅವಕಾಶವಿಲ್ಲ ಎಂದು ಮಹತ್ವದ ಸೂಚನೆ ನೀಡಿದರು
ಕೇಜ್ರಿವಾಲ್ ಅವರು ನೇರವಾಗಿ ಜಾಮೀನಿಗಾಗಿ ದೆಹಲಿ ಹೈಕೋರ್ಟ್‌ಗೆ ಮೊರೆ ಹೋಗಿದ್ದರು ಮತ್ತು ನಂತರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈಗ ರದ್ದಾದ ದೆಹಲಿ ಅಬಕಾರಿ ನೀತಿ 2021–22 ರಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಸಿಎಂ ಅವರನ್ನು ಮಾರ್ಚ್ 21 ರಂದು ಇಡಿ ಬಂಧಿಸಿತ್ತು. ಜೂನ್ 26 ರಂದು ಅಬಕಾರಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಕಸ್ಟಡಿಯಲ್ಲಿದ್ದಾಗ ಸಿಬಿಐ ಅವರನ್ನು ಬಂಧಿಸಿತ್ತು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: