ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕಠಿಣ ಕ್ರಮ: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಎಚ್ಚರಿಕೆ
ಬೆಂಗಳೂರು: ಕಾನೂನು ಎಲ್ಲರಿಗೂ ಸಮಾನವಾಗಿದ್ದು, ಅದನ್ನು ಕೈಗೆತ್ತಿಕೊಳ್ಳುವ ಅಥವಾ ಉಲ್ಲಂಘಿಸುವವರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರಿನ ಪೊಲೀಸ್ ಪ್ರಧಾನ ಕಚೇರಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದ ಬಳಿಕ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು. ಬೆಂಗಳೂರು ನಗರದ ಸದ್ಯದ ಕಾನೂನು ಮತ್ತು ಸುವ್ಯವಸ್ಥೆ, ಮಹಿಳೆಯರ ಸುರಕ್ಷತೆ, ಮಾದಕ ವಸ್ತುಗಳ ಹಾವಳಿ ಹಾಗೂ ಸಂಚಾರ (ಟ್ರಾಫಿಕ್) ನಿರ್ವಹಣೆ ಸೇರಿದಂತೆ ಹಲವು ಪ್ರಮುಖ ವಿಷಯಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು ಪರಿಶೀಲನೆ ನಡೆಸಿದ್ದಾಗಿ ತಿಳಿಸಿದರು.
ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ನಕಲಿ ಸುದ್ದಿಗಳು (Fake News) ಮತ್ತು ಪ್ರಚೋದನಕಾರಿ ವಿಷಯಗಳ ಬಗ್ಗೆ ಮಾಹಿತಿ ತಂತ್ರಜ್ಞಾನ (IT) ಇಲಾಖೆ ಹಾಗೂ ಪೊಲೀಸ್ ಇಲಾಖೆ ಜಂಟಿಯಾಗಿ ಪರಿಶೀಲನೆ ನಡೆಸುತ್ತಿವೆ. ಸಮಾಜದಲ್ಲಿ ದ್ವೇಷ, ಅಶಾಂತಿ ಮತ್ತು ಉದ್ವಿಗ್ನತೆ ಸೃಷ್ಟಿಸಲು ಯತ್ನಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ನಗರದಲ್ಲಿ ಡ್ರಗ್ಸ್ ಸೇರಿದಂತೆ ಮಾದಕ ವಸ್ತುಗಳ ಜಾಲವನ್ನು ಸಂಪೂರ್ಣವಾಗಿ ಮಟ್ಟಹಾಕಲು ಮತ್ತು ಮಹಿಳೆಯರ ಭದ್ರತೆಗೆ ಮೊದಲ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದರು.
ಇನ್ನೂ ವಿವಿಐಪಿ (VVIP) ಸಂಚಾರದ ವೇಳೆ ಸಾರ್ವಜನಿಕರ ಓಡಾಟಕ್ಕೆ ಉಂಟಾಗುತ್ತಿರುವ ಅಡಚಣೆಗಳ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಗಿದೆ. ಜನಸಾಮಾನ್ಯರಿಗೆ ತೊಂದರೆಯಾಗದಂತೆ ಹೊಸ ವ್ಯವಸ್ಥೆಗಳನ್ನು ತರಲು ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ಈ ಬದಲಾವಣೆ ಜಾರಿಗೆ ಬರಲು ಸ್ವಲ್ಪ ಸಮಯ ಬೇಕಾಗಬಹುದು ಎಂದು ಸಚಿವರು ಸ್ಪಷ್ಟಪಡಿಸಿದರು.
ಪ್ರಸ್ತುತ ಸರ್ಕಾರವು ಸಾರ್ವಜನಿಕರ ಸುರಕ್ಷತೆ ಮತ್ತು ನಗರದ ಸುವ್ಯವಸ್ಥೆಗೆ ಹೆಚ್ಚಿನ ಒತ್ತು ನೀಡುತ್ತಿದ್ದು, ಎಲ್ಲಾ ಇಲಾಖೆಗಳ ಸಮನ್ವಯದೊಂದಿಗೆ ಬೆಂಗಳೂರಿನ ಸಂಚಾರ ಸಮಸ್ಯೆಗೆ ಶೀಘ್ರದಲ್ಲೇ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಪ್ರಿಯಾಂಕ್ ಖರ್ಗೆ ಭರವಸೆ ನೀಡಿದ್ದಾರೆ. ಸಭೆಯ ಸಂದರ್ಭದಲ್ಲಿ ರಾಜ್ಯ ಪೊಲೀಸ್ ಮಹಾನಿರ್ದೇಶಕ (DGP) ಎಂ.ಎ. ಸಲೀಂ ಅವರು ಗೃಹ ಸಚಿವರನ್ನು ಸನ್ಮಾನಿಸಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD























