ಅಪ್ರಾಪ್ತ ಬಾಲಕರ ಮೇಲೆ ದೌರ್ಜನ್ಯ, ಅಶ್ಲೀಲ ಕೃತ್ಯ ಎಸಗಲು ಒತ್ತಾಯಿಸಿದ ಸಬ್–ಇನ್ಸ್ಪೆಕ್ಟರ್ ಬಂಧನ
ಬೆಂಗಳೂರು: ಕೊಲೆ ಪ್ರಕರಣವೊಂದರ ವಿಚಾರಣೆಯ ನೆಪದಲ್ಲಿ ಅಪ್ರಾಪ್ತ ಬಾಲಕರನ್ನು ಬೆಲ್ಟ್ನಿಂದ ಥಳಿಸಿ, ಬಟ್ಟೆ ಬಿಚ್ಚಿಸಿ ಅಶ್ಲೀಲ ಕೃತ್ಯ ಎಸಗುವಂತೆ ಒತ್ತಾಯಿಸಿ, ಅದನ್ನು ಮೊಬೈಲ್ನಲ್ಲಿ ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದ ಬೆಂಗಳೂರಿನ ಪೊಲೀಸ್ ಸಬ್-ಇನ್ಸ್ಪೆಕ್ಟರ್ (SI) ಪ್ರವೀಣ್ ಅವರನ್ನು ಸೋಮವಾರ ಸಂಜೆ ಬಂಧಿಸಲಾಗಿದೆ.
ಬಂಧಿತ ಆರೋಪಿ ಪ್ರವೀಣ್ ನಗರದ ಈಶಾನ್ಯ ಭಾಗದ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಸಬ್–ಇನ್ಸ್ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದ.
ಕೆಲವು ತಿಂಗಳ ಹಿಂದೆ ಅಮೃತಹಳ್ಳಿ ವ್ಯಾಪ್ತಿಯಲ್ಲಿ ನಡೆದಿದ್ದ ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲು ಪಿಎಸ್ ಐ ಪ್ರವೀಣ್ ಕೆಲವು ಅಪ್ರಾಪ್ತ ಬಾಲಕರನ್ನು ವಶಕ್ಕೆ ಪಡೆದಿದ್ದರು. ಬಾಲಕರನ್ನು ಖಾಸಗಿ ಜಾಗವೊಂದಕ್ಕೆ ಕರೆದೊಯ್ದ ಆರೋಪಿ, ಮೊದಲು ಅವರ ಬಟ್ಟೆ ಬಿಚ್ಚಿಸಿ ಬೆಲ್ಟ್ ನಿಂದ ಮನಬಂದಂತೆ ಥಳಿಸಿದ್ದಾನೆ. ಅಷ್ಟಕ್ಕೇ ನಿಲ್ಲದೆ, ಬಾಲಕರು ಅಶ್ಲೀಲ ಕೃತ್ಯಗಳಲ್ಲಿ ತೊಡಗಿಕೊಳ್ಳುವಂತೆ ಬಲವಂತಪಡಿಸಿದ್ದಾನೆ. ಅಲ್ಲದೆ ಆ ದೃಶ್ಯಗಳನ್ನು ತನ್ನ ಮೊಬೈಲ್ ಫೋನ್ನಲ್ಲಿ ವಿಡಿಯೋ ಮಾಡಿಕೊಂಡಿದ್ದ ಎನ್ನಲಾಗಿದೆ.
ಇತ್ತೀಚೆಗೆ ಈ ಅಶ್ಲೀಲ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಸೋರಿಕೆಯಾಗಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳ ಗಮನಕ್ಕೆ ಬಂದಿದೆ. ಪ್ರಕರಣದ ಗಂಭೀರತೆಯನ್ನು ಅರಿತ ಹಿರಿಯ ಅಧಿಕಾರಿಗಳು ಸ್ವಯಂಪ್ರೇರಿತವಾಗಿ (Suo-motu) ದೂರು ದಾಖಲಿಸಿಕೊಂಡಿದ್ದಾರೆ.
ಆರೋಪಿ ಪಿಎಸ್ ಐ ಪ್ರವೀಣ್ ವಿರುದ್ಧ ಕೊತ್ತನೂರು ಪೊಲೀಸ್ ಠಾಣೆಯಲ್ಲಿ ಪೋಕ್ಸೋ (POCSO — ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ-2012) ಅಡಿಯಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿತ್ತು. ಎಫ್ಐಆರ್ ದಾಖಲಾದ ಬೆನ್ನಲ್ಲೇ ಕೊತ್ತನೂರು ಪೊಲೀಸರು ಸೋಮವಾರ ಸಂಜೆ ಆರೋಪಿಯನ್ನು ಬಂಧಿಸಿದ್ದು, ಸದ್ಯ ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD























