11:57 PM Wednesday 10 - December 2025

ಹೊತ್ತಿ ಉರಿದ ಖಾಸಗಿ ಬಸ್: 20ಕ್ಕೂ ಅಧಿಕ ಜನ ಸುಟ್ಟು ಭಸ್ಮ: 12 ಪ್ರಯಾಣಿಕರು ಪಾರು

kaveri
24/10/2025

ಹೈದರಾಬಾದ್‌: ಆಂಧ್ರದ ಕರ್ನೂಲ್‌ ಬಳಿಯ ಚಿನ್ನಟೇಕೂರು ಬಳಿ ಹೈದರಾಬಾದ್‌ ನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸು ಹೊತ್ತಿ ಉರಿದು ಕನಿಷ್ಠ 20ಕ್ಕೂ ಹೆಚ್ಚು ಜನ ಸಜೀವ ದಹನವಾಗಿರುವ ಘಟನೆ ನಡೆದಿದೆ.

ಕಾವೇರಿ ಹೆಸರಿನ ವೋಲ್ವೋ ಬಸ್ಸಿನಲ್ಲಿ 44 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಶುಕ್ರವಾರ ಬಳಗಿನ ಜಾವ 3 ಗಂಟೆಯ ವೇಳೆಗೆ ವೇಗವಾಗಿ ಬಂದ ಬೈಕ್‌ ಬಸ್ಸಿನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ.  ಡಿಕ್ಕಿ ಹೊಡೆದ ನಂತರ ಬೈಕ್‌ ಬಸ್ಸಿನ ಕೆಳಗಡೆಯಿಂದ ಮುಂದಕ್ಕೆ ಹೋಗಿ ಇಂಧನ ಟ್ಯಾಂಕ್‌ಗೆ ಬಡಿದಿದೆ. ಹಿಂಭಾಗದಲ್ಲಿರುವ ಇಂಧನ ಟ್ಯಾಂಕ್‌ಗೆ ಬೈಕ್‌ ಡಿಕ್ಕಿ ಬಡಿದ ರಭಸಕ್ಕೆ ಬೆಂಕಿ ಹೊತ್ತಿಕೊಂಡಿದೆ. ಕೆಲವೇ ನಿಮಿಷದಲ್ಲಿ ಬೆಂಕಿ ಇಡೀ ಬಸ್ಸನ್ನು ಆವರಿಸಿದೆ.

ಬಸ್ಸಿನಲ್ಲಿದ್ದ 12 ಮಂದಿ ಪ್ರಯಾಣಿಕರು ಪಾರಾದರೂ ಕನಿಷ್ಠ 25 ಮಂದಿ ಜೀವಂತವಾಗಿ ಸುಟ್ಟು ಹೋಗಿರುವ ಶಂಕೆ ವ್ಯಕ್ತವಾಗಿದೆ. ಪ್ರಯಾಣಿಕರನ್ನು ಕರ್ನೂಲ್ ಸರ್ಕಾರಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಪ್ರಯಾಣಿಕರು ಹೈದರಾಬಾದ್ ನಿವಾಸಿಗಳು ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಬಗ್ಗೆ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ ಪ್ರಾಣ ಕಳೆದುಕೊಂಡಿರುವವರ ಕುಟುಂಬಕ್ಕೆ 2 ಲಕ್ಷ ರೂ. ಹಾಗೂ ಗಾಯಗೊಂಡಿರುವವರಿಗೆ 50 ಸಾವಿರ ರೂ. ಪರಿಹಾರ ಘೋಷಿಸಿದ್ದಾರೆ.

ಕರ್ನೂಲ್ ಜಿಲ್ಲೆಯ ಚಿನ್ನಾ ಟೇಕೂರ್ ಗ್ರಾಮದ ಬಳಿ ಸಂಭವಿಸಿದ ಭೀಕರ ಬಸ್ ಬೆಂಕಿ ಅಪಘಾತದ ಬಗ್ಗೆ ತಿಳಿದು ನನಗೆ ಆಘಾತವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರ ಕುಟುಂಬಗಳಿಗೆ ನನ್ನ ಹೃತ್ಪೂರ್ವಕ ಸಂತಾಪಗಳು. ಗಾಯಗೊಂಡವರು ಮತ್ತು ಬಾಧಿತ ಕುಟುಂಬಗಳಿಗೆ ಸರ್ಕಾರಿ ಅಧಿಕಾರಿಗಳು ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುತ್ತಾರೆ ಎಂದು ಆಂಧ್ರ ಸಿಎಂ ಚಂದ್ರಬಾಬುನಾಯ್ಡು ಟ್ವೀಟ್ ಮಾಡಿದ್ದಾರೆ.

ಆಂಧ್ರಪ್ರದೇಶದ ಕರ್ನೂಲ್‌ನ ಬೆಂಗಳೂರು — ಹೈದರಾಬಾದ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಬಸ್‌ ಗೆ ಬೆಂಕಿ‌ ತಗುಲಿ ಹಲವು ಪ್ರಯಾಣಿಕರು ಪ್ರಾಣ ಕಳೆದುಕೊಂಡ ಸುದ್ದಿ ಕೇಳಿ ಅತೀವ ದುಃಖವಾಯಿತು. ದುರಂತದಲ್ಲಿ ಮಡಿದವರ ಕುಟುಂಬಕ್ಕೆ ನನ್ನ ಸಂತಾಪಗಳು. ಗಾಯಾಳುಗಳು ಆದಷ್ಟು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version