ನೀಟ್ ಅಕ್ರಮ ವಿರುದ್ಧ ಉಪವಾಸ ಕೈಗೊಂಡಿರುವ ಸೋನಮ್ ವಾಂಗ್ಚುಕ್ ಇನ್ನೆರಡು ದಿನಗಳಲ್ಲಿ ಪ್ರಾಣ ಕಳೆದುಕೊಳ್ಳಬಹುದು!
ನವದೆಹಲಿ: ಪ್ರಸಿದ್ಧ ಸಾಮಾಜಿಕ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಆಮರಣಾಂತ ಉಪವಾಸ ಸತ್ಯಾಗ್ರಹವು 18ನೇ ದಿನಕ್ಕೆ ಕಾಲಿಟ್ಟಿದ್ದು, ಅವರ ಆರೋಗ್ಯ ಸ್ಥಿತಿ ತೀವ್ರವಾಗಿ ಕ್ಷೀಣಿಸುತ್ತಿದೆ. ಈ ಹಿನ್ನೆಲೆಯಲ್ಲಿ ಅವರಿಗೆ ಬಲವಂತವಾಗಿ ದ್ರವರೂಪದ ಆಹಾರವನ್ನು (Force–feeding) ನೀಡುವಂತೆ ಕೋರಿ ದೆಹಲಿ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಕೆಯಾಗಿದೆ.
ಹೋರಾಟಗಾರ ಹಾಗೂ ವಕೀಲ ರಾಕೇಶ್ ಕುಮಾರ್ ಸೈನಿ ಅವರು ಈ ಅರ್ಜಿಯನ್ನು ಸಲ್ಲಿಸಿದ್ದು, ವಾಂಗ್ಚುಕ್ ಅವರನ್ನು ತಕ್ಷಣವೇ ಸರ್ಕಾರಿ ಆಸ್ಪತ್ರೆಗೆ ದಾಖಲಿಸುವಂತೆ ಕೇಂದ್ರ ಮತ್ತು ದೆಹಲಿ ಸರ್ಕಾರಕ್ಕೆ ತುರ್ತು ನಿರ್ದೇಶನ ನೀಡಬೇಕೆಂದು ಮನವಿ ಮಾಡಿದ್ದಾರೆ.
ಉಪವಾಸ ಮುಂದುವರಿದರೆ ವಾಂಗ್ಚುಕ್ ಅವರು ಇನ್ನೆರಡು ದಿನಗಳಲ್ಲಿ ಪ್ರಾಣ ಕಳೆದುಕೊಳ್ಳುವ ಅಪಾಯವಿದೆ. ಅವರ ತೂಕ ಈಗಾಗಲೇ ಸುಮಾರು 8.5 ಕೆಜಿಯಷ್ಟು ಕಡಿಮೆಯಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.
ಅವರ ಇಚ್ಛೆಗೆ ವಿರುದ್ಧವಾಗಿಯಾದರೂ ಸರಿ, ಅವರ ಜೀವ ಉಳಿಸಲು ಅಗತ್ಯ ಪೋಷಕಾಂಶಗಳು, ಜೀವಸತ್ವಗಳು ಮತ್ತು ಖನಿಜಗಳನ್ನು ಒಳಗೊಂಡಿರುವ ದ್ರವರೂಪದ ಆಹಾರವನ್ನು ವೈದ್ಯರ ಮೇಲ್ವಿಚಾರಣೆಯಲ್ಲಿ ನೀಡಬೇಕು.
ಸರ್ಕಾರವು ವಾಂಗ್ಚುಕ್ ಅವರನ್ನು “ಕಡು ಅಪರಾಧಿ, ಭಯೋತ್ಪಾದಕ ಅಥವಾ ದೇಶದ್ರೋಹಿ” ಯಂತೆ ನಡೆಸಿಕೊಳ್ಳುತ್ತಿದೆ ಮತ್ತು ಅವರ ಆರೋಗ್ಯದ ಬಗ್ಗೆ ಯಾವುದೇ ಕಾಳಜಿ ವಹಿಸುತ್ತಿಲ್ಲ ಎಂದು ಅರ್ಜಿ ಆರೋಪಿಸಿದೆ. ಒಂದು ವೇಳೆ ಅವರಿಗೆ ಏನಾದರೂ ಆದಲ್ಲಿ, ಅದು ಇಡೀ ದೇಶಕ್ಕೆ ಮತ್ತು ಜಗತ್ತಿಗೆ ದೊಡ್ಡ ಅವಮಾನದ ಸಂಗತಿಯಾಗಲಿದೆ ಎಂದು ಕಳವಳ ವ್ಯಕ್ತಪಡಿಸಲಾಗಿದೆ.
ಉಪವಾಸಕ್ಕೆ ಕಾರಣವೇನು?
ನೀಟ್ (NEET) ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ನಡೆದಿರುವ ಅಕ್ರಮಗಳನ್ನು ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ, ‘ಕಾಕ್ರೋಚ್ ಜನತಾ ಪಾರ್ಟಿ’ (CJP) ದೆಹಲಿಯ ಜಂತರ್ ಮಂತರ್ ನಲ್ಲಿ ಹಮ್ಮಿಕೊಂಡಿರುವ ಪ್ರತಿಭಟನೆಯಲ್ಲಿ ಜೂನ್ 28 ರಿಂದ ಸೋನಮ್ ವಾಂಗ್ಚುಕ್ ಆಮರಣಾಂತ ಉಪವಾಸ ಕೈಗೊಂಡಿದ್ದಾರೆ.
ಅವರ ಆರೋಗ್ಯ ಬಿಗಡಡಿಸುತ್ತಿರುವುದರಿಂದ ಅರುಂಧತಿ ರಾಯ್, ನಟರಾದ ನಸೀರುದ್ದೀನ್ ಶಾ, ರತ್ನಾ ಪಾಠಕ್ ಶಾ ಮತ್ತು ಅರ್ಥಶಾಸ್ತ್ರಜ್ಞೆ ಜಯತಿ ಘೋಷ್ ಸೇರಿದಂತೆ ಹಲವು ಗಣ್ಯರು ಹಾಗೂ ವಿರೋಧ ಪಕ್ಷದ ನಾಯಕರು ಉಪವಾಸ ಸತ್ಯಾಗ್ರಹವನ್ನು ಕೈಬಿಡುವಂತೆ ವಾಂಗ್ಚುಕ್ ಅವರಿಗೆ ಮನವಿ ಮಾಡಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD



























