ನೈಸ್ ರಸ್ತೆಯ ಅವಶ್ಯಕತೆಯಿಲ್ಲ,  ರಾಜ್ಯ‌ ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಬೇಕು: ಟಿ.ಬಿ. ಜಯಚಂದ್ರ

tb jayachandra
21/08/2023

ಬೆಂಗಳೂರು: ರಾಜ್ಯ ಸರ್ಕಾರ ಬೆಂಗಳೂರು ಮೈಸೂರು ಎಕ್ಸ್ ಪ್ರೆಸ್ ಹೈವೇ ನಿರ್ಮಾಣ ಮಾಡಿರುವ ಹಿನ್ನೆಲೆಯಲ್ಲಿ ನೈಸ್ ರಸ್ತೆಯ ಅವಶ್ಯಕತೆಯಿಲ್ಲ, ಹೀಗಾಗಿ ನೈಸ್ ಯೋಜನೆಯನ್ನು ರಾಜ್ಯ‌ ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಟಿ.ಬಿ. ಜಯಚಂದ್ರ ಅವರು ಅಭಿಪ್ರಾಯಪಟ್ಟಿದ್ದಾರೆ.

ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು,ನೈಸ್ ಯೋಜನೆಗೆ ಸಂಬಂಧಿಸಿದಂತೆ ನಾನೇ 2016ರಲ್ಲಿ ಸದನ ಸಮಿತಿ ವರದಿ ಕೊಟ್ಟಿದ್ದೇನೆ. ಇದರ ಬಗ್ಗೆ ಉನ್ನತ ಮಟ್ಟದ ತನಿಖೆಯಾಗಬೇಕು ಹಾಗೂ ಹೆಚ್ಚವರಿ ಭೂಮಿಯನ್ನು ಹಿಂಪಡೆಯಬೇಕು ಎಂದು ವರದಿಯಲ್ಲಿ ಶಿಫಾರಸು ಮಾಡಲಾಗಿದೆ ಎಂದರು.

ನೈಸ್ ಯೋಜನೆಗೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಹಾಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನಡುವಿನ ಆರೋಪ ಪ್ರತ್ಯಾರೋಪಗಳ ಬಗ್ಗೆ ನೀವು ಅವರಿಬ್ಬರನ್ನೇ ಕೇಳಿ ಎಂದರು. ‌

ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಬುಧವಾರ ರಾಜ್ಯ ಸರ್ಕಾರ ಸರ್ವಪಕ್ಷ ಸಭೆ ಕರೆದಿದ್ದು ಅಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದರು.

ಭದ್ರಾ ಮೇಲ್ದಂಡೆ ಯೋಜನೆಯನ್ವಯ ರಾಷ್ಟ್ರೀಯ ಯೋಜನೆ ಎಂದು ಕೇಂದ್ರ ಸರ್ಕಾರ ಘೋಷಣೆ ಮಾಡಿದೆ ಆದರೆ ಕಳೆದ ಏಳು ವರ್ಷಗಳಿಂದ ಕೇಂದ್ರ ಸರ್ಕಾರ ಹಣವನ್ನೇ ಬಿಡುಗಡೆ ಮಾಡಿಲ್ಲ. ಕೇಂದ್ರ ಸರ್ಕಾರದ ಬಜೆಟ್ ನಲ್ಲಿ 5 ಸಾವಿರ ಕೋಟಿ ರೂ. ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಇದು ಕೇಂದ್ರದ ಯೋಜನೆಯಾಗಲಿ ಅಥವಾ ರಾಜ್ಯ ಸರ್ಕಾರದ ಯೋಜನೆಯೇ ಆಗಲಿ ಕೇಂದ್ರ ಸರ್ಕಾರ ಯಾವುದೇ ಮಾನದಂಡದಲ್ಲಿ ಗುರುತಿಸಲಿ ಕಗ್ಗಂಟಿಲ್ಲದೆ ಹಣ ಬಿಡುಗಡೆ ಮಾಡಲಿ ಎಂದು ಜಯಚಂದ್ರ ಅವರು ಒತ್ತಾಯಿಸಿದ್ದಾರೆ. ಈ ಯೋಜನೆಗೆ ರಾಜ್ಯ ಸರ್ಕಾರ 20 ಸಾವಿರ ಕೋಟಿ ರೂಪಾಯಿ ವೆಚ್ಚ ಮಾಡುತ್ತಿದೆ ಎಂದರು.

ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವಿದೆ. ಕೇಂದ್ರ ಸರ್ಕಾರ ಬಜೆಟ್ ಮಂಡಿಸಿದ ಬಳಿಕ ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ಯೋಜನೆಗಳನ್ನು ಹಾಗೂ ಕಾರ್ಯಕ್ರಮಗಳನ್ನು ಬಜೆಟ್ ನಲ್ಲಿ ಅಳವಡಿಸಿಕೊಳ್ಳುವುದು ಸಂಪ್ರದಾಯವಾಗಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಎಷ್ಟು ಹಣ ಬಿಡುಗಡೆ ಮಾಡಿದೆ. ರಾಜ್ಯ ಸರ್ಕಾರ ಎಷ್ಟು ವೆಚ್ಚ ಮಾಡಿದೆ ಬಾಕಿ‌ ಎಷ್ಟು‌ ಬಿಡುಗಡೆ ಮಾಡಲಿದೆ ಎಂಬ ವಿವರಗಳನ್ನು ಮುಂದಿನ ದಿನಗಳಲ್ಲಿ ಮಾಹಿತಿ‌ ಪಡೆದು ನೀಡುವುದಾಗಿ ಇದೆ ವೇಳೆ ಜಯಚಂದ್ರ ಅವರು ತಿಳಿಸಿದರು.

ಇದಕ್ಕೂ ಮುನ್ನ ಅಪರ ಮುಖ್ಯ ಕಾರ್ಯದರ್ಶಿ ಯೋಜನೆ ಕಾರ್ಯಕ್ರಮ ಸಂಯೋಜನೆ ಹಾಗೂ‌ ಸಾಂಖ್ಯಿಕ ಇಲಾಖೆ ಮುಖ್ಯಸ್ಥೆ ಶಾಲಿನಿ ರಜನೀಶ್ ಜೊತೆ ಸಭೆ ಮಾಡಿ ಕೇಂದ್ರ ಸರ್ಕಾರದ ಎದುರು ಬಾಕಿ ಇರುವ ರಾಜ್ಯದ ಯೋಜನೆಗಳ ಬಗ್ಗೆ ಚರ್ಚಿಸಿದರು.

ಇತ್ತೀಚಿನ ಸುದ್ದಿ

Exit mobile version