ಕೇರಳ ಮಿನಿ ಪಾಕಿಸ್ತಾನವಂತೆ: ಕೇರಳಿಗರು ಭಯೋತ್ಪಾದಕರು ಎಂದ ಬಿಜೆಪಿ ನಾಯಕ - Mahanayaka
9:42 PM Saturday 25 - January 2025

ಕೇರಳ ಮಿನಿ ಪಾಕಿಸ್ತಾನವಂತೆ: ಕೇರಳಿಗರು ಭಯೋತ್ಪಾದಕರು ಎಂದ ಬಿಜೆಪಿ ನಾಯಕ

30/12/2024

ಬಿಜೆ‍ಪಿ ನಾಯಕ, ಮಹಾರಾಷ್ಟ್ರ ಬಂದರು ಹಾಗೂ ಮೀನುಗಾರಿಕಾ ಸಚಿವ ನಿತೇಶ್ ರಾಣೆ ಕೇರಳವನ್ನು ‘ಮಿನಿ ಪಾಕಿಸ್ತಾನ’ ಎಂದು ಕರೆದಿದ್ದಾರೆ. ಇದು ಈಗ ವ್ಯಾಪಕ ಟೀಕೆಗೆ ಗುರಿಯಾಗಿದೆ. ಅದಕ್ಕಾಗಿಯೇ ರಾಹುಲ್ ಗಾಂಧಿ ಹಾಗೂ ಅವರ ಸಹೋದರಿ ಅಲ್ಲಿಂದ ಗೆಲುವು ಸಾಧಿಸಿದ್ದಾರೆ ಎಂದಿರುವ ನಿತೇಶ್ ರಾಣೆ, ಅಲ್ಲಿಯ ಮತದಾರರನ್ನು ಭಯೋತ್ಪಾದಕರಿಗೆ ಹೋಲಿಸಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಅವರ ಸಹೋದರಿ ‍ಪ್ರಿಯಾಂಕಾ ಗಾಂಧಿ ಕೇರಳದ ವಯನಾಡ್ ಕ್ಷೇತ್ರದಿಂದ ಗೆಲುವು ಸಾಧಿಸಿದ್ದನ್ನು ಉಲ್ಲೇಖಿಸಿ ಮಹಾರಾಷ್ಟ್ರ ಬಂದರು ಹಾಗೂ ಮೀನುಗಾರಿಕಾ ಸಚಿವ ನಿತೇಶ್ ರಾಣೆ ಹೀಗೆ ಹೇಳಿದ್ದಾರೆ.

‘ಕೇರಳ ಮಿನಿ ಪಾಕಿಸ್ತಾನ. ಅದಕ್ಕಾಗಿಯೇ ರಾಹುಲ್ ಗಾಂಧಿ ಹಾಗೂ ಅವರ ಸಹೋದರಿ ಅಲ್ಲಿಂದ ಗೆಲುವು ಸಾಧಿಸಿದ್ದಾರೆ. ಎಲ್ಲಾ ಭಯೋತ್ಪಾದಕರು ಅವರಿಗೆ ಮತ ಹಾಕುತ್ತಾರೆ. ನಾನು ಸತ್ಯವನ್ನೇ ಹೇಳುತ್ತಿದ್ದೇನೆ. ಇವರೆಲ್ಲಾ ಭಯೋತ್ಪಾದಕರ ನೆರವಿನಿಂದ ಸಂಸದರಾಗುತ್ತಿದ್ದಾರೆ’ ಎಂದು ರಾಣೆ ಹೇಳಿದ್ದಾರೆ.

ಅಫ್ಜಲ್ ಖಾನ್ ಎದುರು ಛತ್ರಪತಿ ಶಿವಾಜಿಯ ಐತಿಹಾಸಿಕ ಗೆಲುವಿನ ಸಂಭ್ರಮ ವರ್ಷಾಚರಣೆ ವೇಳೆ ರಾಣೆ ಈ ಮಾತುಗಳನ್ನು ಆಡಿದ್ದಾರೆ.

2019ರಲ್ಲಿ ಕೇರಳದ ವಯನಾಡ್ ಹಾಗೂ ಉತ್ತರ ಪ್ರದೇಶದ ಅಮೇಠಿಯಿಂದ ಸ್ಪರ್ಧೆ ಮಾಡಿದ್ದ ರಾಹುಲ್ ಗಾಂಧಿ, ವಯನಾಡ್‌ನಲ್ಲಿ ಗೆದ್ದಿದ್ದರು. 2024ರಲ್ಲೂ ರಾಹುಲ್ ವಯನಾಡ್‌ನಲ್ಲಿ ಗೆಲುವು ಸಾಧಿಸಿದ್ದರು. ರಾಯ್‌ಬರೇಲಿ ಕ್ಷೇತ್ರವನ್ನು ಉಳಿಸಿಕೊಂಡು ವಯನಾಡ್ ಲೋಕಸಭಾ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ನಂತರ ನಡೆದ ಉಪಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ ಗೆದ್ದಿದ್ದರು. ಬಿಜೆಪಿ ನಾಯಕನ ಈ ಹೇಳಿಕೆಗೆ ಕಾಂಗ್ರೆಸ್ ತಿರುಗೇಟು ನೀಡಿದೆ.

‘ಮುಂಬರುವ ಚುನಾವಣೆಗಳಲ್ಲಿ ಕೇರಳದಲ್ಲಿ ಪಕ್ಷ ಸ್ಪರ್ಧೆ ಮಾಡುತ್ತದೆಯೋ ಇಲ್ಲವೋ ಎಂದು ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ರನ್ನು ಪ್ರಶ್ನಿಸಿ. ಇಂಥ ಅಸಂವಿಧಾನಿಕ ಹೇಳಿಕೆಗಳು ಬಿಜೆಪಿ ನಾಯಕರಿಂದ ಪದೇ ಪದೇ ಬರುತ್ತಿರುತ್ತದೆ’ ಎಂದು ಕಾಂಗ್ರೆಸ್ ನಾಯಕ ‍ಪವನ್ ಖೇರಾ ಎಕ್ಸ್‌ನಲ್ಲಿ ಕಿಡಿಕಾರಿದ್ದಾರೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ