ಕೋಮು ಹಿಂಸಾಚಾರದ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ: ಉಡುಪಿ ಜಿಲ್ಲಾ ನೂತನ ಪೊಲೀಸ್ ಅಧೀಕ್ಷಕ ಡಾ.ಕೆ.ಅರುಣ್

07/09/2023
ಉಡುಪಿ: ಜಿಲ್ಲೆಯಲ್ಲಿ ಯಾವುದೇ ಕೋಮು ಹಿಂಸಾಚಾರದ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು. ಅನೈತಿಕ ಪೋಲಿಸ್ ಗಿರಿಯನ್ನು ಯಾವತ್ತೂ ಸಹಿಸುವುದಿಲ್ಲ ಎಂದು ಉಡುಪಿ ಜಿಲ್ಲಾ ನೂತನ ಪೊಲೀಸ್ ಅಧೀಕ್ಷಕ ಡಾ.ಕೆ.ಅರುಣ್ ತಿಳಿಸಿದರು.
ನಿರ್ಗಮನ ಪೊಲೀಸ್ ಅಧೀಕ್ಷಕ ಅಕ್ಷಯ್ ಹಾಕೇ ಅವರಿಂದ ಇಂದು ಅಧಿಕಾರ ಸ್ವೀಕರಿಸಿ ಅವರು ಮಾತನಾಡುತಿದ್ದರು.
ಜಿಲ್ಲೆಯಲ್ಲಿ ನಡೆಯುತ್ತಿರುವ ಎಲ್ಲ ರೀತಿಯ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲಾಗುವುದು. ಪೊಲೀಸ್ ಇಲಾಖೆಯನ್ನು ಜನಸ್ನೇಹಿಯನ್ನಾಗಿ ಮಾಡುವುದು ನಮ್ಮ ಮೊದಲ ಆದ್ಯತೆಯಾಗಿದೆ ಎಂದು ಅವರು ಹೇಳಿದರು.
ಮಣಿಪಾಲದಲ್ಲಿ ನಡೆಯುತ್ತಿರುವ ಪಬ್, ಡ್ರಗ್ಸ್ ಸೇರಿದಂತೆ ಎಲ್ಲ ರೀತಿಯ ಕಾನೂನು ವಿರೋಧಿ ಚಟುವಟಿಕೆಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು. ಡ್ರಗ್ಸ್ ದಂಧೆಯನ್ನು ಮಟ್ಟ ಹಾಕುವುದು ಕೂಡ ರಾಜ್ಯ ಸರಕಾರದ ಆದ್ಯತೆ ಆಗಿದೆ ಎಂದು ಅವರು ತಿಳಿಸಿದರು