ಚಿಕ್ಕಮಗಳೂರು: ಕಾಡಾನೆ ದಾಳಿಗೆ ಹಾವೇರಿ ಮೂಲದ ಕಾರ್ಮಿಕ ಬಲಿ
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಮುಂದುವರಿದಿದ್ದು, ತೋಟದ ಹಾದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಕೂಲಿ ಕಾರ್ಮಿಕರೊಬ್ಬರು ಆನೆ ದಾಳಿಗೆ ತುತ್ತಾಗಿ ಮೃತಪಟ್ಟಿರುವ ದಾರುಣ ಘಟನೆ ಚಿಕ್ಕಮಗಳೂರು ತಾಲೂಕಿನ ಹುಣಸೇಹಳ್ಳಿ ಸಮೀಪದ ಪುರ ಗ್ರಾಮದಲ್ಲಿ ನಡೆದಿದೆ.
ಘಟನೆಯ ವಿವರ:
ಮೃತ ದುರ್ದೈವಿಯನ್ನು ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ತಿರುವಳ್ಳಿ ಮೂಲದ ಯಲ್ಲಪ್ಪ (45) ಎಂದು ಗುರುತಿಸಲಾಗಿದೆ. ಇವರು ಕಳೆದ ಕೆಲವು ಸಮಯದಿಂದ ಚಿಕ್ಕಮಗಳೂರು ಭಾಗದಲ್ಲಿ ಕೂಲಿ ಕೆಲಸ ಹಾಗೂ ಗಾರೆ ಕೆಲಸ ಮಾಡಿಕೊಂಡಿದ್ದರು.
ಯಲ್ಲಪ್ಪ ಅವರು ಕೆಲಸ ಮುಗಿಸಿ ನಾಗೇಶ್ ಗೌಡರ ತೋಟದ ಮೂಲಕ ಶ್ರೀಧರ್ ಗೌಡ ಎಂಬುವವರ ತೋಟದಲ್ಲಿರುವ ಲೈನ್ ಮನೆಗೆ ತೆರಳುತ್ತಿದ್ದರು. ಈ ವೇಳೆ ಏಕಾಏಕಿ ಎದುರಾದ ಕಾಡಾನೆ ಅವರ ಮೇಲೆ ದಾಳಿ ಮಾಡಿದೆ. ಆನೆಯ ಭೀಕರ ದಾಳಿಯಿಂದಾಗಿ ಯಲ್ಲಪ್ಪ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬಾಳೆಹೊನ್ನೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
ಹೆಚ್ಚಿದ ಆತಂಕ:
ಈ ಭಾಗದಲ್ಲಿ ಕಾಡಾನೆಗಳ ಸಂಚಾರ ಹೆಚ್ಚಾಗಿದ್ದು, ಸ್ಥಳೀಯರು ಮತ್ತು ಕಾರ್ಮಿಕರು ತೋಟಗಳಲ್ಲಿ ಕೆಲಸ ಮಾಡಲು ಹಾಗೂ ಓಡಾಡಲು ಭೀತಿ ಅನುಭವಿಸುವಂತಾಗಿದೆ. ಅರಣ್ಯ ಇಲಾಖೆ ಕೂಡಲೇ ಪುಂಡಾನೆಗಳನ್ನು ನಿಯಂತ್ರಿಸಿ ಸೂಕ್ತ ರಕ್ಷಣೆ ನೀಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD
























