ಪೋಕ್ಸೋ ಪ್ರಕರಣ: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ನೆಲ್ಯಾಡಿಯಲ್ಲಿ ಸೆರೆ
ಉಪ್ಪಿನಂಗಡಿ: ಪೋಕ್ಸೋ ಕಾಯ್ದೆಯಡಿ ದಾಖಲಾಗಿ, ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಸೆಪ್ಟೆಂಬರ್ 10ರಂದು ನೆಲ್ಯಾಡಿಯಲ್ಲಿ ಪತ್ತೆಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕೌಕ್ರಾಡಿ ಗ್ರಾಮದ ಕಾಪಿನಬಾಗಿಲು ನಿವಾಸಿ ರಮೇಶ್ ಬಂಧಿತ ಆರೋಪಿಯಾಗಿದ್ದಾನೆ. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 18/2005, ಕಲಂ 4, 6 ಪೋಕ್ಸೋ ಕಾಯ್ದೆಯಡಿ ಈತನ ಮೇಲೆ ಪ್ರಕರಣ ದಾಖಲಾಗಿತ್ತು. ಅಲ್ಲದೆ, ಪುತ್ತೂರಿನ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಸ್ಪೆಷಲ್ ಕೇಸ್ ನಂ. 5023/2025ರ ವಾರಂಟ್ ಆರೋಪಿಯಾಗಿದ್ದ ಈತ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದನು.
ಉಪ್ಪಿನಂಗಡಿ ಪೊಲೀಸ್ ವೃತ್ತ ನಿರೀಕ್ಷಕ ನಾಗರಾಜ್ ಎಚ್.ಇ. ಅವರ ಮಾರ್ಗದರ್ಶನದಲ್ಲಿ, ಪೊಲೀಸ್ ಉಪನಿರೀಕ್ಷಕ ಸುತೇಶ್ ಕೆ.ಟಿ. ನೇತೃತ್ವದ ನೆಲ್ಯಾಡಿ ಹೊರಠಾಣೆ ಸಿಬ್ಬಂದಿಯಾದ ದಯಾನಂದ ಹಾಗೂ ರವಿರಾಜ್ ಅವರು ಈ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ನಡೆಸಿದರು.
ನೆಲ್ಯಾಡಿಯಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು, ತಕ್ಷಣವೇ ಪುತ್ತೂರಿನ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD



























