ಮೂಡಬಿದ್ರೆ ಇನ್ಸ್‌ಪೆಕ್ಟರ್ ಸಂದೇಶ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು!
ಮಂಗಳೂರು: ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಈ ಹಿಂದೆ ಅವರ ಮೇಲಿದ್ದ ಆರೋಪಗಳು ಸುಳ್ಳು ಎಂದು ಪೊಲೀಸ್ ವರದಿ ಹೇಳಿದ್ದ ಬೆನ್ನಲ್ಲೇ, ಈಗ ಅವರ ವಿರುದ್ಧ ಬೆಳ್ತಂಗಡಿ ತಾಲೂಕಿನ ವೇಣೂರು ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದೆ.
ಸಂತ್ರಸ್ತ ಶಿಕ್ಷಕಿಯೊಬ್ಬರು ನೀಡಿದ ದೂರಿನ ಮೇರೆಗೆ ಈ ಎಫ್ ಐಆರ್ ದಾಖಲಿಸಲಾಗಿದೆ. 2018ರಿಂದ 2023ರ ಅವಧಿಯಲ್ಲಿ ಸಂದೇಶ್ ಅವರು ಶಿಕ್ಷಕಿಯ ಮನೆಗೆ ಹೋಗಿ ಬೆದರಿಸಿ ಅತ್ಯಾಚಾರ ಎಸಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಸಂದೇಶ್ ಅವರು 2020ರಲ್ಲಿ ಬೆಳ್ತಂಗಡಿ ಸರ್ಕಲ್ ವ್ಯಾಪ್ತಿಯ ವೇಣೂರು ಠಾಣೆಯಲ್ಲಿ ಇನ್ಸ್‌ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಐಪಿಸಿ ಸೆಕ್ಷನ್ 376(2)(a)(1), 376(2)(n), 384 (ಸುಲಿಗೆ) ಮತ್ತು 506 (ಜೀವ ಬೆದರಿಕೆ) ಅಡಿಯಲ್ಲಿ ಕೇಸ್ ದಾಖಲಿಸಲಾಗಿದೆ.
ಕುತೂಹಲಕಾರಿ ಸಂಗತಿಯೆಂದರೆ, ಇನ್ಸ್‌ಪೆಕ್ಟರ್ ಸಂದೇಶ್ ವಿರುದ್ಧ ಈ ಹಿಂದೆ ಇಬ್ಬರು ಮಹಿಳೆಯರು ಮಾಡಿದ್ದ ಲೈಂಗಿಕ ಕಿರುಕುಳದ ಆರೋಪಗಳಿಗೆ ಸಾಕ್ಷಿ ಇಲ್ಲ ಮತ್ತು ಪ್ರೇರಿತ ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರು ಇತ್ತೀಚೆಗಷ್ಟೇ ಮಾಹಿತಿ ನೀಡಿದ್ದರು. ಆ ವರದಿ ಹೊರಬಂದ ಬೆನ್ನಲ್ಲೇ ಈಗ ಮತ್ತೊಂದು ಗಂಭೀರವಾದ ಅತ್ಯಾಚಾರದ ದೂರು ದಾಖಲಾಗಿರುವುದು ಪ್ರಕರಣಕ್ಕೆ ಹೊಸ ತಿರುವು ನೀಡಿದೆ.
ಈ ಹಿಂದೆ ಪ್ರಕರಣಕ್ಕೆ ಸಂಬಂಧಿಸಿದ ಆಡಿಯೋ ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದಾಗ, ಎಸಿಪಿ ಶ್ರೀಕಾಂತ್ ಅವರಿಗೆ ತನಿಖೆಯ ಜವಾಬ್ದಾರಿ ನೀಡಲಾಗಿತ್ತು. ಶಾಸಕ ಉಮಾನಾಥ್ ಕೋಟ್ಯಾನ್ ಅವರು ಗೃಹ ಸಚಿವರನ್ನು ಭೇಟಿ ಮಾಡಿ ಇನ್ಸ್‌ಪೆಕ್ಟರ್ ಅಮಾನತಿಗೆ ಒತ್ತಾಯಿಸಿದ್ದರು. ಅಲ್ಲದೆ, ರಾಜ್ಯ ಮಹಿಳಾ ಆಯೋಗವು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸುಮೊಟೊ ಕೇಸ್ ದಾಖಲಿಸಿಕೊಂಡಿತ್ತು. ಈ ಎಲ್ಲಾ ಬೆಳವಣಿಗೆಗಳ ನಂತರ ಸಂದೇಶ್ ಅವರನ್ನು ಈಗಾಗಲೇ ಸೇವೆಯಿಂದ ಅಮಾನತು ಮಾಡಲಾಗಿದೆ.
ಇದೀಗ ಹೊಸ ಎಫ್ ಐಆರ್ ದಾಖಲಾಗಿರುವುದರಿಂದ ಇನ್ಸ್‌ಪೆಕ್ಟರ್ ಸಂದೇಶ್ ಅವರಿಗೆ ಕಾನೂನು ಸಂಕಷ್ಟ ಮತ್ತಷ್ಟು ಬಿಗಿಯಾದಂತಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD























