ಸೌಜನ್ಯ ಪ್ರಕರಣ ಮರುತನಿಖೆಗೆ ಒತ್ತಾಯಿಸಿ ಲಕ್ಷ, ಕೋಟಿ ಮಂದಿ ಬೀದಿಗೆ ಇಳಿಯಲಿದ್ದಾರೆ: ಮಹೇಶ್ ಶೆಟ್ಟಿ ತಿಮರೋಡಿ

ಉಡುಪಿ: ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರು ತನಿಖೆ ಮಾಡುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ಸೌಜನ್ಯ ಹೋರಾಟ ಸಮಿತಿಯ ನೇತೃತ್ವದಲ್ಲಿ ಉಡುಪಿಯಲ್ಲಿ ಇಂದು ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.
ಉಡುಪಿ ಶ್ರೀಕೃಷ್ಣನಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿ, ನಂತರ ಪಾದಯಾತ್ರೆ ಮೂಲಕ ಅಜ್ಜರಕಾಡು ಸೈನಿಕರ ಹುತಾತ್ಮ ಸ್ಮಾರಕ ಬಳಿ ನಡೆಸಿದ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ, ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಬಗ್ಗೆ ಮರು ತನಿಖೆ ನಡೆಸಿ ಆರೋಪಿಗಳನ್ನು ಪತ್ತೆ ಹಚ್ಚಿ ಕಠಿಣ ಶಿಕ್ಷೆ ವಿಧಿಸದಿದ್ದರೆ ಮುಂದಿನ ದಿನಗಳಲ್ಲಿ ವಿಧಾನಸೌಧ ಚಲೋ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಈ ಹೋರಾಟ ಸೌಜನ್ಯಳಿಗೆ ನ್ಯಾಯ ಸಿಗುವವರೆಗೆ ನಿರಂತರವಾಗಿ ಮುಂದುವರೆಯಲಿದೆ. ಸದ್ಯ ಶಾಂತಾ ರೀತಿಯಲ್ಲಿ ನಡೆಯುತ್ತಿರುವ ಈ ಪ್ರತಿಭಟನೆ ಮುಂದೆ ಇನ್ನಷ್ಟು ತೀವ್ರ ಪಡೆದು ಲಕ್ಷ ಕೋಟಿ ಮಂದಿ ಬೀದಿಗೆ ಇಳಿಯಲಿದ್ದಾರೆ. ಆದುದರಿಂದ ಪ್ರಕರಣದ ಮರುತನಿಖೆಗೆ ನಡೆಸಿ ಆರೋಪಿಗಳನ್ನು ಶಿಕ್ಷೆಗೆ ಗುರಿಪಡಿಸಬೇಕೆಂದು ಅವರು ಆಗ್ರಹಿಸಿದರು.
ಸೌಜನ್ಯಳ ತಾಯಿ ಕುಸುಮಾವತಿ ಮಾತನಾಡಿ, ನನ್ನ ಮಗಳಿಗೆ ನ್ಯಾಯ ಒದಗಿಸುವ ಕಾರ್ಯವನ್ನು ಜನ ಮಾಡುತ್ತಾರೆ ಎಂಬ ನಂಬಿಕೆ ನನಗೆ ಇದೆ ಎಂದು ಹೇಳಿದರು.
ಚಿಂತಕ ತಮ್ಮಣ್ಣ ಶೆಟ್ಟಿ ಮಾತನಾಡಿದರು. ವಕೀಲೆ ಅಂಬಿಕಾ ಪ್ರಭು ಪ್ರಾಸ್ತಾವಿಕವಾಗಿ ಮಾತನಾಡಿದರು. ರಾಮಾಂಜಿ ನಮ್ಮಭೂಮಿ ಕಾರ್ಯಕ್ರಮ ನಿರೂಪಿಸಿದರು.