ಮಂಗಳೂರು: ಕುಖ್ಯಾತ ಡ್ರಗ್ ಪೆಡ್ಲರ್ ಸೇರಿದಂತೆ ಮೂವರನ್ನು ಬಂಧಿಸಿದ ಸಿಸಿಬಿ ಪೊಲೀಸರು - Mahanayaka
7:39 PM Thursday 4 - September 2025

ಮಂಗಳೂರು: ಕುಖ್ಯಾತ ಡ್ರಗ್ ಪೆಡ್ಲರ್ ಸೇರಿದಂತೆ ಮೂವರನ್ನು ಬಂಧಿಸಿದ ಸಿಸಿಬಿ ಪೊಲೀಸರು

ccb police
13/08/2023


Provided by

ಮಂಗಳೂರು ನಗರದಾದ್ಯಂತ ಮಾದಕ ವಸ್ತುವಾದ ಎಂಡಿಎಂಎ ಅನ್ನು  ಮಾರಾಟ ಮಾಡುತ್ತಿದ್ದ ಕುಖ್ಯಾತ ಡ್ರಗ್ ಪೆಡ್ಲರ್ ಸೇರಿದಂತೆ ಮೂವರನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಮಂಗಳೂರು ಮೂಡುಶೆಡ್ಡೆಯ ನಿವಾಸಿ ಮುಹಮ್ಮದ್ ಇಮ್ರಾನ್ ಎಂಬಾತನು ಇನ್ನಿಬ್ಬರು ವ್ಯಕ್ತಿಗಳೊಂದಿಗೆ ಸೇರಿಕೊಂಡು ಬೆಂಗಳೂರಿನಿಂದ ಎಂಡಿಎಂಎ ಮಾದಕ ವಸ್ತುವನ್ನು ವಶದಲ್ಲಿರಿಸಿಕೊಂಡು ಖರೀದಿಸಿಕೊಂಡು ಬಿಳಿ ಬಣ್ಣದ ಮಾರುತಿ ರಿಡ್ಜ್ ಕಾರಿನಲ್ಲಿ ಸಾಗಾಟ ಮಾಡಿಕೊಂಡು ಬೊಂದೆಲ್ ಪಡುಶೆಡ್ಡೆ ಪರಿಸರದಲ್ಲಿ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಘಟಕದ ಎಸಿಪಿಯವರಾದ ಪಿ ಎ ಹೆಗಡೆ ರವರ ನೇತೃತ್ವದ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಎಂಡಿಎಂಎ ಎಂಬ ನಿಷೇದಿತ ಮಾದಕ ವಸ್ತುವನ್ನು ಹೊಂದಿದ್ದ ಇಮ್ರಾನ್, ಅಮ್ಜತ್ ಖಾನ್,

ಅಬ್ದುಲ್ ಬಶೀರ್ ಅಬ್ಬಾಸ್ ಎಂಬುವವರನ್ನು ವಶಕ್ಕೆ ಪಡೆದುಕೊಂಡು ಅವರ ವಶದಿಂದ ಒಟ್ಟು 170 ಗ್ರಾಂ ತೂಕದ 9,00,000 ಮೌಲ್ಯದ ಎಂಡಿಎಂಎ ಮಾದಕ ವಸ್ತು, ಎಂಡಿಎಂಎ ಫಿಲ್ಸ್-5, ಮಾರುತಿ ರಿಡ್ಜ್ ಕಾರು-1,  6 ಮೊಬೈಲ್ ಫೋನುಗಳು, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ರೂಪಾಯಿ 14,76,500 ಆಗಬಹುದು. ಆರೋಪಿಗಳ ವಿರುದ್ಧ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ಈ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಅವರ ಪತ್ತೆ ಕಾರ್ಯ ಮುಂದುವರಿದಿದೆ.

ಆರೋಪಿಗಳ ಪೈಕಿ ಇಮ್ರಾನ್ @ ಮೂಡುಶೆಡ್ಡೆ ಇಮ್ರಾನ್ ಎಂಬಾತನ ವಿರುದ್ಧ ಈ ಹಿಂದೆ 2016 ನೇ ಇಸವಿಯಲ್ಲಿ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವಾಮಂಜೂರು ಚರಣ್ ಎಂಬಾತನ ಕೊಲೆ ಪ್ರಕರಣ, ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಗಾಂಜಾ ಸಾಗಾಟ ಮತ್ತು ಮಾರಾಟ ಪ್ರಕರಣ, 2017 ನೇ ಇಸವಿಯಲ್ಲಿ ಕಾವೂರು ಪೊಲೀಸ್ ಠಾಣೆಯಲ್ಲಿ ದರೋಡೆ ಪ್ರಕರಣ, 2019 ನೇ ಇಸವಿಯಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಗಾಂಜಾ ಸಾಗಾಟ ಮತ್ತು ಮಾರಾಟ ಪ್ರಕರಣ, 2020 ನೇ ಇಸವಿಯಲ್ಲಿ ಬಜಪೆ ಪೊಲೀಸ್ ಠಾಣೆಯಲ್ಲಿ ಮನೆಗೆ ಅಕ್ರಮ ಪ್ರವೇಶ ಮಾಡಿ ಹಾನಿಗೊಳಿಸಿದ  ಪ್ರಕರಣ, 2022 ನೇ ಇಸವಿಯಲ್ಲಿ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಸೇವನೆಯ 1 ಪ್ರಕರಣ, ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ MDMA ಸಾಗಾಟ ಮತ್ತು ಮಾರಾಟ ಪ್ರಕರಣ, ಉಡುಪಿ ಜಿಲ್ಲೆಯ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ  MDMA ಸಾಗಾಟ ಮತ್ತು ಮಾರಾಟ ಪ್ರಕರಣ, 2023 ನೇ ಇಸವಿಯಲ್ಲಿ ಕಾವೂರು ಪೊಲೀಸ್ ಠಾಣೆಯಲ್ಲಿ MDMA ಸಾಗಾಟ ಮತ್ತು ಮಾರಾಟ ಪ್ರಕರಣ ಸೇರಿದಂತೆ ಒಟ್ಟು 9 ಪ್ರಕರಣಗಳು  ದಾಖಲಾಗಿರುತ್ತದೆ. ಈತನು ಇತ್ತೀಚೆಗೆ ಒಂದು ವಾರದ ಹಿಂದೆ ಜೈಲ್ ನಿಂದ ಜಾಮೀನು ಪಡೆದು ಬಿಡುಗಡೆಗೊಂಡಿದ್ದನು.

ಇನ್ನೋರ್ವ ಆರೋಪಿ ಅಬ್ದುಲ್ ಬಶೀರ್ ಅಬ್ಬಾಸ್ ಎಂಬಾತನ ವಿರುದ್ಧ ಈ ಹಿಂದೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣವೊಂದು ದಾಖಲಾಗಿರುತ್ತದೆ.

ಈ ಮಾದಕ ವಸ್ತು ಮಾರಾಟ ಜಾಲದ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಪಿ ಎ ಹೆಗಡೆ, ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐ ಯವರಾದ ನರೇಂದ್ರ, ಸುದೀಪ್ ಎಂ ವಿ, ಶರಣಪ್ಪ ಭಂಡಾರಿ ಹಾಗೂ ಸಿಸಿಬಿ ಸಿಬ್ಬಂದಿಯವರು  ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ