ಪುನೀತ್ ಕೆರೆಹಳ್ಳಿ ಜೊತೆ ಗುರುತಿಸಿಕೊಂಡಿದ್ದ ವ್ಯಕ್ತಿ ವಿಧಾನಸೌಧದ ಮುಂಭಾಗದಲ್ಲೇ ಆತ್ಮಹತ್ಯೆಗೆ ಯತ್ನ!
ಬೆಂಗಳೂರು: ರಾಜ್ಯದ ಶಕ್ತಿ ಕೇಂದ್ರವಾದ ವಿಧಾನಸೌಧದ ಮುಂಭಾಗದಲ್ಲೇ ವ್ಯಕ್ತಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ.
ಘಟನೆಯ ವಿವರ: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಡಾ. ನಾಗೇಂದ್ರಪ್ಪ ಎಂದು ಗುರುತಿಸಲಾಗಿದೆ. ಇವರು ಇಂದು ಮಧ್ಯಾಹ್ನ ವಿಧಾನಸೌಧದ ಮುಂಭಾಗಕ್ಕೆ ಬಂದು ವಿಷ ಸೇವಿಸಿದ್ದಾರೆ. ತಕ್ಷಣ ಎಚ್ಚೆತ್ತ ಅಲ್ಲಿನ ಭದ್ರತಾ ಸಿಬ್ಬಂದಿ ಮತ್ತು ಪೊಲೀಸರು ಅವರ ಕೈಯಲ್ಲಿದ್ದ ವಿಷದ ಬಾಟಲಿಯನ್ನು ಕಿತ್ತುಕೊಂಡು, ಕೂಡಲೇ ಅವರನ್ನು ಚಿಕಿತ್ಸೆಗಾಗಿ ಬೌರಿಂಗ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪ್ರಸ್ತುತ ಅವರ ಸ್ಥಿತಿ ಗಂಭೀರವಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿದಿದೆ.
ಆತ್ಮಹತ್ಯೆ ಯತ್ನಕ್ಕೆ ಕಾರಣವೇನು? ವರದಿಗಳ ಪ್ರಕಾರ, ಡಾ. ನಾಗೇಂದ್ರಪ್ಪ ಅವರು ಅಕ್ರಮ ಬಾಂಗ್ಲಾದೇಶಿ ವಲಸಿಗರನ್ನು ಪತ್ತೆ ಹಚ್ಚುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು. ಈ ವಿಷಯದಲ್ಲಿ ತಮಗೆ ಪೊಲೀಸರಿಂದ ನಿರಂತರವಾಗಿ ಕಿರುಕುಳ ನೀಡಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ ಎನ್ನಲಾಗಿದೆ.
ನಗರದಲ್ಲಿ ಅಕ್ರಮವಾಗಿ ಬಾಂಗ್ಲಾ ನಿವಾಸಿಗಳು ನೆಲೆಸಿದ್ದಾರೆ ಅಂತಾ ನಾಗೇಂದ್ರಪ್ಪ ಮತ್ತು ಕೊಲೆ ಆರೋಪಿಯಾಗಿರುವ ಪುನೀತ್ ಕೆರೆಹಳ್ಳಿ ಎಂಬುವವರು ಆರೋಪಿಸಿ, ಕುಟುಂಬವೊಂದಕ್ಕೆ ಕಿರುಕುಳ ನೀಡಿ, ವಿಡಿಯೋ ವೈರಲ್ ಮಾಡಿದ್ದರು. ಈ ಸಂಬಂಧ ಪ್ರಕರಣ ದಾಖಲಾಗಿತ್ತು. ಹೀಗಾಗಿ ತನಗೆ ಸೂಲದೇವನಹಳ್ಳಿ ಪೊಲೀಸರಿಂದ ಕಿರುಕುಳ ನೀಡುತ್ತಿದ್ದಾರೆ ಅಂತ ಮನನೊಂದು ಈ ನಿರ್ಧಾರ ಕೈಗೊಳ್ಳಲಾಗಿರುವುದಾಗಿ ತಿಳಿದು ಬಂದಿದೆ.
ವಿಧಾನಸೌಧ ಪೊಲೀಸರು ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿದ್ದು, ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD

























