ಚಿಕ್ಕಮಗಳೂರಿನಲ್ಲಿ ಅಂಬೇಡ್ಕರ್ ಜಯಂತಿ ಮೆರವಣಿಗೆ ವೇಳೆ ದುರಂತ; ಮದ್ಯ ವ್ಯಸನಿ ಕಾರು ಚಾಲಕನ ಅಟ್ಟಹಾಸಕ್ಕೆ 7 ವರ್ಷದ ಮಗು ಬಲಿ
ಚಿಕ್ಕಮಗಳೂರು: ಜಿಲ್ಲೆಯ ಬಿಳೇಕಲ್ಲು ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆಯ ಸಂಭ್ರಮವು ಕ್ಷಣಾರ್ಧದಲ್ಲಿ ಮಯಾನವಾಗಿ ಮಾರ್ಪಟ್ಟಿದೆ. ಮೆರವಣಿಗೆಯ ಮೇಲೆ ಮದ್ಯ ವ್ಯಸನಿ ಚಾಲಕನೊಬ್ಬ ಕಾರು ನುಗ್ಗಿಸಿದ ಪರಿಣಾಮ ಏಳು ವರ್ಷದ ಪುಟ್ಟ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಏಳು ಮಂದಿ ಗಂಭೀರವಾಗಿ ಗಾಯಗೊಂಡಿರುವ ಭೀಕರ ಘಟನೆ ಸಂಭವಿಸಿದೆ.
ಚಿಕ್ಕಮಗಳೂರು ತಾಲೂಕಿನ ಬಿಳೇಕಲ್ಲು ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಪ್ರಯುಕ್ತ ಮೆರವಣಿಗೆ ನಡೆಯುತ್ತಿತ್ತು. ಈ ವೇಳೆ ಅತಿಯಾಗಿ ಮದ್ಯ ಸೇವಿಸಿದ್ದ ಸುಧಾಕರ್ ಎಂಬಾತ ಅತಿ ವೇಗವಾಗಿ ಕಾರು ಚಾಲನೆ ಮಾಡಿಕೊಂಡು ಬಂದು ಮೆರವಣಿಗೆಯಲ್ಲಿದ್ದವರ ಮೇಲೆ ನುಗ್ಗಿಸಿದ್ದಾನೆ. ಈ ಭೀಕರ ಅಪಘಾತದಲ್ಲಿ 7 ವರ್ಷದ ಸಾನ್ವಿ ಎಂಬ ಬಾಲಕಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾಳೆ.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ 11 ವರ್ಷದ ನಿಶ್ಚಿತ್, ತೃಪ್ತಿ, ತಿಮ್ಮರಾಜು, ಉಷಾ, ಚೇತನ್, ಸೃಷ್ಠಿ ಹಾಗೂ ನಾಗರಾಜ್ ಎಂಬುವವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ಮೆಡಿಕಲ್ ಕಾಲೇಜಿಗೆ ರವಾನಿಸಲಾಗಿದೆ.
ಅಪಘಾತ ಸಂಭವಿಸುತ್ತಿದ್ದಂತೆ ಆಕ್ರೋಶಗೊಂಡ ಸ್ಥಳೀಯರು ಚಾಲಕ ಸುಧಾಕರ್ ನನ್ನು ಹಿಡಿದು ಮನಬಂದಂತೆ ಥಳಿಸಿದ್ದಾರೆ ಎನ್ನಲಾಗಿದೆ. ಅಲ್ಲದೆ, ಕಾರಿನ ಗಾಜುಗಳನ್ನು ಪುಡಿಪುಡಿ ಮಾಡಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಕಾರಿನಲ್ಲಿದ್ದ ಮತ್ತೊಬ್ಬ ವ್ಯಕ್ತಿ ಘಟನೆಯ ಬೆನ್ನಲ್ಲೇ ಸ್ಥಳದಿಂದ ಪರಾರಿಯಾಗಿದ್ದಾನೆ. ಸದ್ಯ ಗಾಯಾಳು ಚಾಲಕನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯ ಮುಂಭಾಗ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಗಾಯಾಳುಗಳ ಸ್ಥಿತಿ ಚಿಂತಾಜನಕವಾಗಿದ್ದರೂ, ಪೊಲೀಸರು ಮತ್ತು ವೈದ್ಯರು ಚಾಲಕನಿಗೆ ಹೆಚ್ಚಿನ ಚಿಕಿತ್ಸೆ ನೀಡಲು ಖಾಸಗಿ ಆಸ್ಪತ್ರೆಗೆ ದಾಖಲಿಸಲು ಮುಂದಾಗುತ್ತಿದ್ದಾರೆ ಎಂದು ಆರೋಪಿಸಿ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. “ನಮ್ಮ ಮಕ್ಕಳು ಸಾಯುತ್ತಿದ್ದಾರೆ, ಚಾಲಕ ಚೆನ್ನಾಗಿದ್ದಾನೆ. ಮೊದಲು ಗಾಯಾಳುಗಳ ಕಡೆ ಗಮನಹರಿಸಿ” ಎಂದು ಪೋಷಕರು ಆಕ್ರಂದನ ವ್ಯಕ್ತಪಡಿಸಿದರು.
ಪೊಲೀಸ್ ಬಿಗಿ ಬಂದೋಬಸ್ತ್:
ಘಟನಾ ಸ್ಥಳ ಹಾಗೂ ಆಸ್ಪತ್ರೆಯ ಮುಂಭಾಗ 50ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಿ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಎಎಸ್ಪಿ ಜಯಕುಮಾರ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ತಿಳಿಗೊಳಿಸಲು ಪ್ರಯತ್ನಿಸಿದರು. ಮಕ್ಕಳ ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಎಎಸ್‌ಪಿ ಅವರು ಕೈಮುಗಿದು ಜನರನ್ನು ಸಮಾಧಾನಪಡಿಸಿ ಕಳುಹಿಸಿಕೊಟ್ಟರು. ಈ ಸಂಬಂಧ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD























