ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿಯ ಬಂಧನ
ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನಲ್ಲಿ ಇಬ್ಬರು ಅಪ್ರಾಪ್ತ ಸಹೋದರಿಯರ ಮೇಲೆ ಸತತ ಐದು ದಿನಗಳ ಕಾಲ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ 30 ವರ್ಷದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯು ಸ್ಥಳೀಯ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ದೌರ್ಜನ್ಯಕ್ಕೆ ಒಳಗಾದ ಬಾಲಕಿಯರು 2ನೇ ಮತ್ತು 3ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಆರೋಪಿಯು ಸಂತ್ರಸ್ತ ಬಾಲಕಿಯರ ಕುಟುಂಬಕ್ಕೆ ಪರಿಚಿತನಾಗಿದ್ದನು. ಜೂನ್ 10ರಂದು ಬಾಲಕಿಯರ ಪೋಷಕರು ದಿನಗೂಲಿ ಕೆಲಸಕ್ಕೆ ತೆರಳಿದ್ದ ಸಮಯವನ್ನು ಹೊಂಚು ಹಾಕಿ ಈ ಕೃತ್ಯ ಎಸಗಿದ್ದಾನೆ. ಮಕ್ಕಳು ತೀವ್ರ ವಿರೋಧ ವ್ಯಕ್ತಪಡಿಸಿದರೂ ಸಹ ಆರೋಪಿ ತನ್ನ ವಿಕೃತಿಯನ್ನು ಮುಂದುವರಿಸಿದ್ದಾಗಿ ಬಾಲಕಿಯರ ತಂದೆ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ಮೊದಲ ದಿನದ ಕೃತ್ಯದ ನಂತರವೂ ಆರೋಪಿ ಮುಂದಿನ ಐದು ದಿನಗಳ ಕಾಲ ಬಾಲಕಿಯರ ಮೇಲೆ ನಿರಂತರವಾಗಿ ದೌರ್ಜನ್ಯ ಎಸಗಿದ್ದಾನೆ. ಅಲ್ಲದೆ, ಈ ವಿಷಯವನ್ನು ಯಾರಿಗಾದರೂ ತಿಳಿಸಿದರೆ ನಿಮ್ಮ ತಂದೆ-ತಾಯಿಯನ್ನು ಕೊಲೆ ಮಾಡುವುದಾಗಿ ಬಾಲಕಿಯರಿಗೆ ಹೆದರಿಸಿ, ಬೆದರಿಕೆ ಹಾಕಿದ್ದಾಗಿ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬಾಲಕಿಯರ ಪೋಷಕರು ನೀಡಿದ ದೂರಿನ ಅನ್ವಯ, ಸಿಂಧನೂರು ನಗರ ಪೊಲೀಸ್ ಠಾಣೆಯಲ್ಲಿ ಆರೋಪಿಯ ವಿರುದ್ಧ ಪೋಕ್ಸೋ (POCSO) ಕಾಯ್ದೆ ಹಾಗೂ ಎಸ್ಸಿ/ಎಸ್ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಸದ್ಯ ಆರೋಪಿಯನ್ನು ಬಂಧಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD























