10:56 AM Thursday 6 - November 2025

ಮಂಗಳೂರು ಸಿಸಿಬಿ ಪೊಲೀಸರಿಂದ ಸರಗಳ್ಳತನ ಪ್ರಕರಣದ ಕುಖ್ಯಾತ ಆರೋಪಿಯ ಬಂಧನ

mangalore
05/11/2023

ಸರಗಳ್ಳತನ ಪ್ರಕರಣದ ಕುಖ್ಯಾತ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ದಿನಾಂಕ 21-10-2023 ಮಂಗಳೂರು ನಗರದ  ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಬಿಜೈ ಚರ್ಚ್ ಮೈನ್ ರೋಡ್ ನಲ್ಲಿ ಬೆಳಗಿನ ಜಾವ ಮಹಿಳೆಯೊಬ್ಬರು ವಾಕಿಂಗ್ ಮಾಡುತ್ತಿದ್ದಾಗ ಇಬ್ಬರು ಅಪರಿಚಿತ ಯುವಕರು ಬೈಕ್ ನಲ್ಲಿ ಬಂದು ಮಹಿಳೆಯ ಕುತ್ತಿಗೆಯಿಂದ ಸರ ಸುಲಿಗೆ ಮಾಡಿದ ಬಗ್ಗೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ಆರೋಪಿ ಪತ್ತೆಯ ಬಗ್ಗೆ ಮಂಗಳೂರು ಸಿಸಿಬಿ ಘಟಕದಿಂದ ವಿಶೇಷ ತಂಡವನ್ನು ರಚಿಸಿ ಈ ದಿನ  ಆರೋಪಿಯನ್ನು ದಸ್ತಗಿರಿ ಮಾಡಿ ಲಕ್ಷಾಂತರ ರೂ ಮೌಲ್ಯದ ಚಿನ್ನದ ಸರ ಮತ್ತು ಕೃತ್ಯಕ್ಕೆ ಬಳಸಿದ ಮೋಟಾರ್ ಸೈಕಲ್ ಅನ್ನು ಸ್ವಾಧೀನಪಡಿಸಿಕೊಳ್ಳುವಲ್ಲಿ   ಯಶಸ್ವಿಯಾಗಿರುತ್ತಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾದ ರಾಮನಗರ ಬಿಡದಿಯ ಚಂದ್ರಶೇಖರ @ ಡಾರ್ಲಿಂಗ್ ಚಂದ್ರ ಎಂಬಾತನನ್ನು  ಮಂಗಳೂರು ಸಿಸಿಬಿ ಪೊಲೀಸರು ಬಂಗ್ರ ಕೂಳೂರು ಬಳಿಯಿಂದ ಬಂಧಿಸಿದ್ದಾರೆ. ಆರೋಪಿ  ಸುಲಿಗೆ ಮಾಡಿದ್ದ  21.300 ಗ್ರಾಂ ತೂಕದ ತುಂಡಾದ ಚಿನ್ನದ ಕರಿಮಣಿ ಸರವನ್ನು ಮತ್ತು ಕೃತ್ಯಕ್ಕೆ ಉಪಯೋಗಿಸಿದ ಬೈಕನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.

ಆರೋಪಿಯಿಂದ  ಸ್ವಾಧೀನ ಪಡಿಸಿಕೊಂಡ  ಸೊತ್ತುಗಳ  ವಿವರ:

1) 21.3 ಗ್ರಾಂ ತೂಕದ ತುಂಡಾದ ಚಿನ್ನದ ಕರಿಮಣಿ ಸರ-1

2) VIVO ಕಂಪನಿಯ ಮೊಬೈಲ್ ಫೋನ್-1

3) HERO ಕಂಪನಿಯ ಕೀಪ್ಯಾಡ್ ಮೊಬೈಲ್ ಫೋನ್ – 1

4) KA-41-EW-8959   ಬಿಳಿ ಬಣ್ಣದ ಬಜಾಜ್ ಕಂಪನಿಯ ಪಲ್ಸರ್ NS 200  ಮೋಟಾರ್ ಸೈಕಲ್.

ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 2,41,000 ರೂ ಆಗಬಹುದು.

ಆರೋಪಿತನ ಮೇಲೆ ಈ ಹಿಂದೆ ರಾಮನಗರ ಜಿಲ್ಲೆಯ ಹಾರೋಹಳ್ಳಿ ಪೊಲೀಸ್ ಠಾಣೆ, ಕುಂಬ್ಳಗೋಡು, ಬಿಡದಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದಾಬಸ್ ಪೇಟೆ ಹಾಗೂ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಗಳಲ್ಲಿ  ಸುಲಿಗೆ, ಕೊಲೆ, ಕೊಲೆಯತ್ನ ಹಾಗೂ ಹಲ್ಲೆ ಪ್ರಕರಣಗಳು ದಾಖಲಾಗಿರುತ್ತವೆ.

ಈ ಪತ್ತೆ ಕಾರ್ಯವನ್ನು ಮಂಗಳೂರು ನಗರ  ಮಾನ್ಯ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಾರ್ಗದರ್ಶನದಂತೆ ಕಾನೂನು ಮತ್ತು ಸುವ್ಯವಸ್ಥೆಯ ಡಿಸಿಪಿ ಸಿದ್ದಾರ್ಥ ಗೋಯಲ್ ಐಪಿಎಸ್ ಮತ್ತು ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ದಿನೇಶ್ ಕುಮಾರ್ ಅವರ ನಿರ್ದೇಶನದಂತೆ ಮಂಗಳೂರು ಸಿಸಿಬಿ ಘಟಕದ  ಎಸಿಪಿ ಪಿ.ಎ.ಹೆಗಡೆ ರವರ ನೇತೃತ್ವದಲ್ಲಿ  ಈ ಆರೋಪಿ ಪತ್ತೆ ಮತ್ತು ಸೊತ್ತು ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಅಧಿಕಾರಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

Exit mobile version