ಮತ್ತೊಮ್ಮೆ ಬಿಹಾರ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ನಿತೀಶ್ ಕುಮಾರ್!
ಪಟ್ನಾ: ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಎನ್ ಡಿಎ ಅಭೂತಪೂರ್ವ ಜಯಗಳಿಸಿದೆ. ಇದೀಗ ನಿತೀಶ್ ಕುಮಾರ್ ಕೆಲವೇ ದಿನಗಳಲ್ಲಿ ಬಿಹಾರದ ಮುಂದಿನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಸಜ್ಜಾಗಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ ಎಂದೂ ಹೇಳಲಾಗುತ್ತಿದೆ. ನವೆಂಬರ್ 19 ಅಥವಾ 20ರಂದು ನಿತೀಶ್ ಕುಮಾರ್ ಪ್ರಮಾಣ ಸ್ವೀಕರಿಸಲಿದ್ದಾರೆ ಎಂದು ಸದ್ಯ ಮಾಹಿತಿ ಹರಿದಾಡುತ್ತಿದೆ.
ಮೋದಿ ಅವರಲ್ಲದೇ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಸಚಿವರು ಹಾಗೂ ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಕೂಡ ಸಮಾರಂಭದಲ್ಲಿ ಪಾಲ್ಗೊಳ್ಳುವರು ಎಂದು ಮೂಲಗಳು ತಿಳಿಸಿವೆ.
ರಾಜಭವನದ ಬದಲಾಗಿ, ಐತಿಹಾಸಿಕ ಗಾಂಧಿ ಮೈದಾನದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ಆಯೋಜಿಸುವ ಸಾಧ್ಯತೆ ಇದೆಯಂತೆ.
ಬಿಹಾರ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಹೆಚ್ಚು ಸ್ಥಾನಗಳನ್ನ ಗೆಲ್ಲುವ ಮೂಲಕ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಆದರೂ ಸಿಎಂ ಸ್ಥಾನ ಜೆಡಿಯುಗೆ ಬಿಟ್ಟು ಕೊಟ್ಟಿದೆ. ಬಿಹಾರ ಚುನಾವಣೆ ಬಿಜೆಪಿಯ ಪ್ಲ್ಯಾನ್ ಪ್ರಕಾರವೇ ನಡೆದಿದೆ. ಅತೀ ಹೆಚ್ಚು ಸ್ಥಾನಗಳನ್ನು ಗೆದ್ದು ದೊಡ್ಡ ಪಕ್ಷವಾಗಿ ಹೊರಹೊಮ್ಮುವುದು ಬಿಜೆಪಿಯ ಗುರಿಯಾಗಿತ್ತು. ಆದರೆ ತನ್ನ ಗುರಿಯನ್ನು ಸಾಧಿಸಿದರೂ ಸಿಎಂ ಸ್ಥಾನವನ್ನು ನಿತೀಶ್ ಕುಮಾರ್ ಅವರಿಗೆ ಬಿಟ್ಟುಕೊಡುವುದು ಬಿಜೆಪಿಗೆ ಅನಿವಾರ್ಯವಾಗಿದೆ. ಅಂತೆಯೇ ಬಿಜೆಪಿ ಮತ್ತು ಚಿರಾಗ್ ಪಾಸ್ವಾನ್ ಅವರ ಲೋಕ ಜನಶಕ್ತಿ ಪಕ್ಷಕ್ಕೆ ತಲಾ ಒಂದೊಂದು ಡಿಸಿಎಂ ಸ್ಥಾನ ಕೊಡಲು ನಿರ್ಧರಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD



























