ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂ. ವಂಚನೆ: ಚೈತ್ರ ಕುಂದಾಪುರ ಸಹಿತ ಇಬ್ಬರು ವಶಕ್ಕೆ

ಉಡುಪಿ: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬೈಂದೂರಿನ ಬಿಜೆಪಿ ಮುಖಂಡರೊಬ್ಬರಿಗೆ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂ. ವಂಚಿಸಿರುವ ಆರೋಪದಡಿ ಸಂಘ ಪರಿವಾರದ ನಾಯಕಿ ಚೈತ್ರಾ ಕುಂದಾಪುರ ಸೇರಿದಂತೆ ಇಬ್ಬರನ್ನು ಬೆಂಗಳೂರು ಸಿಸಿಬಿ ಪೊಲೀಸರು ಉಡುಪಿಯಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ.
ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಉದ್ಯಮಿಗೆ ಚೈತ್ರಾ ಕುಂದಾಪುರ ಸಂಗಡಿಗರೊಂದಿಗೆ ಸೇರಿಕೊಂಡು ಸುಮಾರು ಏಳು ಕೋಟಿ ರೂಪಾಯಿ ವಂಚನೆ ಮಾಡಿದ್ದರು ಎಂಬ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿತ್ತು.
ಈ ಬಗ್ಗೆ ಉದ್ಯಮಿ ಬೆಂಗಳೂರಿನಲ್ಲಿ ದೂರು ನೀಡಿದ್ದರು ಎಂಬ ಬಗ್ಗೆ ಮಾಹಿತಿ ಇದೆ. ಈ ಪ್ರಕರಣಕ್ಕೆ ಸಂಬಂಧಿಸಿ ಕಳೆದ ಕೆಲ ಸಮಯದಿಂದ ತಲೆಮರೆಸಿಕೊಂಡಿದ್ದ ಚೈತ್ರಾ ಕುಂದಾಪುರ ಅವರನ್ನು ಉಡುಪಿ ಕೃಷ್ಣ ಮಠದ ಪಾರ್ಕಿಂಗ್ ಏರಿಯಾದಲ್ಲಿ ಬೆಂಗಳೂರಿನ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಒಟ್ಟು ಆರು ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ