ಮಂಗಳೂರು: ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ ಹಲವಾರು ಅವೈಜ್ಞಾನಿಕ ಕಾಮಗಾರಿ: ಎಸ್ ಡಿಪಿಐ ಆರೋಪ

ಮಂಗಳೂರು ನಗರದ ಬಹುತೇಕ ಕಡೆಗಳಲ್ಲಿ ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲ. ಹೀಗಾಗಿ ಮಳೆ ಬಂದಾಗ ನಗರದಲ್ಲಿ ಅಲ್ಲಲ್ಲಿ ಕೃತಕ ನೆರೆ ಸೃಷ್ಟಿಯಾಗಿ ನೀರು ಮತ್ತು ಅದರೊಂದಿಗೆ ತ್ಯಾಜ್ಯ ನೀರು ಮುಖ್ಯ ರಸ್ತೆಯಲ್ಲಿಯೇ ಹರಿಯುತ್ತಿದೆ. ಇದಕ್ಕೆ ಅವೈಜ್ಞಾನಿಕ ಮತ್ತು ಬೇಜವಾಬ್ದಾರಿ ಕಾಮಗಾರಿಯೇ ಪ್ರಮುಖ ಕಾರಣ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾರ್ಯದರ್ಶಿ ಅಕ್ಬರ್ ರಾಝಾ ಆರೋಪಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ಬಿಡುಗಡೆಗೊಳಿಸಿರುವ ಅವರು, ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ ಅಭಿವೃದ್ಧಿಗೊಳ್ಳುತ್ತಿರುವ ಮಂಗಳೂರು ನಗರದಲ್ಲಿ ಹಲವಾರು ಅವೈಜ್ಞಾನಿಕ ಕಾಮಗಾರಿಗಳಿಂದ ಪ್ರಯಾಣಿಕರು, ವಾಹನ ಸವಾರರು ನಿತ್ಯ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಅದರ ಮುಂದುವರಿದ ಭಾಗವಾಗಿ ಮಳೆ ಬಂದಾಗ ನಗರದ ಹಲವು ಪ್ರದೇಶದಲ್ಲಿ ಕೃತಕ ನೆರೆ ಸೃಷ್ಟಿಯಾಗುತ್ತಿದೆ ಎಂದಿದ್ದಾರೆ.
ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದೆ ಮುಖ್ಯ ರಸ್ತೆಯ ಮೇಲೆಯೇ ಮಳೆಯ ನೀರು ಹಾಗೂ ಚರಂಡಿ ನೀರು ಹರಿಯುತ್ತಿದೆ. ನಗರದಲ್ಲಿರುವ ರಾಜ ಕಾಲುವೆಗಳನ್ನು ಅಭಿವೃದ್ಧಿಪಡಿಸದೆ ಅವೈಜ್ಞಾನಿಕ ರೀತಿಯಲ್ಲಿ ನಿರ್ಮಿಸಿದ ಚರಂಡಿ ವ್ಯವಸ್ಥೆ ಹಾಗೂ ನೀರಿನ ಹರಿಯುವಿಕೆಗೆ ಅನುಗುಣವಾಗಿ ನಿರ್ಮಿಸದ ರಸ್ತೆಗಳಿಂದಾಗಿ ತಗ್ಗು ಪ್ರದೇಶದಲ್ಲಿ ಹಲವಾರು ಮನೆಗಳಿಗೂ ನೀರು ನುಗ್ಗಿದೆ. ಇಂತಹ ಅವೈಜ್ಞಾನಿಕ ಕಾಮಗಾರಿಯಿಂದ ಮಳೆಗಾಲದಲ್ಲಿ ಏನಾದರೂ ಪ್ರಾಣಹಾನಿ ಸಂಭವಿಸಿದರೆ ಅದಕ್ಕೆ ಸಂಬಂಧಪಟ್ಟ ಇಂಜಿನಿಯರ್ ಗಳನ್ನು ನೇರ ಹೊಣೆ ಮಾಡಿಸಿ ಅವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಅಕ್ಬರ್ ಪತ್ರಿಕಾ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw