ಕುಮಟಾ: ನಿಂತಿದ್ದ ವಾಹನಕ್ಕೆ ಡಿಕ್ಕಿ ಹೊಡೆದ ಶಾಲಾ ವ್ಯಾನ್: ನಾಲ್ವರು ವಿದ್ಯಾರ್ಥಿಗಳಿಗೆ ಗಾಯ
ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ಪಟ್ಟಣದ ಹಳೆ ಬಸ್ ನಿಲ್ದಾಣದ ಬಳಿ ಶಾಲಾ ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ಓಮಿನಿ ವ್ಯಾನ್ ಹಾಗೂ ಬೊಲೆರೋ ವಾಹನವೊಂದಕ್ಕೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ವಿದ್ಯಾರ್ಥಿಗಳು ಹಾಗೂ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ.
ಘಟನೆಯ ವಿವರ: ಕುಮಟಾದ ಡಾ. ಎ.ವಿ. ಬಾಳಿಗಾ ಆಂಗ್ಲ ಮಾಧ್ಯಮ ಶಾಲೆಗೆ ಸೇರಿದ ಓಮಿನಿ ವ್ಯಾನ್ ಇದಾಗಿದ್ದು, ಶಾಲಾ ಅವಧಿ ಮುಗಿದ ನಂತರ ಮಕ್ಕಳನ್ನು ಮನೆಗೆ ಬಿಡಲು ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ರಸ್ತೆ ಬದಿಯಲ್ಲಿ ನಿಂತಿದ್ದ ಬೊಲೆರೋ ಪಿಕಪ್ ವಾಹನಕ್ಕೆ ಓಮಿನಿ ವ್ಯಾನ್ ವೇಗವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಓಮಿನಿ ವ್ಯಾನ್ ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಒಳಗೆ ಕುಳಿತಿದ್ದ ಮಕ್ಕಳು ರಸ್ತೆಯಲ್ಲೇ ಬಿದ್ದು ಒದ್ದಾಡುತ್ತಿದ್ದ ದೃಶ್ಯ ಮನಕಲಕುವಂತಿತ್ತು.
ಗಾಯಾಳುಗಳ ವಿವರ: ಅಪಘಾತದಲ್ಲಿ ತನಿಷ್ಕ (15), ಅದ್ವಿತ್ (12), ಅರ್ಜುನ್ (13) ಮತ್ತು ಆಯಿರಾ (10) ಎಂಬ ನಾಲ್ವರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಕುಮಟಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವ್ಯಾನ್ ಚಾಲಕನಿಗೂ ಕೂಡ ತೀವ್ರ ಪೆಟ್ಟು ಬಿದ್ದಿದೆ.
ವಿಷಯ ತಿಳಿಯುತ್ತಿದ್ದಂತೆಯೇ ಕುಮಟಾ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ದೃಶ್ಯಗಳು ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಘಟನೆಗೆ ಸಂಬಂಧಿಸಿದಂತೆ ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD


























