ವಾಲ್ಮೀಕಿ ಹಗರಣ: ಸಚಿವ ನಾಗೇಂದ್ರ ರಾಜೀನಾಮೆಗೆ ಪಟ್ಟು; ಚಿಕ್ಕಮಗಳೂರಿನಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ, 200ಕ್ಕೂ ಹೆಚ್ಚು ಕಾರ್ಯಕರ್ತರ ಬಂಧನ
ಚಿಕ್ಕಮಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಚಿಕ್ಕಮಗಳೂರು ಜಿಲ್ಲಾ ಬಿಜೆಪಿಯಿಂದ ಇಂದು ಬೃಹತ್ ಪ್ರತಿಭಟನೆ ನಡೆಯಿತು.
ನಗರದ ತಾಲೂಕು ಕಚೇರಿ ಮುಂಭಾಗ ಜಮಾಯಿಸಿದ 200ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು, ಸಚಿವ ನಾಗೇಂದ್ರ ಹಾಗೂ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. ಸಚಿವ ಸ್ಥಾನಕ್ಕೆ ನಾಗೇಂದ್ರ ರಾಜೀನಾಮೆ ನೀಡಲೇಬೇಕು ಎಂದು ಪಟ್ಟು ಹಿಡಿದರು.
ಪ್ರತಿಭಟನೆಯ ಭಾಗವಾಗಿ ಬಿಜೆಪಿ ಕಾರ್ಯಕರ್ತರು ಜಿಲ್ಲಾಧಿಕಾರಿ (DC) ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಎಸ್ಪಿ ಕಚೇರಿ ಬಳಿ ಪೊಲೀಸರು ಬ್ಯಾರಿಕೇಡ್ ಹಾಕಿ ಪ್ರತಿಭಟನಾಕಾರರನ್ನು ತಡೆದರು. ಇದರಿಂದಾಗಿ ಪೊಲೀಸರು ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ತಳ್ಳಾಟ-ನೂಕಾಟ ನಡೆದು ಸ್ಥಳದಲ್ಲಿ ಕೆಲ ಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.
ಪರಿಸ್ಥಿತಿ ಕೈಮೀರುತ್ತಿದ್ದಂತೆ ಕಾರ್ಯಕರ್ತರನ್ನು ಹತೋಟಿಗೆ ತಂದ ಪೊಲೀಸರು, ಮಹಿಳಾ ಕಾರ್ಯಕರ್ತೆಯರು ಸೇರಿದಂತೆ 200ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದರು. ಬಂದಿತರನ್ನು ಒಂದು ಬಸ್ ಹಾಗೂ ಎರಡು ಪೊಲೀಸ್ ವ್ಯಾನ್ಗಳಲ್ಲಿ ಸ್ಥಳದಿಂದ ಕರೆದೊಯ್ಯಲಾಯಿತು.
ರಾಜ್ಯ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ಪ್ರತಿಭಟನೆಯನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಪ್ರತಿಭಟನಾಕಾರರು ಎಚ್ಚರಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD




























