ತುಳುವಿಗೆ ರಾಜ್ಯದ 2ನೇ ಅಧಿಕೃತ ಭಾಷೆ ಮಾನ್ಯತೆ: ಸಚಿವ ಸಂಪುಟದ ಐತಿಹಾಸಿಕ ತೀರ್ಮಾನ
ಮಂಗಳೂರು: ಕರಾವಳಿಗರ ಬಹುದಿನಗಳ ಕನಸು ನನಸಾಗಿದ್ದು, ಸಮೃದ್ಧ ಸಾಹಿತ್ಯಿಕ ಪರಂಪರೆ ಹೊಂದಿರುವ ತುಳು ಭಾಷೆಗೆ ಕರ್ನಾಟಕದ ಎರಡನೇ ಅಧಿಕೃತ ಭಾಷೆಯ ಮಾನ್ಯತೆ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಮಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ತುಳು ಭಾಷೆಯನ್ನು ರಾಜ್ಯದ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಘೋಷಿಸಿರುವುದಾಗಿ ಅಧಿಕೃತವಾಗಿ ತಿಳಿಸಿದರು.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರಮುಖವಾಗಿ ಮಾತನಾಡುವ ತುಳು ಭಾಷೆಗೆ ಅಧಿಕೃತ ಸ್ಥಾನಮಾನ ನೀಡಬೇಕೆಂದು ಆಗ್ರಹಿಸಿ ತುಳು ಸಾಹಿತ್ಯ ಅಕಾಡೆಮಿ, ವಿವಿಧ ಸಂಘಟನೆಗಳು ಮತ್ತು ಸಾಹಿತಿಗಳು ದಶಕಗಳಿಂದ ನಿರಂತರ ಹೋರಾಟ ನಡೆಸುತ್ತ ಬಂದಿದ್ದರು. ಈ ಬೇಡಿಕೆಯ ಸಾಧಕ–ಬಾಧಕಗಳನ್ನು ಪರಿಶೀಲಿಸಲು ಹಿರಿಯ ಶಿಕ್ಷಣ ತಜ್ಞ ಡಾ. ಎಂ. ಮೋಹನ್ ಆಳ್ವ ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ತಜ್ಞರ ಸಮಿತಿಯು ಸರ್ಕಾರಕ್ಕೆ ವಿಸ್ತೃತ ವರದಿ ಸಲ್ಲಿಸಿತ್ತು.
ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾದ ತುಳುವಿಗೆ ರಾಜ್ಯ ಸರ್ಕಾರದ ಈ ಮಾನ್ಯತೆ ದೊರೆತಿರುವುದು, ಸಂವಿಧಾನದ 8ನೇ ಪರಿಚ್ಛೇದಕ್ಕೆ ತುಳು ಭಾಷೆಯನ್ನು ಸೇರ್ಪಡೆಗೊಳಿಸುವ ಮುಂದಿನ ಹೋರಾಟಕ್ಕೂ ಮತ್ತಷ್ಟು ಬಲ ತುಂಬಲಿದೆ ಎಂದು ತುಳು ಭಾಷಿಗರು ಹರ್ಷ ವ್ಯಕ್ತಪಡಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD




























