ಮಂಗಳೂರು: ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಗೆ ಯುವ ಕಾಂಗ್ರೆಸ್’ನಿಂದ ಅದ್ಧೂರಿ ಸನ್ಮಾನ
ಮಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿರುವ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಯುವ ಕಾಂಗ್ರೆಸ್ ಕಚೇರಿಯಲ್ಲಿ ಅದ್ಧೂರಿ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಇಬ್ರಾಹಿಂ ನವಾಜ್ ಅವರು ಹರಿಪ್ರಸಾದ್ ಅವರಿಗೆ ಶಾಲು ಹೊದಿಸಿ, ಗೌರವಿಸಿದರು.
ನೂತನ ಅಧ್ಯಕ್ಷರನ್ನು ಸನ್ಮಾನಿಸಿ ಮಾತನಾಡಿದ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹಿಂ ನವಾಝ್, “ಬಿ.ಕೆ. ಹರಿಪ್ರಸಾದ್ ಅವರ ಸುದೀರ್ಘ ರಾಜಕೀಯ ಅನುಭವ ಮತ್ತು ನೇತೃತ್ವದಲ್ಲಿ ರಾಜ್ಯ ಕಾಂಗ್ರೆಸ್ ಸಂಘಟನೆ ಮತ್ತಷ್ಟು ಬಲಿಷ್ಠವಾಗಲಿದೆ. ಪಕ್ಷದ ತತ್ವ ಹಾಗೂ ಸಿದ್ಧಾಂತಗಳನ್ನು ತಳಮಟ್ಟದ ಜನರಿಗೆ ತಲುಪಿಸುವಲ್ಲಿ ಅವರ ನಾಯಕತ್ವ ಮಹತ್ವದ ಪಾತ್ರ ವಹಿಸಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್, “ಪಕ್ಷದ ಸಂಘಟನೆ ಮತ್ತು ಬಲವರ್ಧನೆಗೆ ಪ್ರತಿಯೊಬ್ಬ ಕಾರ್ಯಕರ್ತನ ಸಹಕಾರ ಅತ್ಯಗತ್ಯ. ಮುಂಬರುವ ದಿನಗಳಲ್ಲಿ ಎಲ್ಲಾ ಕಾರ್ಯಕರ್ತರೊಂದಿಗೆ ನಿರಂತರ ಸಮನ್ವಯ ಸಾಧಿಸಿ, ಪಕ್ಷವನ್ನು ರಾಜ್ಯದಲ್ಲಿ ಮತ್ತಷ್ಟು ಶಕ್ತಿಶಾಲಿಯನ್ನಾಗಿ ಮಾಡಲಾಗುವುದು,” ಎಂದು ಸಂಕಲ್ಪ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಹಿರಿಯ ನಾಯಕ ರಮಾನಾಥ ರೈ, ಪ್ರಮುಖರಾದ ಪದ್ಮರಾಜ್ ಆರ್. ಪೂಜಾರಿ, ಸುಹೈಲ್ ಕಂದಕ ಸೇರಿದಂತೆ ಜಿಲ್ಲಾ ಯುವ ಕಾಂಗ್ರೆಸ್ನ ಪದಾಧಿಕಾರಿಗಳು ಹಾಗೂ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು. ನೂತನ ಜವಾಬ್ದಾರಿ ವಹಿಸಿಕೊಂಡ ಬಿ.ಕೆ. ಹರಿಪ್ರಸಾದ್ ಅವರ ಅನುಭವ ಮತ್ತು ಮಾರ್ಗದರ್ಶನದಿಂದ ಪಕ್ಷಕ್ಕೆ ಹೊಸ ಚೈತನ್ಯ ದೊರೆಯಲಿದೆ ಎಂದು ಎಲ್ಲ ನಾಯಕರು ಈ ಸಂದರ್ಭದಲ್ಲಿ ಶುಭ ಹಾರೈಸಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD


























