ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ವಿದಾಯ ಭಾಷಣದಲ್ಲಿ ಭಾವುಕರಾದ ಸಿಎಂ! - Mahanayaka

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ವಿದಾಯ ಭಾಷಣದಲ್ಲಿ ಭಾವುಕರಾದ ಸಿಎಂ!

siddaramaiah
28/05/2026

ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಕಳೆದ ಕೆಲವು ದಿನಗಳಿಂದ ತೀವ್ರ ಕುತೂಹಲ ಮೂಡಿಸಿದ್ದ ಮುಖ್ಯಮಂತ್ರಿ ಬದಲಾವಣೆ ಪ್ರಕ್ರಿಯೆ ಕೊನೆಗೂ ಅಂತಿಮ ಹಂತಕ್ಕೆ ತಲುಪಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ ಸಿಎಂ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ಸಲ್ಲಿಸಿದ್ದಾರೆ.

ಇಂದು ಬೆಳಗ್ಗೆ ತಮ್ಮ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ಸಚಿವರಿಗೆ ಉಪಾಹಾರ ಕೂಟ ಏರ್ಪಡಿಸಿದ್ದ ಸಿದ್ದರಾಮಯ್ಯ, ತಾವು ರಾಜೀನಾಮೆ ನೀಡುತ್ತಿರುವುದಾಗಿ ಅಧಿಕೃತವಾಗಿ ಘೋಷಿಸಿದ್ದರು. ಆ ಸಭೆಯಲ್ಲಿ ಸಚಿವರೊಂದಿಗೆ ಮಾತನಾಡುತ್ತಾ ಕಣ್ಣೀರು ಹಾಕಿದ್ದ ಅವರು, ಬಳಿಕ ಲೋಕಭವನಕ್ಕೆ ತೆರಳಿ ರಾಜ್ಯಪಾಲರಿಗೆ ರಾಜೀನಾಮೆ ಪತ್ರವನ್ನು ಹಸ್ತಾಂತರಿಸಿದ್ದಾರೆ.

ರಾಜೀನಾಮೆ ನೀಡಿದ ಬಳಿಕ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿದ್ದರಾಮಯ್ಯ ಅತ್ಯಂತ ಭಾವುಕರಾಗಿ ತಮ್ಮ 50 ವರ್ಷಗಳ ರಾಜಕೀಯ ಜೀವನದ ಹಾದಿಯನ್ನು ನೆನಪಿಸಿಕೊಂಡರು.

ಮತದಾರರೇ ನನ್ನ ‘ಅಭಿಮಾನಿ ದೇವರುಗಳು’:

“ನಟ ರಾಜಕುಮಾರ್ ಅವರು ಜನರನ್ನು ಅಭಿಮಾನಿ ದೇವರುಗಳು ಎನ್ನುತ್ತಿದ್ದರು. ನಾನು ರಾಜಕಾರಣಿಯಾಗಿ ಸಂವಿಧಾನವನ್ನೇ ನಮ್ಮ ಧರ್ಮ ಎಂದು ನಂಬಿದ್ದೇನೆ. ನನಗೆ ಮತದಾರರೇ ಅಭಿಮಾನಿ ದೇವರುಗಳು. ಕರ್ನಾಟಕದ 7 ಕೋಟಿ ಜನರ ಸೇವೆ ಮಾಡುವ ಸೌಭಾಗ್ಯ ನನಗೆ ಸಿಕ್ಕಿತ್ತು. ಎರಡು ಬಾರಿ ಮುಖ್ಯಮಂತ್ರಿ ಹಾಗೂ ಎರಡು ಬಾರಿ ವಿರೋಧ ಪಕ್ಷದ ನಾಯಕನಾಗಿ ಕೆಲಸ ಮಾಡಲು ಅವಕಾಶ ಮಾಡಿಕೊಟ್ಟ ಹೈಕಮಾಂಡ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರಿಗೆ ಧನ್ಯವಾದ ಅರ್ಪಿಸುತ್ತೇನೆ” ಎಂದು ಸಿದ್ದರಾಮಯ್ಯ ಹೇಳಿದರು.

“ನಾನು ಹಳ್ಳಿಯಿಂದ ಬಂದವನು. ನನ್ನ ಕುಟುಂಬದಲ್ಲಿ ಯಾರೂ ರಾಜಕೀಯದಲ್ಲಿ ಇರಲಿಲ್ಲ. ನಾನು ಶಾಸಕ, ಸಿಎಂ ಆಗುತ್ತೇನೆ ಎಂದು ಅಂದುಕೊಂಡಿರಲಿಲ್ಲ. ನನ್ನ ರಾಜಕೀಯ ಪ್ರವೇಶ ಆಕಸ್ಮಿಕ. ಮೊದಲಿನಿಂದಲೂ ಬುದ್ಧ, ಬಸವ, ಅಂಬೇಡ್ಕರ್ ಹಾಗೂ ಗಾಂಧೀಜಿಯವರ ತತ್ವ ಸಿದ್ಧಾಂತಗಳಲ್ಲಿ ನಂಬಿಕೆ ಇಟ್ಟುಕೊಂಡು ಬಂದವನು” ಎಂದು ಹೇಳುತ್ತಾ ಸಿದ್ದರಾಮಯ್ಯ ಭಾವುಕರಾದರು.

“ನಮ್ಮ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರಧಾನಿ ಮೋದಿ ಸೇರಿದಂತೆ ವಿರೋಧ ಪಕ್ಷಗಳು ತೀವ್ರ ಅಪಪ್ರಚಾರ ಮಾಡಿದ್ದವು. ಗ್ಯಾರಂಟಿಗಳಿಂದ ರಾಜ್ಯ ದಿವಾಳಿಯಾಗುತ್ತದೆ ಎಂದಿದ್ದರು. ಆದರೆ ನಾವು ನುಡಿದಂತೆ ನಡೆದಿದ್ದೇವೆ. ಕೊಟ್ಟ ಭರವಸೆಗಳನ್ನು ಈಡೇರಿಸಿದ ಮೇಲೂ ಕರ್ನಾಟಕ ತಲಾ ಆದಾಯದಲ್ಲಿ ನಂಬರ್ ಒನ್ ಸ್ಥಾನದಲ್ಲಿದೆ” ಎಂದು ವಿಪಕ್ಷಗಳಿಗೆ ತಿರುಗೇಟು ನೀಡಿದರು. “ನಾನು ಯಾವತ್ತೂ ಅಧಿಕಾರ ಅಥವಾ ಹಣದ ಹಿಂದೆ ಬಿದ್ದವನಲ್ಲ. ನನ್ನ ರಾಜಕೀಯ ಜೀವನ ಒಂದು ತೆರೆದ ಪುಸ್ತಕ” ಎಂದು ಸ್ಪಷ್ಟಪಡಿಸಿದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ