ಮಕ್ಕಳು ಎಷ್ಟು ಭಾಷೆ ಕಲಿತರೂ ಒಳ್ಳೆಯದೆ: ಸಿಎಂ ಸಿದ್ದರಾಮಯ್ಯ - Mahanayaka
8:23 AM Wednesday 20 - August 2025

ಮಕ್ಕಳು ಎಷ್ಟು ಭಾಷೆ ಕಲಿತರೂ ಒಳ್ಳೆಯದೆ: ಸಿಎಂ ಸಿದ್ದರಾಮಯ್ಯ

siddaramaiah
29/05/2025


Provided by

ಬೆಂಗಳೂರು: ಸರ್ವರಿಗೂ ಶಿಕ್ಷಣ ಕೊಡುವುದು ಸರ್ಕಾರದ ಜವಾಬ್ದಾರಿ. ಶಿಕ್ಷಣ ಕೇವಲ ಜ್ಞಾನ ಕೊಡುವುದಿಲ್ಲ, ವ್ಯಕ್ತಿತ್ವವನ್ನು ರೂಪಿಸುತ್ತದೆ. ಪ್ರತಿಯೊಬ್ಬರೂ ಶಿಕ್ಷಣ ಪಡೆದುಕೊಳ್ಳಲೇಬೇಕು. ಇದರಿಂದ ಸ್ವಾಭಿಮಾನ ಬೆಳೆದು ಸಮಾಜದ ಆಸ್ತಿಯಾಗಲು ಸಾಧ್ಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಶಾಲಾ ಶೈಕ್ಷಣಿಕ ವರ್ಷದ ಪುನರಾರಂಭದ ಪ್ರಯುಕ್ತ ಆಡುಗೋಡಿಯ ಕರ್ನಾಟಕ ಸರ್ಕಾರಿ ಕನ್ನಡ ಶಾಲೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದಲಿತ ಕುಟುಂಬದಲ್ಲಿ ಹುಟ್ಟಿದ ಡಾ.ಬಾಬಾ ಸಾಹೇಬರು ದೇಶ ಕಂಡ ಮಹಾನ್ ವಿದ್ವಾಂಸರಲ್ಲಿ ಒಬ್ಬರು. ಪ್ರತಿಭೆ ಯಾರ ಸ್ವತ್ತೂ‌ ಅಲ್ಲ. ಅವಕಾಶ ಸಿಕ್ಕರೆ ಎಲ್ಲರ ಒಳಗಿರುವ ಪ್ರತಿಭೆಯೂ ಹೊರಗೆ ಬರುತ್ತದೆ ಎನ್ನುವುದಕ್ಕೆ ಇವರೇ ಸಾಕ್ಷಿ ಎಂದರು.

1992–93 ರಲ್ಲಿ ನಾನು ಹಣಕಾಸು ಮಂತ್ರಿಯಾಗಿದ್ದಾಗ ಒಂದು ಲಕ್ಷ ಶಿಕ್ಷಕರನ್ನು ನೇಮಕ ಮಾಡಲು ಆರ್ಥಿಕ ಅನುಮೋದನೆ ನೀಡಿದ್ದೆ. ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಈ ಬಾರಿಯೂ ₹725 ಕೋಟಿ ಹಣ ಕೊಟ್ಟಿದ್ದೇವೆ. ಕಳೆದ ವರ್ಷವೂ ಕೊಟ್ಟಿದ್ದೇವೆ. ಗುಣಮಟ್ಟದಲ್ಲಿ ಸರ್ಕಾರಿ ಶಾಲೆಗಳು ಹಿಂದುಳಿದಿಲ್ಲ ಎಂದರು.

ಮಕ್ಕಳಿಗೆ ಉತ್ತಮ‌ ಪೌಷ್ಠಿಕಾಂಶ ಸಿಕ್ಕರೆ ಮಾತ್ರ ಉತ್ತಮ ವಿದ್ಯಾರ್ಥಿಗಳಾಗಿ ಓದಲು ಸಾಧ್ಯ. ಈ‌ ಕಾರಣಕ್ಕೇ ನಾವು ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು, ಚಿಕ್ಕಿ, ಹಾಲು ಕೊಡುತ್ತಿದ್ದೇವೆ. ಇದರ ಜೊತೆಗೆ ಪಠ್ಯ, ಸಮವಸ್ತ್ರ, ಶೂ, ಸಾಕ್ಸ್, ಪುಸ್ತಕಗಳನ್ನೂ ಸರ್ಕಾರದಿಂದಲೇ ಕೊಡುತ್ತಿದ್ದೇವೆ ಎಂದು ಸಿಎಂ ತಿಳಿಸಿದರು.

ಮಕ್ಕಳು ಎಷ್ಟು ಭಾಷೆ ಕಲಿತರೂ ಒಳ್ಳೆಯದೆ. ಹೆಚ್ಚೆಚ್ಚು ಭಾಷೆ ಕಲಿತು ಕನ್ನಡದಲ್ಲಿ ಮುಂದಿರಿ. ಕನ್ನಡದಲ್ಲಿ ಕಲಿತರೆ ಮಕ್ಕಳು ಪ್ರತಿಭಾವಂತರಾಗುವುದಿಲ್ಲ ಎನ್ನುವುದು ತಪ್ಪು. ವೈಜ್ಞಾನಿಕ ಶಿಕ್ಷಣ ಪಡೆದು, ವೈಚಾರಿಕ ಗುಣ ಬೆಳೆಸಿಕೊಂಡರೆ ಮಕ್ಕಳು ಉತ್ತಮ ಪ್ರತಿಭಾವಂತರಾದಂತೆ. ಆದ್ದರಿಂದ ಸರ್ಕಾರಿ ಶಾಲೆಗಳ ಹಾಜರಾತಿ ಹೆಚ್ಚಾಗಬೇಕು ಎಂದು ಹೇಳಿದರು.

ಗ್ರೇಸ್ ಮಾರ್ಕ್ಸ್ ಇಲ್ಲದೆ ಮಕ್ಕಳು ಉತ್ತಮ ಫಲಿತಾಂಶ ಪಡೆಯುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಪ್ರಯತ್ನಿಸುತ್ತಿದೆ. ಮಕ್ಕಳ‌ ಅನುಕೂಲಕ್ಕಾಗಿ ಎರಡನೇ ಮತ್ತು ಮೂರನೇ ಸಪ್ಲಿಮೆಂಟರಿ ಪರೀಕ್ಷೆಗಳಿಗೆ ಶುಲ್ಕ ಇಟ್ಟಿಲ್ಲ ಎಂದರು.

ಸಚಿವ ರಾಮಲಿಂಗಾರೆಡ್ಡಿಯವರ ಕ್ಷೇತ್ರದಲ್ಲಿ ಸರ್ಕಾರಿ ಶಾಲೆಗಳು ಉತ್ತಮ‌ ಗುಣಮಟ್ಟ ಕಾಯ್ದುಕೊಂಡಿವೆ. ಇದೇ ಗುಣಮಟ್ಟ ಇಡೀ ರಾಜ್ಯಾದ್ಯಂತ ಆಗಬೇಕು ಎಂದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

 

ಇತ್ತೀಚಿನ ಸುದ್ದಿ