ನಕ್ಸಲಿಸಂ, ಶಸ್ತ್ರಾಸ್ತ್ರ ಹೋರಾಟಕ್ಕೆ ಸಂವಿಧಾನದಲ್ಲಿ ಅವಕಾಶವಿಲ್ಲ: ನಕ್ಸಲರನ್ನು ಮುಖ್ಯವಾಹಿನಿಗೆ ಬರಮಾಡಿಕೊಂಡು ಸಿಎಂ ಸಿದ್ದರಾಮಯ್ಯ ಹೇಳಿಕೆ - Mahanayaka
9:13 AM Wednesday 22 - January 2025

ನಕ್ಸಲಿಸಂ, ಶಸ್ತ್ರಾಸ್ತ್ರ ಹೋರಾಟಕ್ಕೆ ಸಂವಿಧಾನದಲ್ಲಿ ಅವಕಾಶವಿಲ್ಲ: ನಕ್ಸಲರನ್ನು ಮುಖ್ಯವಾಹಿನಿಗೆ ಬರಮಾಡಿಕೊಂಡು ಸಿಎಂ ಸಿದ್ದರಾಮಯ್ಯ ಹೇಳಿಕೆ

naxal
08/01/2025

ಬೆಂಗಳೂರು: ಅನ್ಯಾಯದ ವಿರುದ್ಧ, ಶೋಷಣೆ, ದೌರ್ಜನ್ಯದ ವಿರುದ್ಧ ನ್ಯಾಯಕ್ಕಾಗಿ ಹೋರಾಡುವುದು ತಪ್ಪಲ್ಲ. ವ್ಯವಸ್ಥೆಯ ಬದಲಾವಣೆಗೆ ಹೋರಾಟ ಮಾಡಲು ಸಂವಿಧಾನದಲ್ಲಿ ಅವಕಾಶವಿದೆ. ಆದರೆ ಹೋರಾಟ ಶಾಂತಿಯುತವಾಗಿ, ನ್ಯಾಯಯುತವಾಗಿ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಶಸ್ತ್ರ ತೊರೆದು, ಶರಣಾಗತರಾದ ಆರು ಮಂದಿ ನಕ್ಸಲರನ್ನು ಇಂದು ಮುಖ್ಯವಾಹಿನಿಗೆ ಬರಮಾಡಿಕೊಂಡು ಮಾತನಾಡಿದ ಅವರು, ನಕ್ಸಲಿಸಂ, ಶಸ್ತ್ರಾಸ್ತ್ರ ಹೋರಾಟಕ್ಕೆ ಸಂವಿಧಾನದಲ್ಲಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅವಕಾಶವಿಲ್ಲ. ಈ ಹಿಂದೆಯೂ ಬಹಳ ನಕ್ಸಲೀಯರು ಶಸ್ತ್ರಾಸ್ತ ತ್ಯಜಿಸಿ ಮುಖ್ಯಧಾರೆಗೆ ಬಂದಿದ್ದಾರೆ. ಇವರ ಪುನರ್ ವಸತಿಗೆ ಸರ್ಕಾರ ನೆರವು ಒದಗಿಸಿದೆ. ಶಾಂತಿಗಾಗಿ ನಾಗರಿಕ ವೇದಿಕೆಯವರು ನನ್ನನ್ನು ಭೇಟಿ ಮಾಡಿ ನಕ್ಸಲಿಯರ ಮನವೊಲಿಸುವ ಬಗ್ಗೆ ತಿಳಿಸಿದ್ದರು. ಆ ಸಂದರ್ಭದಲ್ಲಿ ನಕ್ಸಲಿಸಂ ತ್ಯಜಿಸಿ ಮುಖ್ಯವಾಹಿನಿಗೆ ಬರಲು ಸರಕಾರ ಎಲ್ಲಾ ನೆರವು ನೀಡಲಿದೆ ಎಂದು ಹೇಳಿದ್ದೆ. ನಾವು ಕರ್ನಾಟಕದಲ್ಲಿ ನಕ್ಸಲಿಸಂ ಕೊನೆಗಾಣಿಸಲು, ಅವರ ಬೇಡಿಕೆಗೆ ಸ್ಪಂದಿಸಲು ಏನೆಲ್ಲಾ ಕಾರ್ಯಕ್ರಮ ಬೇಕೋ ಅದನ್ನು ಕಾನೂನು ಚೌಕಟ್ಟಿನಲ್ಲಿ ಮಾಡುತ್ತೇವೆ ಎಂದು ಸಿಎಂ ಹೇಳಿದರು.


ADS

ಶಸ್ತ್ರಾಸ್ತ್ರದ ಮೂಲಕ ಹೋರಾಟ ಮಾಡಿ ನ್ಯಾಯ ಪಡೆಯಲು ಪ್ರಜಾಪ್ರಭುತ್ವದಲ್ಲಿ, ಸಂವಿಧಾನದಲ್ಲಿ ಅವಕಾಶವಿಲ್ಲ. ಶಾಂತಿಯುತವಾಗಿ ಹೋರಾಟ ನಡೆಸಲು ಪ್ರಜಾಪ್ರಭುತ್ವದಲ್ಲಿ ಅವಕಾಶವಿದೆ. ಸರ್ಕಾರ ಇದನ್ನು ವಿರೋಧಿಸುವುದಿಲ್ಲ. ಆದರೆ ಕಾನೂನು ಕೈಗೆತ್ತಿಕೊಂಡರೆ ಸರ್ಕಾರ ಸುಮ್ಮನಿರಲ್ಲ. ಅನ್ಯಾಯ ಕಡಿಮೆ ಮಾಡಲು ನಮ್ಮ ಸರ್ಕಾರ ಬಹಳ ಪ್ರಯತ್ನ ಮಾಡುತ್ತಿದೆ. ಯಾರ ಮೇಲೆಯೂ ಅನ್ಯಾಯ ಆಗಬಾರದು ಎಂಬುವುದು ನಮ್ಮ ಧ್ಯೇಯ ಎಂದರು.

ಬಡವರ ಹಕ್ಕುಗಳ ರಕ್ಷಣೆಗಾಗಿ, ಅವರಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ಬರಲು ಅನೇಕ ಕಾರ್ಯಕ್ರಮ ಜಾರಿ ಮಾಡಿದೆ. ಗ್ಯಾರಂಟಿ ಯೋಜನೆಗಳಾದ ಶಕ್ತಿ, ಗೃಹಲಕ್ಷ್ಮಿ ಯೋಜನೆಗಳ ಉದ್ದೇಶವೂ ಇದೇ ಆಗಿದೆ. ಬಡವರು ಗೌರವಯುತವಾಗಿ ಬದುಕಲು ಅವಕಾಶ ಸಿಗಲಿದೆ. ಬಡವರಿಗೆ ಆರ್ಥಿಕ ಮತ್ತು ಸಾಮಾಜಿಕವಾಗಿ ಬದುಕಲು ಶಕ್ತಿ ಬಂದರೆ ಮಾತ್ರ ಸಮಾಜದಲ್ಲಿ ಬದಲಾವಣೆ ಸಾಧ್ಯ ಎಂದರು.

ನಕ್ಸಲಿಸಂ ಮುಕ್ತವಾದ ಸಮಾಜ ನಮ್ಮ ಗುರಿ. ಈ ಹಿನ್ನೆಲೆಯಲ್ಲಿ ಮುಖ್ಯವಾಹಿನಿಗೆ ಬರುವ ನಕ್ಸಲಿಯರಿಗೆ ಎಲ್ಲಾ ರೀತಿಯ ನೆರವು ನೀಡುವುದಾಗಿ ಬಹಿರಂಗವಾಗಿ ಹೇಳಿದ್ದೆ. ಅವರನ್ನು ಕ್ರಿಮಿನಲ್ ಗಳ ರೀತಿ ನೋಡದೆ, ಮಾನವರಂತೆ ನೋಡುವ ಭರವಸೆ ನೀಡಿದ್ದೆ. ನಕ್ಸಲೀಯರ ಶರಣಾಗತಿಯಲ್ಲಿ ಸಮಿತಿಯ ಸದಸ್ಯರ ಪಾತ್ರ ಮುಖ್ಯವಾಗಿದ್ದು, ಅವರಿಗೆ ಹಾಗೂ ಈ ನಿಟ್ಟಿನಲ್ಲಿ ಕಾರ್ಯನಿರ್ವಹಿಸಿದ ಎಲ್ಲಾ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಬಯಸುತ್ತೇನೆ ಎಂದು ಸಿಎಂ ತಿಳಿಸಿದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/HEkqDgrW2BlJLad5kZ1DX7

ಇತ್ತೀಚಿನ ಸುದ್ದಿ