ನೀಟ್ ಪರೀಕ್ಷೆಯ ಒತ್ತಡ; ಕೊಯಮತ್ತೂರಿನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ
ಚೆನ್ನೈ: ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯಲ್ಲಿ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET) ಎದುರಿಸುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಈ ದುರಂತ ಘಟನೆಯು ರಾಜ್ಯದಲ್ಲಿ ‘ನೀಟ್’ ಪರೀಕ್ಷೆ ವಿರುದ್ಧದ ಸಾರ್ವಜನಿಕ ಮತ್ತು ರಾಜಕೀಯ ಆಕ್ರೋಶವನ್ನು ಮತ್ತೊಮ್ಮೆ ಭುಗಿಲೇಳುವಂತೆ ಮಾಡಿದೆ.
ಅಲ್ಲದೆ, ತಮಿಳುನಾಡಿಗೆ ನೀಟ್ ಪರೀಕ್ಷೆಯಿಂದ ಶಾಶ್ವತ ವಿನಾಯಿತಿ ನೀಡಬೇಕು ಎಂಬ ದೀರ್ಘಕಾಲದ ಬೇಡಿಕೆ ಈಗ ಮತ್ತೆ ಮುನ್ನೆಲೆಗೆ ಬಂದಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಅನುಕೀರ್ತನಾ ಎಂದು ಗುರುತಿಸಲಾಗಿದೆ. ಈಕೆ ಈಗಾಗಲೇ ಎರಡು ಬಾರಿ ನೀಟ್ ಪರೀಕ್ಷೆ ಬರೆದಿದ್ದು, ಈ ಬಾರಿ ಮೂರನೇ ಪ್ರಯತ್ನಕ್ಕಾಗಿ ತೀವ್ರ ಸಿದ್ಧತೆ ನಡೆಸುತ್ತಿದ್ದಳು. ಆದರೆ, ಇತ್ತೀಚೆಗೆ ನಡೆದ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯ ವಿವಾದ ಹಾಗೂ ಅದರ ಬೆನ್ನಲ್ಲೇ ಮರುಪರೀಕ್ಷೆ ನಡೆಸುವ ಸರ್ಕಾರದ ನಿರ್ಧಾರದಿಂದ ಅನುಕೀರ್ತನಾ ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದಳು ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.
“ಮತ್ತೊಮ್ಮೆ ಪರೀಕ್ಷೆಯನ್ನು ಎದುರಿಸಬೇಕಾಗಿ ಬಂದ ಹತಾಶೆ ಹಾಗೂ ಮಾನಸಿಕ ಕಳವಳವೇ ಆಕೆಯನ್ನು ಈ ತೀವ್ರ ನಿರ್ಧಾರಕ್ಕೆ ತಳ್ಳಿರುವಂತೆ ತೋರುತ್ತಿದೆ” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಪತ್ತೆಯಾಗಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದು, ಸಾವಿನ ನಿಖರ ಕಾರಣವನ್ನು ಪತ್ತೆಹಚ್ಚಲು ತನಿಖೆ ಮುಂದುವರಿಸಿದ್ದಾರೆ.
ಈ ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ತಮಿಳುನಾಡಿನಲ್ಲಿ ನೀಟ್ ಪರೀಕ್ಷೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಬೇಕು ಎಂದು ಒತ್ತಾಯಿಸಿ ವ್ಯಾಪಕ ಪ್ರತಿಭಟನೆಗಳು ಆರಂಭವಾಗಿವೆ. ಆಡಳಿತಾರೂಢ ಡಿಎಂಕೆ (DMK) ಪಕ್ಷವು ತಮಿಳುನಾಡಿಗೆ ನೀಟ್ ಪರೀಕ್ಷೆಯಿಂದ ವಿನಾಯಿತಿ ನೀಡಬೇಕೆಂದು ಆಗ್ರಹಿಸಿ ರಾಜ್ಯದಾದ್ಯಂತ ಬೃಹತ್ ಪ್ರತಿಭಟನೆಗಳನ್ನು ಹಮ್ಮಿಕೊಳ್ಳುವುದಾಗಿ ಪ್ರಕಟಿಸಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD























