ಸಚಿವ ಶಿವಾನಂದ ಪಾಟೀಲ ಪುತ್ರಿಗೆ ಟಿಕೆಟ್!: ವೀಣಾ ಕಾಶಪ್ಪನವರ್ ಬೆಂಬಲಿಗರಿಂದ ಪ್ರತಿಭಟನೆ

ಬಾಗಲಕೋಟ: ಸಚಿವ ಶಿವಾನಂದ ಪಾಟೀಲ ಅವರ ಪುತ್ರಿ ಸಂಯುಕ್ತಾ ಪಾಟೀಲ್‌ಗೆ ಕಾಂಗ್ರೆಸ್ ಟಿಕೆಟ್ ನೀಡುವ ವಿಚಾರವಾಗಿ ತೀವ್ರ ವಿರೋಧ ವ್ಯಕ್ತವಾಗಿದ್ದು, ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿರುವ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರ್ ಬೆಂಬಲಿಗರು ಗರಂ ಆಗಿದ್ದಾರೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ವೀಣಾ ಕಾಶಪ್ಪನವರ್ ಬೆಂಬಲಿಗರು ಬುಧವಾರ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಸಂಯುಕ್ತಾ ಪಾಟೀಲ್ ವಿಜಯಪುರ ಜಿಲ್ಲೆಯವರು. ಹೊರಗಿನವರಿಗೆ ಟಿಕೆಟ್ ಕೊಡಬಾರದು ಎಂದು ವೀಣಾ ಬೆಂಬಲಿಗರು ಒತ್ತಾಯಿಸಿದರು.
ಪಕ್ಷದ ಕಚೇರಿಯ ಹೊರಗೆ ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದ ಬೆಂಬಲಿಗರು, ಪಕ್ಷದ ನಾಯಕರ ವಿರುದ್ಧ ಘೋಷಣೆಗಳನ್ನು ಕೂಗಿದರು ಮತ್ತು ಟೈರ್‌ಗಳನ್ನು ಸುಟ್ಟುಹಾಕಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನಾಕಾರರು ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಸ್ಥಳದಲ್ಲಿದ್ದ ಪೊಲೀಸರು ಅವರನ್ನು ತಡೆದರು. ಇದರಿಂದ ಕೋಪಗೊಂಡ ಬೆಂಬಲಿಗರು ಪೊಲೀಸ್ ಸಿಬ್ಬಂದಿಯೊಂದಿಗೆ ತೀವ್ರ ವಾಗ್ವಾದ ನಡೆಸಿದರು.
ಇತ್ತೀಚಿನವರೆಗೂ ಬಾಗಲಕೋಟೆ ಲೋಕಸಭಾ ಕ್ಷೇತ್ರದ ಟಿಕೆಟ್ ಸ್ಪರ್ಧಿಗಳಲ್ಲಿ ಆನಂದ್ ನ್ಯಾಮೇಗೌಡ, ವೀಣಾ ಕಾಶಪ್ಪನವರ್ ಪ್ರಬಲ ಆಕಾಂಕ್ಷಿಯಾಗಿದ್ದರು. ಆದರೆ ಏಕಾಏಕಿ ಸಚಿವ ಶಿವಾನಂದ ಪಾಟೀಲ್ ಅವರ ಪುತ್ರಿ ಸಂಯುಕ್ತ ಅವರ ಹೆಸರು ಫೈನಲ್ ಮಾಡಲು ಸಿದ್ಧತೆ ನಡೆಸಲಾಗುತ್ತಿದೆ. ಪಕ್ಷದ ಬಾವುಟ ಹಿಡಿದ ಕಾರ್ಯಕರ್ತರನ್ನು ಕಡೆಗಣಿಸಿ, ಸಚಿವರ ಮಕ್ಕಳಿಗೆ ಟಿಕೆಟ್ ಕೊಡಿಸುವ ಪ್ರಯತ್ನಕ್ಕೆ ಇದೀಗ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth