ಚಿತ್ರದುರ್ಗದಲ್ಲಿ ಭೀಕರ ರಸ್ತೆ ಅಪಘಾತ: ಮರಕ್ಕೆ ಬೊಲೆರೊ ಡಿಕ್ಕಿ, ಒಂದೇ ಗ್ರಾಮದ ನಾಲ್ವರು ಕಾರ್ಮಿಕರ ಸಾವು
ಚಿತ್ರದುರ್ಗ: ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಅಂದನೂರು ಬಳಿ ಮಂಗಳವಾರ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅತಿವೇಗವಾಗಿ ಬಂದ ಬೊಲೆರೊ ವಾಹನವೊಂದು ರಸ್ತೆ ಪಕ್ಕದ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಗ್ರಾಮದ ನಾಲ್ವರು ಕಾರ್ಮಿಕರು ಮೃತಪಟ್ಟಿದ್ದಾರೆ.
ಘಟನೆಯ ವಿವರ: ದಾವಣಗೆರೆ ತಾಲೂಕಿನ ಅಣಜಿ ಗ್ರಾಮದಲ್ಲಿ ಅಡಕೆ ಲೋಡ್ ಇಳಿಸಿ ವಾಪಸ್ ಬರುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಅಪಘಾತದ ತೀವ್ರತೆಗೆ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಉಳಿದ ಇಬ್ಬರು ದಾವಣಗೆರೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಮೃತರ ವಿವರ: ಮೃತಪಟ್ಟವರನ್ನು ಕಿರಣ್ (25), ಅರುಣ್ (32), ಹನುಮಂತ (32) ಮತ್ತು ಗಿರಿರಾಜ್ (46) ಎಂದು ಗುರುತಿಸಲಾಗಿದೆ. ಇವರೆಲ್ಲರೂ ಕಲ್ಲವ್ವ ನಾಗತಿಹಳ್ಳಿ ಗ್ರಾಮದ ನಿವಾಸಿಗಳಾಗಿದ್ದಾರೆ.
ನಾಲ್ವರಿಗೆ ಗಾಯ: ಅಪಘಾತದಲ್ಲಿ ಇತರ ನಾಲ್ವರು ಕಾರ್ಮಿಕರಿಗೂ ಗಾಯಗಳಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಚಿಕ್ಕಜಾಜೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಒಂದೇ ಗ್ರಾಮದ ನಾಲ್ವರು ಮೃತಪಟ್ಟಿದ್ದರಿಂದ ಕಲ್ಲವ್ವ ನಾಗತಿಹಳ್ಳಿ ಗ್ರಾಮದಲ್ಲಿ ಶೋಕದ ಛಾಯೆ ಆವರಿಸಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD



























