ಮುಂಗಾರು ಕೊರತೆ: ಕುಡಿಯುವ ನೀರು ಮತ್ತು ಕೃಷಿ ರಕ್ಷಣೆಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ - Mahanayaka

ಮುಂಗಾರು ಕೊರತೆ: ಕುಡಿಯುವ ನೀರು ಮತ್ತು ಕೃಷಿ ರಕ್ಷಣೆಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ

siddaramaiah
16/04/2026

ಬೆಂಗಳೂರು: ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಉಳಿದೆಲ್ಲೆಡೆ ಮುಂಗಾರು ಮಳೆ ಕೊರತೆಯಾಗುವ ಮುನ್ಸೂಚನೆ ಇರುವ ಹಿನ್ನೆಲೆಯಲ್ಲಿ, ಸಾರ್ವಜನಿಕರಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಸಿಇಒಗಳೊಂದಿಗೆ ನಡೆಸಿದ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಸಿಎಂ ಹಲವು ಪ್ರಮುಖ ನಿರ್ದೇಶನಗಳನ್ನು ನೀಡಿದರು.

ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾದರೆ ಆಯಾ ಜಿಲ್ಲಾಧಿಕಾರಿಗಳನ್ನೇ ನೇರ ಹೊಣೆ ಮಾಡಲಾಗುವುದು.  ರಾಜ್ಯದ 14 ಪ್ರಮುಖ ಜಲಾಶಯಗಳಲ್ಲಿ ಶೇ. 36 ರಷ್ಟು ನೀರು ಲಭ್ಯವಿದ್ದು, ಜುಲೈ ಮಧ್ಯದವರೆಗೆ ಕುಡಿಯುವ ನೀರಿಗಾಗಿ ಇದನ್ನು ಕಾಯ್ದಿರಿಸಬೇಕು. ನೀರಾವರಿಗಿಂತ ಕುಡಿಯುವ ನೀರಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಅವರು ಸೂಚನೆ ನೀಡಿದರು.

ಅನಿವಾರ್ಯ ಸಂದರ್ಭಗಳಲ್ಲಿ ಮಾತ್ರ ಟ್ಯಾಂಕರ್ ಮೂಲಕ ನೀರು ಪೂರೈಸಬೇಕು. ಖಾಸಗಿ ಬೋರ್‌ವೆಲ್‌ಗಳನ್ನು ಬಾಡಿಗೆಗೆ ಪಡೆಯಲು ಆದ್ಯತೆ ನೀಡಬೇಕು. ಕುಡಿಯುವ ನೀರು ಪೂರೈಕೆಗೆ ಹಣಕಾಸಿನ ತೊಂದರೆಯಿಲ್ಲ. ಜಿಲ್ಲಾಧಿಕಾರಿಗಳ ವರದಿ ಆಧಾರದ ಮೇಲೆ ಅಗತ್ಯ ಅನುದಾನ ನೀಡಲು ಹಣಕಾಸು ಇಲಾಖೆಗೆ ಸೂಚಿಸಲಾಗಿದೆ ಅಂತಾ ತಿಳಿಸಿದರು.

ಏಪ್ರಿಲ್‌ನಿಂದ ಜೂನ್ ಅವಧಿಯಲ್ಲಿ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಹೆಚ್ಚಿನ ಬಿಸಿಗಾಳಿ (Heat Wave) ಬೀಸುವ ಸಾಧ್ಯತೆಯಿದೆ. ಸಾರ್ವಜನಿಕರಿಗೆ ನೆರಳಿನ ವ್ಯವಸ್ಥೆ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಸೂಚಿಸಲಾಗಿದೆ. ಹವಾಮಾನ ಇಲಾಖೆಯ ಮುನ್ಸೂಚನೆಗಳನ್ನು ಗಂಭೀರವಾಗಿ ಪರಿಗಣಿಸಲು ತಿಳಿಸಲಾಗಿದೆ ಎಂದು ತಿಳಿಸಿದರು.

ಇನ್ನೂ,  ಮಧ್ಯಪ್ರಾಚ್ಯದ ಯುದ್ಧದ ಹಿನ್ನೆಲೆಯಲ್ಲಿ ರಸಗೊಬ್ಬರ ಪೂರೈಕೆಯಲ್ಲಿ ಅಡಚಣೆಯಾಗುವ ಭೀತಿಯಿದೆ.  ವ್ಯಾಪಾರಿಗಳು ರಸಗೊಬ್ಬರ ದಾಸ್ತಾನು ಮಾಡುವುದನ್ನು ತಡೆಯಬೇಕು. ರಸಗೊಬ್ಬರ ಹೊರ ರಾಜ್ಯಗಳಿಗೆ ಸಾಗಣೆಯಾಗದಂತೆ ಚೆಕ್ ಪೋಸ್ಟ್‌ಗಳಲ್ಲಿ ತಪಾಸಣೆ ಬಿಗಿಗೊಳಿಸಬೇಕು. ಸದ್ಯಕ್ಕೆ ಮೇವಿನ ಕೊರತೆಯಿಲ್ಲದಿದ್ದರೂ, ಮುಂದಿನ ದಿನಗಳಲ್ಲಿ ಸಮಸ್ಯೆ ಉಂಟಾಗದಂತೆ ನಿಗಾ ವಹಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು.

ಕಂದಾಯ, ಪಂಚಾಯತ್ ರಾಜ್ ಮತ್ತು ನಗರಾಭಿವೃದ್ಧಿ ಇಲಾಖೆಗಳು ಸಮನ್ವಯದಿಂದ ಕೆಲಸ ಮಾಡಬೇಕು.  ತಾಲೂಕು ಮತ್ತು ವಾರ್ಡ್ ಮಟ್ಟದಲ್ಲಿ ನಿಯಂತ್ರಣ ಕೊಠಡಿ (Control Rooms) ಸ್ಥಾಪಿಸಿ ಸಾರ್ವಜನಿಕರ ಅಹವಾಲುಗಳಿಗೆ ತಕ್ಷಣ ಸ್ಪಂದಿಸಬೇಕು.  ಕಲುಷಿತ ನೀರು ಪೂರೈಕೆಯಾಗದಂತೆ ಎಚ್ಚರ ವಹಿಸಬೇಕು. ಯಾವುದೇ ಆರೋಗ್ಯ ಸಮಸ್ಯೆ ಉಂಟಾದರೆ ಜಿಲ್ಲಾಧಿಕಾರಿಗಳೇ ಜವಾಬ್ದಾರರಾಗಿರುತ್ತಾರೆ ಎಂದರು.

ಸಮಸ್ಯಾತ್ಮಕ ತಾಲೂಕುಗಳು: ರಾಜ್ಯದ 213 ತಾಲೂಕುಗಳಲ್ಲಿ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆಯಿದೆ. ಪ್ರಸ್ತುತ 137 ಗ್ರಾಮಗಳಿಗೆ 129 ಟ್ಯಾಂಕರ್‌ಗಳ ಮೂಲಕ ನೀರು ಪೂರೈಸಲಾಗುತ್ತಿದೆ. ಕುಡಿಯುವ ನೀರಿನ ಯೋಜನೆಗಳಿಗೆ ವಿದ್ಯುತ್ ಸಂಪರ್ಕ ನೀಡಲು ಠೇವಣಿಗಾಗಿ ಕಾಯದೆ ತಕ್ಷಣ ಕ್ರಮ ಕೈಗೊಳ್ಳಲು ಇಂಧನ ಇಲಾಖೆಗೆ ಸೂಚಿಸಲಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ