ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಹಾಕಿದ್ದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಕೇರಳ ಗಡಿಯಲ್ಲಿ ಬಂಧನ

rajeev gowda arrested
26/01/2026

ಚಿಕ್ಕಬಳ್ಳಾಪುರ: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಪ್ರಾಣ ಬೆದರಿಕೆ ಹಾಕಿದ್ದ ಪ್ರಕರಣದ ಪ್ರಮುಖ ಆರೋಪಿ, ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರನ್ನು ಪೊಲೀಸರು ಕೊನೆಗೂ ಬಂಧಿಸಿದ್ದಾರೆ. ಹಲವು ದಿನಗಳಿಂದ ತಲೆಮರೆಸಿಕೊಂಡಿದ್ದ ಇವರನ್ನು ಕೇರಳ ಗಡಿಭಾಗದಲ್ಲಿ ಚಿಕ್ಕಬಳ್ಳಾಪುರ ಪೊಲೀಸರು ಸಿನಿಮೀಯ ರೀತಿಯಲ್ಲಿ ಕಾರ್ಯಾಚರಣೆ ನಡೆಸಿ ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಪ್ರಕರಣದ ಹಿನ್ನೆಲೆ: ಜನವರಿ 12 ರಂದು ಶಿಡ್ಲಘಟ್ಟ ನಗರದಲ್ಲಿ ಅಕ್ರಮವಾಗಿ ಅಳವಡಿಸಲಾಗಿದ್ದ ಬ್ಯಾನರ್‌ಗಳನ್ನು ತೆರವುಗೊಳಿಸಿದ್ದಕ್ಕಾಗಿ ರಾಜೀವ್ ಗೌಡ ಅವರು ಪೌರಾಯುಕ್ತೆ ಅಮೃತಾ ಅವರಿಗೆ ದೂರವಾಣಿ ಕರೆ ಮಾಡಿ ಧಮ್ಕಿ ಹಾಕಿದ್ದರು. “ಕಚೇರಿಗೆ ಬೆಂಕಿ ಹಚ್ಚುವುದಾಗಿ” ಬೆದರಿಕೆ ಹಾಕಿದ್ದ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಸಂಬಂಧ ಜನವರಿ 14 ರಂದು ಶಿಡ್ಲಘಟ್ಟ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಹೈಕೋರ್ಟ್‌ನಲ್ಲಿ ಹಿನ್ನಡೆ: ತನ್ನ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ (FIR) ರದ್ದುಪಡಿಸುವಂತೆ ಕೋರಿ ರಾಜೀವ್ ಗೌಡ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ ವಿಚಾರಣೆ ನಡೆಸಿದ್ದ ನ್ಯಾಯಾಲಯವು ಆರೋಪಿಯ ನಡೆಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಲ್ಲದೆ, ಎಫ್‌ಐಆರ್ ರದ್ದುಪಡಿಸಲು ನಿರಾಕರಿಸಿ ಅರ್ಜಿಯನ್ನು ವಜಾಗೊಳಿಸಿತ್ತು. ಅಲ್ಲದೆ ನಿರೀಕ್ಷಣಾ ಜಾಮೀನು ಅರ್ಜಿಯೂ ತಿರಸ್ಕೃತಗೊಂಡಿದ್ದರಿಂದ ಬಂಧನ ಭೀತಿಯಲ್ಲಿದ್ದ ರಾಜೀವ್ ಗೌಡ ಅಲೆದಾಡುತ್ತಿದ್ದರು.

ಬಂಧನ ಕಾರ್ಯಾಚರಣೆ: ಬಂಧನ ತಪ್ಪಿಸಿಕೊಳ್ಳಲು ರಾಜೀವ್ ಗೌಡ ಮಂಗಳೂರಿನಿಂದ ಕೇರಳದತ್ತ ಪರಾರಿಯಾಗಲು ಯತ್ನಿಸಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಚಿಕ್ಕಬಳ್ಳಾಪುರ ಎಸ್ಪಿ ಕುಶಲ್ ಚೌಕ್ಸೆ ನೇತೃತ್ವದ ತಂಡ, ಕೇರಳ ಗಡಿಭಾಗದಲ್ಲಿ ಅವರನ್ನು ಬಂಧಿಸಿದೆ. ಸದ್ಯ ಆರೋಪಿಯನ್ನು ಶಿಡ್ಲಘಟ್ಟಕ್ಕೆ ಕರೆತರಲಾಗುತ್ತಿದ್ದು, ಈ ಕುರಿತು ಹೆಚ್ಚಿನ ಮಾಹಿತಿಗಳನ್ನು ಪೊಲೀಸರು ಶೀಘ್ರದಲ್ಲೇ ನೀಡಲಿದ್ದಾರೆ.

ಈ ಪ್ರಕರಣವು ಕಾಂಗ್ರೆಸ್ ಪಕ್ಷಕ್ಕೂ ಮುಜುಗರ ತಂದಿದ್ದು, ಈಗಾಗಲೇ ರಾಜೀವ್ ಗೌಡ ಅವರನ್ನು ಪಕ್ಷದಿಂದ ಅಮಾನತುಗೊಳಿಸಿ ಶಿಸ್ತು ಸಮಿತಿಗೆ ಆದೇಶ ನೀಡಲಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version